Revised Common Lectionary (Complementary)
ರಚನೆಗಾರ: ಸೊಲೊಮೋನ.
72 ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪುನೀಡಲು ರಾಜನಿಗೆ ಕಲಿಸಿಕೊಡು.
ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು.
2 ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿಯೂ
ತೀರ್ಪುಮಾಡಲು ಅವನಿಗೆ ಸಹಾಯಮಾಡು.
3 ಪ್ರಖ್ಯಾತವಾದ ಬೆಟ್ಟಗುಡ್ಡಗಳಲ್ಲೆಲ್ಲಾ,
ದೇಶದಲ್ಲೆಲ್ಲಾ ಶಾಂತಿಯೂ ನ್ಯಾಯವೂ ನೆಲೆಸಿರಲಿ.
4 ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ.
ಅವರಿಗೆ ಕೇಡುಮಾಡುವವರನ್ನು ರಾಜನು ದಂಡಿಸಲಿ.
5 ಸೂರ್ಯಚಂದ್ರರು ಆಕಾಶದಲ್ಲಿ ಇರುವವರೆಗೂ
ಜನರು ರಾಜನಿಗೆ ಭಯಪಡಲಿ; ಅವನನ್ನು ಗೌರವಿಸಲಿ.
6 ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ
ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು.
7 ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ.
ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ.
8 ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ
ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ.
9 ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ.
ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ.
10 ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ.
ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.
11 ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ.
ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.
12 ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು.
ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು.
13 ಬಡವರೂ ಅಸಹಾಯಕರೂ ಅವನನ್ನೇ ಅವಲಂಬಿಸಿಕೊಳ್ಳುವರು.
ರಾಜನು ಅವರ ಪ್ರಾಣಗಳನ್ನು ಕಾಪಾಡುವನು.
14 ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು.
ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ.
15 ರಾಜನು ಬಹುಕಾಲ ಬಾಳಲಿ!
ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ.
ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.
ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ.
16 ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ.
ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ.
ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ.
ಬಯಲುಗಳು ಹುಲ್ಲಿನಿಂದ ಆವೃತಿಯಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ.
17 ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ.
ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ.
ಅವನಿಂದ ಜನರಿಗೆ ಆಶೀರ್ವಾದವಾಗಲಿ.
ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.
18 ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ.
ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು!
19 ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ!
ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ!
ಆಮೆನ್, ಆಮೆನ್!
20 (ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯಗೊಂಡವು.)
ಬಿಳಾಮನ ಕೊನೆಯ ಸಂದೇಶ
15 ಆಗ ಬಿಳಾಮನು ಹೀಗೆಂದನು:
“ಬೆಯೋರನ ಮಗನಾದ ಬಿಳಾಮನ ಸಂದೇಶವಿದು:
ನಾನು ಸ್ಪಷ್ಟವಾಗಿ ನೋಡುತ್ತಿರುವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೇನೆ.
16 ನಾನು ದೇವರ ಮುಂದೆ ಅಡ್ಡಬೀಳುತ್ತೇನೆ,
ಆದರೆ ನನ್ನ ಕಣ್ಣುಗಳು ಮುಚ್ಚಲ್ಪಟ್ಟಿಲ್ಲ.
ನಾನು ದೇವರ ವಾಕ್ಯಗಳನ್ನು ಕೇಳುತ್ತಿದ್ದೇನೆ.
ನಾನು ಮಹೋನ್ನತನಾದ ದೇವರಿಂದ ಜ್ಞಾನವನ್ನು ಹೊಂದಿಕೊಳ್ಳುತ್ತಿದ್ದೇನೆ.
ಸರ್ವಶಕ್ತನಾದ ದೇವರು ತೋರಿಸುವ ಸಂಗತಿಗಳನ್ನು
ನಾನು ನೋಡುತ್ತಿದ್ದೇನೆ.
17 “ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ.
ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ.
ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು.
ಇಸ್ರೇಲರಿಂದ ಅರಸನೊಬ್ಬನು ಬರುವನು.
ಅವನು ಮೋವಾಬ್ಯರ ತಲೆಯನ್ನು ಜಜ್ಜುವನು.
ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.
18 ಇಸ್ರೇಲರು ಬಲಿಷ್ಠರಾಗುವರು.
ಅವರು ಎದೋಮ್ ದೇಶವನ್ನು ಪಡೆಯುವರು.
ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.
19 “ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು.
ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.”
ಜಕರೀಯನ ಪ್ರವಾದನೆ
67 ಬಳಿಕ ಯೋಹಾನನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:
68 “ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ.
ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.
69 ತನ್ನ ಸೇವಕನಾದ ದಾವೀದನ ಮನೆತನದಿಂದ
ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ.
70 ಇದನ್ನು ಆತನು ಪೂರ್ವಕಾಲದ
ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ.
71 ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ
ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ.
72 ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ
ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.
73 ನಮ್ಮ ವೈರಿಗಳ ಹಿಡಿತದಿಂದ ನಮ್ಮನ್ನು ಬಿಡಿಸುವುದಾಗಿ ದೇವರು ನಮ್ಮ ಪಿತೃವಾದ ಅಬ್ರಹಾಮನಿಗೆ ವಾಗ್ದಾನ ಮಾಡಿದ್ದಾನೆ.
74-75 ಏಕೆಂದರೆ ನಮ್ಮ ಜೀವಮಾನವೆಲ್ಲಾ ನಾವು ಆತನ ಸನ್ನಿಧಿಯಲ್ಲಿ ನೀತಿವಂತರೂ ಪರಿಶುದ್ಧರೂ ಆಗಿದ್ದು
ಭಯವಿಲ್ಲದೆ ಆತನ ಸೇವೆ ಮಾಡಬೇಕೆಂಬುದೇ ಆತನ ಉದ್ದೇಶವಾಗಿತ್ತು.
76 “ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ.
ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.
77 ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.
78 “ನಮ್ಮ ದೇವರ ಮಹಾಕರುಣೆಯಿಂದ
ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.
79 ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು.
ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”
Kannada Holy Bible: Easy-to-Read Version. All rights reserved. © 1997 Bible League International