Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 38

ಜ್ಞಾಪಕಾರ್ಥ ನೈವೇದ್ಯ ಸಮರ್ಪಣೆಯ ಹಾಡು. ರಚನೆಗಾರ: ದಾವೀದ.

38 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ.
    ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ.
ನಿನ್ನಿಂದ ನನಗೆ ನೋವಾಗಿದೆ.
    ನಿನ್ನ ಬಾಣಗಳು ನನಗೆ ನಾಟಿಕೊಂಡಿವೆ.
ನೀನು ಶಿಕ್ಷಿಸಿದ್ದರಿಂದ ನನ್ನ ಇಡೀ ದೇಹ ಹುಣ್ಣಾಗಿದೆ.
    ನಾನು ಪಾಪಮಾಡಿದ್ದರಿಂದ ನನ್ನ ಎಲುಬುಗಳೆಲ್ಲ ನೋಯುತ್ತಿವೆ.
ನಾನು ಅಪರಾಧಿಯಾಗಿದ್ದೇನೆ.
    ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.
ನಾನೊಂದು ಮೂರ್ಖ ಕೆಲಸವನ್ನು ಮಾಡಿದೆನು.
    ಈಗ ನನಗೆ ಕೀವು ಸೋರಿ ದುರ್ವಾಸನೆಯಿಂದಿರುವ ಹುಣ್ಣುಗಳಾಗಿವೆ.
ನಾನು ಬಾಗಿ ಕುಗ್ಗಿಹೋಗಿದ್ದೇನೆ.
    ನಾನು ದಿನವೆಲ್ಲಾ ನಿರುತ್ಸಾಹನಾಗಿದ್ದೇನೆ.
ನನಗೆ ಜ್ವರವಿದೆ,
    ನನ್ನ ಇಡೀ ದೇಹ ನೋಯುತ್ತಿದೆ.
ನನಗೆ ಬಹಳ ನೋವಿರುವುದರಿಂದ ಜೋಮು ಹಿಡಿದಂತಿದೆ.
    ಹೃದಯದ ವೇದನೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.
ನನ್ನ ಒಡೆಯನೇ, ನೀನು ನನ್ನ ನರಳಾಟವನ್ನು ಕೇಳಿರುವೆ.
    ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
10 ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ;
    ನನ್ನ ದೃಷ್ಟಿಯು ಹಿಂಗಿಹೋಗಿದೆ.
11 ನಾನು ಅಸ್ವಸ್ಥನಾಗಿರುವುದರಿಂದ
    ನನ್ನ ಸ್ನೇಹಿತರಾಗಲಿ ನೆರೆಯವರಾಗಲಿ ನನ್ನನ್ನು ನೋಡಲು ಬರುವುದಿಲ್ಲ.
    ನನ್ನ ಕುಟುಂಬದವರು ನನ್ನ ಸಮೀಪಕ್ಕೂ ಬರುವುದಿಲ್ಲ.
12 ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ;
    ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ;
    ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.
13 ಆದರೆ ನಾನು ಕಿವುಡನಂತೆ ಕೇಳದವನಾಗಿದ್ದೇನೆ.
    ಮೂಕನಂತೆ ಮಾತಾಡದವನಾಗಿದ್ದೇನೆ.
14 ನಾನು ಕಿವಿಕೇಳಿಸದವನಂತೆಯೂ
    ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.
15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ.
    ನನ್ನ ಒಡೆಯನಾದ ದೇವರೇ, ನನಗೆ ಉತ್ತರ ನೀಡು.
16 ನಾನು ಏನೇ ಹೇಳಿದರೂ ವೈರಿಗಳು ನನ್ನನ್ನು ನೋಡಿ ನಗುವರು.
    ನನ್ನ ಕಾಯಿಲೆಯು ಪಾಪದ ಫಲವೆಂದು ಹೇಳುವರು.
17 ನಾನು ಅಪರಾಧಿಯೆಂದು ನನಗೆ ಗೊತ್ತಿದೆ;
    ನನ್ನ ನೋವನ್ನು ಮರೆಯಲಾರೆ.
18 ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ.
    ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ.
19 ನನ್ನ ವೈರಿಗಳು ಚುರುಕಾಗಿಯೂ ಬಲಶಾಲಿಗಳಾಗಿಯೂ ಇದ್ದಾರೆ.
    ಅವರು ಎಷ್ಟೋ ಸುಳ್ಳುಗಳನ್ನು ಹೇಳಿದರು.
20 ನಾನು ಉಪಕಾರವನ್ನು ಮಾಡಿದ್ದರೂ
    ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು.
ನಾನು ಒಳ್ಳೆಯದನ್ನು ಮಾಡಬೇಕೆಂದರೂ
    ಅವರು ನನ್ನನ್ನು ವಿರೋಧಿಸುತ್ತಾರೆ.
21 ಯೆಹೋವನೇ, ನನ್ನನ್ನು ಕೈಬಿಡಬೇಡ!
    ನನ್ನ ದೇವರೇ, ನನ್ನ ಸಮೀಪದಲ್ಲೇ ಇರು!
22 ಯೆಹೋವನೇ, ನನ್ನ ರಕ್ಷಕನೇ,
    ಬೇಗನೆ ಬಂದು ನನಗೆ ಸಹಾಯಮಾಡು!

