Revised Common Lectionary (Complementary)
19 ಯೆಹೋವನೇ, ನನ್ನನ್ನು ತೊರೆಯಬೇಡ!
ನೀನೇ ನನ್ನ ಬಲ! ಬೇಗನೆ ನನಗೆ ಸಹಾಯಮಾಡು!
20 ಖಡ್ಗಕ್ಕೆ ಸಿಕ್ಕದಂತೆ ತನ್ನ ಜೀವವನ್ನು ರಕ್ಷಿಸು.
ನನ್ನ ಅಮೂಲ್ಯವಾದ ಜೀವವು ನಾಯಿಗಳ ಪಾಲಾಗದಂತೆ ರಕ್ಷಿಸು.
21 ನನ್ನನ್ನು ಸಿಂಹದ ಬಾಯಿಂದ ಬಿಡಿಸು;
ಹೋರಿಯ ಕೊಂಬುಗಳಿಂದ ನನ್ನನ್ನು ಸಂರಕ್ಷಿಸು.
22 ನಿನ್ನ ನಾಮದ ಕುರಿತು ನನ್ನ ಸಹೋದರರಿಗೆ ಹೇಳುವೆನು;
ಮಹಾಸಭೆಯಲ್ಲಿ ನಿನ್ನನ್ನು ಸುತ್ತಿಸುವೆನು.
23 ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ.
ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ!
ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ!
24 ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ;
ಆತನು ಅವರನ್ನು ದ್ವೇಷಿಸುವುದಿಲ್ಲ.
ಅವರು ಆತನನ್ನು ಕೂಗಿಕೊಳ್ಳುವಾಗ
ಆತನು ಅವರಿಗೆ ಮರೆಯಾಗುವುದಿಲ್ಲ.
25 ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು;
ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
26 ಬಡವರು ತಿಂದು ತೃಪ್ತರಾಗುವರು.
ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ!
ನಿಮ್ಮ ಹೃದಯವು ಯಾವಾಗಲೂ ಸಂತೋಷವಾಗಿರಲಿ.[a]
27 ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ.
ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.
28 ಯಾಕೆಂದರೆ ಯೆಹೋವನೇ ರಾಜನು!
ಆತನು ಜನಾಂಗಗಳನ್ನೆಲ್ಲಾ ಆಳುವನು.
ದುಷ್ಟರು ತಮ್ಮ ಜೀವಿತವನ್ನು ಬದಲಾಯಿಸಬೇಕು
59 ಇಗೋ, ನಿಮ್ಮನ್ನು ರಕ್ಷಿಸಲು ಯೆಹೋವನು ಶಕ್ತನಾಗಿದ್ದಾನೆ. ನೀವು ಸಹಾಯಕ್ಕಾಗಿ ಪ್ರಾರ್ಥಿಸುವಾಗ ಆತನು ನಿಮ್ಮನ್ನು ಆಲೈಸುವನು. 2 ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ. 3 ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳು ಅಪರಾಧಗಳಿಂದ ಅಶುದ್ಧವಾಗಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳಾಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟ ಮಾತುಗಳನ್ನಾಡುತ್ತದೆ. 4 ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ. 5 ವಿಷದ ಹಾವಿನ ಮೊಟ್ಟೆಯಿಂದ ವಿಷದ ಹಾವಿನ ಮರಿಗಳು ಹೊರಬರುವಂತೆ ಅವರ ದುಷ್ಟತನವು ಹೊರಬರುವದು. ಆ ಮೊಟ್ಟೆಯನ್ನು ನೀವು ತಿಂದರೆ ಸಾಯುವಿರಿ. ಆ ಮೊಟ್ಟೆಯನ್ನು ಒಡೆದರೆ ವಿಷದ ಹಾವು ಹೊರಬರುವದು.
ಜನರು ಹೇಳುವ ಸುಳ್ಳು, ಜೇಡರ ಬಲೆಯಂತಿರುವದು. 6 ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ.
ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು. 7 ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಕೃತ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ. 8 ಅವರಿಗೆ ಸಮಾಧಾನದ ದಾರಿಯೇ ತಿಳಿಯದು. ಅವರ ಜೀವಿತದಲ್ಲಿ ಒಳ್ಳೆಯತನವೆಂಬುದು ಇಲ್ಲ. ಅವರ ಮಾರ್ಗವು ಕಪಟತನದಿಂದ ತುಂಬಿದೆ. ಅವರಂತೆ ಜೀವಿಸುವವರಿಗೆ ಶಾಂತಿಯೇ ಇರದು.
ಅನೇಕರಿಗೆ ಸ್ವಸ್ಥತೆ
27 ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.
28 ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.
29 ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ನಂಬಿದಂತೆಯೇ ನಿಮಗೆ ಗುಣವಾಗಲಿ” ಅಂದನು. 30 ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು. 31 ಆದರೆ ಆ ಕುರುಡರು ಅಲ್ಲಿಂದ ಹೊರಟುಹೋಗಿ ಯೇಸುವಿನ ಸುದ್ದಿಯನ್ನು ಆ ಪ್ರದೇಶದ ಸುತ್ತಮುತ್ತಲೆಲ್ಲಾ ಹಬ್ಬಿಸಿದರು.
32 ಅವರಿಬ್ಬರು ಹೋಗುತ್ತಿರುವಾಗ ಕೆಲವರು ಬೇರೊಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಮೂಕನಾಗಿದ್ದನು. 33 ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟುಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.
34 ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದರು.
Kannada Holy Bible: Easy-to-Read Version. All rights reserved. © 1997 Bible League International