Revised Common Lectionary (Complementary)
ಕೃತಜ್ಞತಾ ಸ್ತುತಿಗೀತೆ.
100 ಸಮಸ್ತ ಭೂನಿವಾಸಿಗಳೇ,
ಯೆಹೋವನಿಗೆ ಗಾಯನ ಮಾಡಿರಿ!
2 ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ;
ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!
3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ.
ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು.
ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.
4 ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ.
ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ.
ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.
5 ಯೆಹೋವನು ಒಳ್ಳೆಯವನು!
ಆತನ ಪ್ರೀತಿಯು ಶಾಶ್ವತವಾದದ್ದು,
ಆತನ ನಂಬಿಗಸ್ತಿಕೆಯು ನಿರಂತರವಾದದ್ದು.
ಮೋಶೆ ಈಜಿಪ್ಟಿಗೆ ಹಿಂತಿರುಗಿದ್ದು
18 ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು.
ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.
19 ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು.
20 ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು.[a]
21 ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ. 22 ಆಗ ನೀನು ಫರೋಹನಿಗೆ, ‘ಇಸ್ರೇಲ್ ಜನಾಂಗವು ಯೆಹೋವನಿಗೆ ಚೊಚ್ಚಲು ಮಗನಂತಿದೆ. 23 ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.
ಯೇಸು ಮೋಶೆಗಿಂತ ಶ್ರೇಷ್ಠನು
3 ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು. 2 ಯೇಸುವನ್ನು ದೇವರು ನಮ್ಮ ಬಳಿಗೆ ಕಳುಹಿಸಿ, ಆತನನ್ನು ನಮ್ಮ ಪ್ರಧಾನಯಾಜಕನನ್ನಾಗಿ ಮಾಡಿದನು. ಆತನು ಮೋಶೆಯಂತೆ ದೇವರಿಗೆ ನಂಬಿಗಸ್ತನಾಗಿದ್ದನು. ದೇವರ ಮನೆಯಲ್ಲಿ ದೇವರ ಇಷ್ಟಕ್ಕನುಗುಣವಾಗಿ ಮಾಡಬೇಕಾದುದನ್ನೆಲ್ಲ ಆತನು ಮಾಡಿದನು. 3 ಒಬ್ಬ ಮನುಷ್ಯನು ಮನೆಯನ್ನು ಕಟ್ಟಿದಾಗ, ಜನರು ಮನೆಗಿಂತಲೂ ಅವನಿಗೇ ಹೆಚ್ಚು ಮಾನ್ಯತೆಯನ್ನು ಕೊಡುವಂತೆಯೇ ಯೇಸು ಮೋಶೆಗಿಂತ ಹೆಚ್ಚು ಮಾನ್ಯತೆಯನ್ನು ಹೊಂದಿದ್ದಾನೆ. 4 ಪ್ರತಿಯೊಂದು ಮನೆಯು ಯಾರಾದರೊಬ್ಬರಿಂದ ಕಟ್ಟಲ್ಪಟ್ಟಿರಬೇಕು. ಆದರೆ ದೇವರು ಎಲ್ಲವನ್ನು ನಿರ್ಮಿಸಿದನು. 5 ದೇವರ ಮನೆಯಲ್ಲೆಲ್ಲಾ ಮೋಶೆಯು ಸೇವಕನಂತೆ ನಂಬಿಗಸ್ತನಾಗಿದ್ದನು. ಮುಂದೆ ಪ್ರಕಟವಾಗಲಿದ್ದ ಸಂಗತಿಗಳಿಗೆ ಅವನು ಸಾಕ್ಷಿಯಾಗಿದ್ದನು. 6 ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.
Kannada Holy Bible: Easy-to-Read Version. All rights reserved. © 1997 Bible League International