Revised Common Lectionary (Complementary)
ರಚನೆಗಾರ: ದಾವೀದ.
5 ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು.
ನನ್ನ ಆಲೋಚನೆಗಳಿಗೆ ಗಮನಕೊಡು.
2 ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು.
ನನ್ನ ಪ್ರಾರ್ಥನೆಯನ್ನು ಆಲೈಸು.
3 ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರುನೋಡುವೆನು;
ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ.
4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ.
ನಿನ್ನ ಸನ್ನಿಧಿಯಲ್ಲಿ ದುಷ್ಟರು ಇರಲಾರರು.
5 ನಿನ್ನನ್ನು ನಂಬದವರು ನಿನ್ನ ಬಳಿಗೆ ಬರಲಾರರು;
ದುಷ್ಟರನ್ನು ನೀನು ದ್ವೇಷಿಸುವೆ.
6 ಸುಳ್ಳಾಡುವವರನ್ನು ನೀನು ನಾಶಪಡಿಸುವೆ.
ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.
7 ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು,
ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು.
8 ಯೆಹೋವನೇ, ವೈರಿಗಳು ನನ್ನನ್ನು ಗಮನಿಸುತ್ತಿರುವುದರಿಂದ
ನಿನ್ನ ನೀತಿಯ ಮಾರ್ಗವನ್ನು ನನಗೆ ತೋರಿಸಿ,
ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
9 ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ.
ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ
ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ.
ಅವರ ಗಂಟಲು ತೆರೆದ ಸಮಾಧಿಗಳಂತಿವೆ.
10 ದೇವರೇ, ಅವರನ್ನು ದಂಡಿಸು!
ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ.
ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.
ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು.
11 ದೇವರಲ್ಲಿ ಭರವಸವಿಟ್ಟಿರುವ ಜನರೆಲ್ಲರೂ ಸದಾಕಾಲ ಸಂತೋಷವಾಗಿರಲಿ.
ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು.
12 ಯೆಹೋವನೇ, ನೀನು ನೀತಿವಂತರಿಗೆ ಒಳ್ಳೆಯದನ್ನೇ ಮಾಡುವೆ;
ನೀನು ಅವರನ್ನು ವಿಶಾಲವಾದ ಗುರಾಣಿಯಂತೆ ಸಂರಕ್ಷಿಸುವೆ.
13 ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ?
ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ?
ನೀನು ಎಂಥವಳೆಂದು ಹೇಳಲಿ?
ನನ್ನ ಚೀಯೋನೇ,
ನಾನು ನಿನ್ನನ್ನು ಹೇಗೆ ಸಂತೈಸಲಿ.
ನಿನ್ನ ವಿನಾಶವು ಸಾಗರದಷ್ಟು ಅಪಾರ.
ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.
14 ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು.
ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ.
ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ.
ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ.
ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು.
ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.
15 ಪಕ್ಕದಲ್ಲಿ ದಾರಿ ಹಿಡಿದುಹೋಗುವ ಜನರು
ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ.
ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ
ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ.
“ಜನರಿಂದ ‘ಪರಿಪೂರ್ಣ ಸುಂದರ ನಗರ’
‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು
ಇದೇ ನಗರವೇ?” ಎಂದು ಅವರು ಕೇಳುತ್ತಾರೆ.
16 ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ
ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ.
“ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು!
ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು.
ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು”
ಎಂದು ಅವರು ಅನ್ನುತ್ತಾರೆ.
17 ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು.
ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ.
ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ.
ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ.
ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ.
ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.
ಬಾರ್ನಬ ಮತ್ತು ಸೌಲರಿಗೆ ವಹಿಸಲಾದ ವಿಶೇಷಕಾರ್ಯ
13 ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ. 2 ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.
3 ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.
ಸೈಪ್ರಸ್‌ನಲ್ಲಿ ಬಾರ್ನಬ ಮತ್ತು ಸೌಲರು
4 ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು. 5 ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)
6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಫೋಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಫೋಸಿನಲ್ಲಿ ಕಂಡರು. ಅವನ ಹೆಸರು “ಬಾರ್ ಯೇಸು.” ಅವನೊಬ್ಬ ಸುಳ್ಳುಪ್ರವಾದಿ. 7 ಸೆರ್ಗ್ಯಪೌಲನೆಂಬ ರಾಜ್ಯಪಾಲನ ಹತ್ತಿರದಲ್ಲೇ ಅವನು ಯಾವಾಗಲೂ ಇರುತ್ತಿದ್ದನು. ಸೆರ್ಗ್ಯಪೌಲನು ಜ್ಞಾನವಂತನಾಗಿದ್ದನು. ಅವನು ದೇವರ ವಾಕ್ಯವನ್ನು ಕೇಳಲು ಬಾರ್ನಬ ಮತ್ತು ಸೌಲರನ್ನು ಆಮಂತ್ರಿಸಿದನು. 8 ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು. 9 ಆದರೆ ಪೌಲನು (ಸೌಲನ ಮತ್ತೊಂದು ಹೆಸರು ಪೌಲ.) ಪವಿತ್ರಾತ್ಮಭರಿತನಾದನು. ಪೌಲನು ಎಲಿಮನನ್ನು ದಿಟ್ಟಿಸಿ ನೋಡಿ, 10 ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ! 11 ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು.
ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು. 12 ಇದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ನಂಬಿಕೊಂಡನು. ಪ್ರಭುವಿನ ವಿಷಯವಾದ ಉಪದೇಶವನ್ನು ಕೇಳಿ ವಿಸ್ಮಿತನಾದನು.
Kannada Holy Bible: Easy-to-Read Version. All rights reserved. © 1997 Bible League International