Revised Common Lectionary (Complementary)
ಜ್ಞಾಪಕಾರ್ಥ ನೈವೇದ್ಯ. ಸಮರ್ಪಣೆಯ ಹಾಡು. ರಚನೆಗಾರ: ದಾವೀದ.
70 ದೇವರೇ, ನನ್ನನ್ನು ರಕ್ಷಿಸು!
ದೇವರೇ, ಬೇಗನೆ ನನಗೆ ಸಹಾಯಮಾಡು!
2 ನನ್ನನ್ನು ಕೊಲ್ಲಲು ಪ್ರಯತ್ನಿಸುವವರು
ನಿರಾಶೆಗೊಂಡು ಅಪಮಾನ ಹೊಂದಲಿ.
ನನಗೆ ಕೇಡುಮಾಡಬೇಕೆಂದಿರುವವರು
ಅವಮಾನಗೊಂಡು ಓಡಿಹೋಗಲಿ.
3 ನನ್ನನ್ನು ಗೇಲಿಮಾಡುವವರು
ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ.
4 ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ.
ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ.
5 ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ!
ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು!
ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ.
ಯೆಹೋವನೇ ತಡಮಾಡಬೇಡ!
ಇಸ್ರೇಲಿಗೆ ಎಚ್ಚರಿಕೆಯ ಮಾತು
3 ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ. 2 “ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”
ಇಸ್ರೇಲಿನ ಶಿಕ್ಷೆಯ ಕಾರಣ
3 ಇಬ್ಬರು ಒಟ್ಟಾಗಿ ನಡೆಯಬೇಕಾದರೆ
ಅದಕ್ಕೆ ಅವರಿಬ್ಬರೂ ಒಪ್ಪಿಕೊಂಡಿರಲೇಬೇಕು.
4 ಅಡವಿಯಲ್ಲಿರುವ ಸಿಂಹವು
ಪ್ರಾಣಿಯನ್ನು ಹಿಡಿದ ನಂತರವೇ ಗರ್ಜಿಸುವದು.
ಪ್ರಾಯದ ಸಿಂಹವು ತನ್ನ ಗವಿಯಲ್ಲಿ ಗರ್ಜಿಸಿದರೆ
ಅದು ಒಂದು ಪ್ರಾಣಿಯನ್ನು ಹಿಡಿಯಿತು ಎಂದು ಅರ್ಥ.
5 ಬಲೆಯಲ್ಲಿ ಆಹಾರ ಹಾಕದಿದ್ದರೆ
ಪಕ್ಷಿಯು ಬಲೆಯೊಳಗೆ ಸಿಕ್ಕಿಹಾಕಿಕೊಳ್ಳುವುದಿಲ್ಲ.
ಏನೂ ಸಿಕ್ಕಿಕೊಳ್ಳದೆ
ಬೋನು ಮುಚ್ಚಿಕೊಳ್ಳುವುದೇ?
6 ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು
ಖಂಡಿತವಾಗಿ ಹೆದರಿ ನಡುಗುವರು.
ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ
ಅದನ್ನು ಬರಮಾಡಿದಾತನು ಯೆಹೋವನೇ.
7 ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು. 8 ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.
9-10 ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”
11 ಆದ್ದರಿಂದ ಯೆಹೋವನು ಹೇಳುವುದೇನೆಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಿಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.”
12 ಯೆಹೋವನು ಹೇಳುವುದೇನೆಂದರೆ,
“ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ
ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು.
ಆದರೆ ಕುರುಬನು ಆ ಕುರಿಮರಿಯ
ಒಂದು ಭಾಗವನ್ನು ಮಾತ್ರ ಕಾಪಾಡಿಯಾನು.
ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ
ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು.
ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ.
ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ
ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”
ಆರನೇ ತುತೂರಿಯ ಪ್ರಾರಂಭ
13 ಆರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೇವರ ಸನ್ನಿಧಿಯಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲಿನ ಕೊಂಬುಗಳಿಂದ ಬರುತ್ತಿರುವ ಧ್ವನಿಯನ್ನು ನಾನು ಕೇಳಿದೆನು. 14 ಆ ಧ್ವನಿಯು ತುತೂರಿಯಿದ್ದ ಆರನೆಯ ದೇವದೂತನಿಗೆ, “ಯೂಫ್ರಟಿಸ್ ಎಂಬ ಮಹಾನದಿಯ ಬಳಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು. 15 ಈ ನಾಲ್ಕು ಮಂದಿ ದೇವದೂತರನ್ನು ಇದೇ ವರ್ಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು. 16 ಅವರಲ್ಲಿದ್ದ ಅಶ್ವದಳದ ಸೈನಿಕರ ಸಂಖ್ಯೆ ಇಪ್ಪತ್ತುಕೋಟಿ ಎಂದು ನನಗೆ ಕೇಳಿಸಿತು.
17 ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು. 18 ಭೂಮಿಯ ಮೇಲಿನ ಜನರಲ್ಲಿ ಮೂರನೆಯ ಒಂದು ಭಾಗವು ಕುದುರೆಗಳ ಬಾಯಿಂದ ಹೊರಬಂದ ಬೆಂಕಿ, ಹೊಗೆ ಮತ್ತು ಗಂಧಕಗಳ ಉಪದ್ರವಗಳಿಂದ ಕೊಲ್ಲಲ್ಪಟ್ಟಿತು. 19 ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ಜನರನ್ನು ಕಚ್ಚಬಲ್ಲ ಹೆಡೆಗಳುಳ್ಳ ಸರ್ಪಗಳಂತೆ ಇದ್ದವು.
20 ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ. 21 ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.
Kannada Holy Bible: Easy-to-Read Version. All rights reserved. © 1997 Bible League International