Revised Common Lectionary (Complementary)
ರಚನೆಗಾರ: ಆಸಾಫ.
81 ನಮಗೆ ಬಲಪ್ರದನಾಗಿರುವ ದೇವರಿಗೆ ಸಂತಸದಿಂದ ಹಾಡಿರಿ.
ಇಸ್ರೇಲಿನ ದೇವರಿಗೆ ಆನಂದಘೋಷ ಮಾಡಿರಿ.
2 ವಾದ್ಯವನ್ನು ನುಡಿಸಲಾರಂಭಿಸಿರಿ;
ದಮ್ಮಡಿಯನ್ನು ಬಡಿಯಿರಿ.
ಇಂಪಾದ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನು ಬಾರಿಸಿರಿ.
3 ಅಮಾವಾಸ್ಯೆಯಲ್ಲಿಯೂ ನಮ್ಮ ರಜಾಕಾಲವಾದ
ಪೂರ್ಣಿಮೆಯಲ್ಲಿಯೂ ತುತ್ತೂರಿಯನ್ನು ಊದಿರಿ.
4 ಇದು ಇಸ್ರೇಲರಿಗೆ ಕಟ್ಟಳೆಯಾಗಿದೆ.
ಯಾಕೋಬ್ಯರ ದೇವರು ಈ ಆಜ್ಞೆಯನ್ನು ಕೊಟ್ಟನು.
5 ಆತನು ಯೋಸೇಫನನ್ನು[a] ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಾಗ
ಅವನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡನು.
ಈಜಿಪ್ಟಿನಲ್ಲಿ ನಾವು ಕೇಳಿದ್ದು ನಮಗೆ ಅರ್ಥವಾಗದ ಭಾಷೆಯನ್ನೇ!
6 ಆತನು ಹೀಗೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು.
ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.
7 ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ.
ಆಗ ನಾನು ನಿಮ್ಮನ್ನು ಬಿಡಿಸಿದೆನು.
ನಾನು ಕಾರ್ಮೋಡದಲ್ಲಿ ಮರೆಯಾಗಿದ್ದರೂ ನಿಮಗೆ ಉತ್ತರಿಸಿದೆನು.
ನಾನು ನಿಮ್ಮನ್ನು ಮೆರೀಬಾದ ನೀರಿನಿಂದ ಪರೀಕ್ಷಿಸಿದೆನು.”
8 “ನನ್ನ ಜನರೇ, ನನಗೆ ಕಿವಿಗೊಡಿರಿ, ನಾನು ನಿಮಗೆ ಒಡಂಬಡಿಕೆಯನ್ನು ಕೊಡುತ್ತಿರುವೆ.
ಇಸ್ರೇಲೇ, ದಯವಿಟ್ಟು ಕಿವಿಗೊಡು!
9 ಪರದೇಶದವರು ಆರಾಧಿಸುವ
ಯಾವ ಸುಳ್ಳು ದೇವರುಗಳನ್ನೂ ಪೂಜಿಸಬೇಡ.
10 ಯೆಹೋವನಾದ ನಾನೇ ನಿನ್ನ ದೇವರು.
ನಿನ್ನನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ನಾನೇ.
ಇಸ್ರೇಲೇ, ನಿನ್ನ ಬಾಯನ್ನು ತೆರೆ,
ಆಗ ನಾನು ನಿನಗೆ ತಿನ್ನಿಸುವೆನು.
ವಿಶೇಷ ಹಬ್ಬದ ದಿನಗಳು
23 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 2 “ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು.
ಸಬ್ಬತ್ತು
3 “ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.
ಪಸ್ಕಹಬ್ಬ
4 “ಇವುಗಳು ಯೆಹೋವನಿಂದ ಆರಿಸಲ್ಪಟ್ಟ ಹಬ್ಬದ ದಿನಗಳು. ಆ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಟಗಳು ನಡೆಸಲ್ಪಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಿಸಬೇಕು. 5 ಯೆಹೋವನ ಪಸ್ಕಹಬ್ಬವು ಮೊದಲನೆ ತಿಂಗಳ ಹದಿನಾಲ್ಕನೆಯ ದಿನದ ಸಾಯಂಕಾಲ ಅಂದರೆ ಸೂರ್ಯಸ್ತಮಾನವಾದ ಸಮಯದಲ್ಲಿ ನಡೆಯುತ್ತದೆ.
ಹುಳಿಯಿಲ್ಲದ ರೊಟ್ಟಿಯ ಹಬ್ಬ
6 “ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ. 7 ಈ ಹಬ್ಬದ ದಿನದ ಮೊದಲನೆಯ ದಿನದಲ್ಲಿ ನೀವು ವಿಶೇಷ ಸಭೆಯಾಗಿ ಸೇರಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. 8 ಏಳು ದಿನಗಳವರೆಗೆ ನೀವು ಯೆಹೋವನಿಗೆ ಹೋಮವನ್ನು ಅರ್ಪಿಸಬೇಕು. ಏಳನೆಯ ದಿನದಲ್ಲಿ ನೀವು ಇನ್ನೊಂದು ಬಾರಿ ವಿಶೇಷ ಸಭೆಯಾಗಿ ಸೇರಬೇಕು. ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.”
ಕ್ರಿಸ್ತ ಯೇಸುವಿನಲ್ಲಿ ದೇವರ ಪ್ರೀತಿ
31 ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು. 32 ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ. 33 ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ. 34 ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ. 35 ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ! 36 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:
“ನಿನಗೋಸ್ಕರವಾಗಿ ನಾವು ಎಲ್ಲಾ ಸಮಯಗಳಲ್ಲಿ ಸಾವಿನ ದವಡೆಯಲ್ಲಿದ್ದೇವೆ.
ಕೊಯ್ಯಲು ಕೊಂಡೊಯ್ಯುವ ಕುರಿಗಳಿಗಿಂತ ಕಡೆಗಣಿಸಲ್ಪಟ್ಟಿದ್ದೇವೆ.”(A)
37 ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ. 38-39 ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ.
Kannada Holy Bible: Easy-to-Read Version. All rights reserved. © 1997 Bible League International