Revised Common Lectionary (Complementary)
8 ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ
ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.
9 ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ.
ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು.
10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವೂ ನಿನ್ನನ್ನು ಸ್ತುತಿಸುತ್ತವೆ.
ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
11 ಅವರು ನಿನ್ನ ರಾಜ್ಯದ ಮಹತ್ವವನ್ನು ಕುರಿತು ಹೇಳುವರು.
ನಿನ್ನ ಪರಾಕ್ರಮವನ್ನು ವರ್ಣಿಸುವರು.
12 ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದುಕೊಳ್ಳುವರು.
ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು.
13 ಯೆಹೋವನೇ, ನಿನ್ನ ರಾಜ್ಯವು ಶಾಶ್ವತವಾಗಿದೆ.
ನೀನು ಎಂದೆಂದಿಗೂ ಆಳುವೆ.
14 ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ
ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.
ದೀಪಸ್ತಂಭವೂ, ಎರಡು ಆಲೀವ್ ಮರಗಳೂ
4 ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಬಂದು ನನ್ನನ್ನೆಬ್ಬಿಸಿದನು. ನಾನು ನಿದ್ರೆಯಿಂದ ಎದ್ದೇಳುವವನಂತೆ ಇದ್ದೆನು. 2 ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು.
ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು. 3 ಆ ಬೋಗುಣಿಯ ಬಳಿಯಲ್ಲಿ ಎರಡು ಆಲೀವ್ ಮರಗಳಿದ್ದವು. ಒಂದು ಬಲಬದಿಯಲ್ಲಿಯೂ ಇನ್ನೊಂದು ಎಡಬದಿಯಲ್ಲಿಯೂ ಇತ್ತು. ಈ ಮರಗಳು ದೀಪಗಳಿಗೆ ಬೇಕಾದ ಎಣ್ಣೆಯನ್ನು ತಯಾರು ಮಾಡುತ್ತಿದ್ದವು.” 4 ಆಗ ನಾನು ನನ್ನ ಜೊತೆ ಮಾತನಾಡುತ್ತಿದ್ದ ದೂತನೊಡನೆ, “ಸ್ವಾಮಿ, ಇವುಗಳ ಅರ್ಥವೇನು?” ಎಂದು ಕೇಳಿದೆನು.
5 ಅವನು ಹೀಗೆ ಹೇಳಿದನು: “ಈ ವಿಷಯಗಳು ಏನೆಂದು ನಿನಗೆ ತಿಳಿಯಲಿಲ್ಲವೇ?”
ನಾನು, “ಇಲ್ಲ” ಅಂದೆನು.
6 ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ. 7 ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”
ಯೇಸು ತಂದೆಗೆ ಮಾಡಿದ ಪ್ರಾರ್ಥನೆ
(ಮತ್ತಾಯ 11:25-27; 13:16-17)
21 ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.
22 “ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.”
23 ಬಳಿಕ ಯೇಸು ತನ್ನ ಶಿಷ್ಯರ ಕಡೆಗೆ ತಿರುಗಿ ನೋಡಿದನು. ಅಲ್ಲಿ ಆತನ ಶಿಷ್ಯರು ಮಾತ್ರವಿದ್ದರು. ಯೇಸು ಅವರಿಗೆ, “ಈಗ ನಡೆಯುವ ಸಂಗತಿಗಳನ್ನು ನೋಡುತ್ತಿರುವ ನೀವು ಧನ್ಯರು! 24 ಅನೇಕ ಪ್ರವಾದಿಗಳೂ ಅರಸರೂ ಈಗ ನೀವು ನೋಡುತ್ತಿರುವ ಈ ಸಂಗತಿಗಳನ್ನು ನೋಡಬೇಕೆಂದು ಮತ್ತು ಈಗ ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದನು.
Kannada Holy Bible: Easy-to-Read Version. All rights reserved. © 1997 Bible League International