ಮೀಕ 4:1-7

ಜೆರುಸಲೇಮಿನಿಂದ ಧರ್ಮಶಾಸ್ತ್ರ ಬರುವದು

ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು
    ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು.
ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು.
    ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.
ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು.
    “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ,
    ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ.
ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು.
    ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು.

ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ
    ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.
ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು.
    ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು.
ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು.
    ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು.
    ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು.
ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು.
    ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.
ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು.
    ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು.
ಯಾರೂ ಅವರನ್ನು ಭಯಗೊಳಿಸುವದಿಲ್ಲ.
    ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.

ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ.
    ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.

ರಾಜ್ಯವು ತಿರುಗಿ ತರಲ್ಪಡುವದು

ಯೆಹೋವನು ಹೇಳುವುದೇನೆಂದರೆ,
    “ಜೆರುಸಲೇಮು ಗಾಯಗೊಂಡು ಕುಂಟಾಗಿದೆ;
ತಳ್ಳಲ್ಪಟ್ಟಿದೆ; ಗಾಯಗೊಂಡು ಶಿಕ್ಷಿಸಲ್ಪಟ್ಟಿದೆ.
    ಆದರೆ ನಾನು ಆಕೆಯನ್ನು ನನ್ನ ಬಳಿಗೆ ಬರಮಾಡುವೆನು.

“ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು.
    ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು.
    ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.”
ಯೆಹೋವನು ಅವರ ಅರಸನಾಗುವನು.
    ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು.

2 ಕೊರಿಂಥದವರಿಗೆ 1:1-11

ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.

ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಪೌಲನು ದೇವರಿಗೆ ಸಲ್ಲಿಸುವ ಕೃತಜ್ಞತಾಸ್ತುತಿ

ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ದೇವರು ಕನಿಕರದಿಂದ ತುಂಬಿರುವ ತಂದೆಯಾಗಿದ್ದಾನೆ. ಆತನು ಸಕಲ ವಿಧವಾಗಿ ಸಂತೈಸುವ ದೇವರಾಗಿದ್ದಾನೆ. ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ. ನಾವು ಕ್ರಿಸ್ತನ ಅನೇಕ ಬಾಧೆಗಳಲ್ಲಿ ಪಾಲುಗಾರರಾಗುತ್ತೇವೆ. ಅದೇ ರೀತಿಯಲ್ಲಿ, ಕ್ರಿಸ್ತನ ಮೂಲಕ ಹೇರಳವಾದ ಆದರಣೆಯು ನಮಗೆ ಬರುತ್ತದೆ. ನಮಗೆ ಸಂಕಷ್ಟಗಳಿರುವುದಾದರೆ, ಆ ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ. ನಿಮ್ಮ ವಿಷಯದಲ್ಲಿ ನಮಗೆ ಬಲವಾದ ನಿರೀಕ್ಷೆಯಿದೆ. ನೀವು ನಮ್ಮ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ನಮ್ಮ ಆದರಣೆಯಲ್ಲಿಯೂ ನೀವು ಪಾಲುಗಾರರಾಗುತ್ತೀರಿ ಎಂಬುದು ನನಗೆ ತಿಳಿದಿದೆ.

ಸಹೋದರ ಸಹೋದರಿಯರೇ, ನಾವು ಏಷ್ಯಾ ಪ್ರಾಂತ್ಯದಲ್ಲಿ ಅನುಭವಿಸಿದ ಸಂಕಟದ ಬಗ್ಗೆ ನೀವು ತಿಳಿದುಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಲ್ಲಿ ನಮಗೆ ಅಪಾರವಾದ ಭಾರಗಳಿದ್ದವು. ಆ ಭಾರಗಳು ನಮ್ಮ ಸ್ವಂತ ಶಕ್ತಿಗಿಂತಲೂ ಅಧಿಕವಾಗಿದ್ದವು. ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆಯನ್ನು ಸಹ ನಾವು ಬಿಟ್ಟುಕೊಟ್ಟೆವು. ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು. 10 ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು. 11 ಇದಲ್ಲದೆ ನೀವು ನಿಮ್ಮ ಪ್ರಾರ್ಥನೆಗಳ ಮೂಲಕ ನಮಗೆ ಸಹಾಯ ಮಾಡಬಲ್ಲಿರಿ. ಆಗ, ನಿಮ್ಮ ಪ್ರಾರ್ಥನೆಗಳ ನಿಮಿತ್ತ ದೇವರು ನಮ್ಮನ್ನು ಆಶೀರ್ವದಿಸಿರುವುದನ್ನು ಕಂಡು ಅನೇಕರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International