Revised Common Lectionary (Complementary)
ರಚನೆಗಾರ: ದಾವೀದ.
25 ಯೆಹೋವನೇ, ನಿನ್ನಲ್ಲೇ ಮನಸ್ಸಿಟ್ಟಿದ್ದೇನೆ.
2 ನನ್ನ ದೇವರೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ.
ನನ್ನನ್ನು ನಿರಾಶೆಗೊಳಿಸಬೇಡ.
ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!
3 ನಿನ್ನಲ್ಲಿ ಭರವಸವಿಟ್ಟಿರುವವರು ನಿರಾಶರಾಗುವುದಿಲ್ಲ
ದ್ರೋಹಿಗಳಾದರೋ ನಿರಾಶರಾಗುವರು.
ಅವರಿಗೆ ಏನೂ ದೊರೆಯುವುದಿಲ್ಲ.
4 ಯೆಹೋವನೇ ನಿನ್ನ ಮಾರ್ಗಗಳನ್ನು ನನಗೆ ತಿಳಿಸು.
ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು.
5 ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು.
ನೀನೇ ನನ್ನ ದೇವರು, ನೀನೇ ನನ್ನ ರಕ್ಷಕ.
ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ.
6 ಯೆಹೋವನೇ, ನನಗೆ ಕರುಣೆ ತೋರಬೇಕೆಂಬುದನ್ನು ಜ್ಞಾಪಿಸಿಕೊ.
ನಿನ್ನ ಶಾಶ್ವತವಾದ ಪ್ರೀತಿಯನ್ನು ನನಗೆ ತೋರಿಸು.
7 ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ.
ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.
8 ಯೆಹೋವನು ಒಳ್ಳೆಯವನೂ ಸತ್ಯಸ್ವರೂಪನೂ ಆಗಿದ್ದಾನೆ.
ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು.
9 ಆತನು ದೀನರಿಗೆ ತನ್ನ ಮಾರ್ಗಗಳನ್ನು ಉಪದೇಶಿಸುವನು.
ಆತನು ಅವರನ್ನು ತನ್ನ ನ್ಯಾಯಾನುಸಾರವಾಗಿ ನಡೆಸುವನು.
10 ಯೆಹೋವನ ಒಡಂಬಡಿಕೆಯನ್ನೂ ವಾಗ್ದಾನಗಳನ್ನೂ ಅನುಸರಿಸುವ ಜನರಿಗೆ
ಆತನ ಮಾರ್ಗಗಳೆಲ್ಲ ಕರುಣೆಯುಳ್ಳವೂ ಸತ್ಯವೂ ಆಗಿವೆ.
ಇಸ್ರೇಲರು ದೇವಜನರಾಗಿದ್ದಾರೆ
19 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 2 “ಇಸ್ರೇಲರಿಗೆ ಹೀಗೆ ಹೇಳು: ನಾನೇ ನಿಮ್ಮ ದೇವರಾದ ಯೆಹೋವನು ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು!
3 “ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು!
4 “ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!
32 “ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!
33 “ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ. 34 ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!
35 “ನೀವು ಜನರಿಗೆ ತೀರ್ಪುಮಾಡುವಾಗ ನ್ಯಾಯವಾಗಿ ತೀರ್ಪುಮಾಡಬೇಕು. ನೀವು ಅಳೆಯುವಾಗ ಮತ್ತು ತೂಕಮಾಡುವಾಗ ನ್ಯಾಯವಾಗಿ ನಡೆದುಕೊಳ್ಳಬೇಕು. 36 ನಿಮ್ಮ ಪುಟ್ಟಿಗಳು ಸರಿಯಾದ ಪ್ರಮಾಣದ್ದಾಗಿರಬೇಕು. ನಿಮ್ಮ ಕೊಳಗಗಳು ದ್ರವಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ಹಿಡಿಸಿಕೊಳ್ಳುವಂತವುಗಳಾಗಿರಬೇಕು. ನಿಮ್ಮ ತೂಕದ ಕಲ್ಲುಗಳು ಮತ್ತು ತಕ್ಕಡಿಗಳು ವಸ್ತುಗಳನ್ನು ಸರಿಯಾಗಿ ತೂಕ ಮಾಡುವಂಥವುಗಳಾಗಿರಬೇಕು. ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರತಂದೆನು.
37 “ನೀವು ನನ್ನ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಜ್ಞಾಪಕಮಾಡಿಕೊಳ್ಳಬೇಕು; ಅವುಗಳಿಗೆ ವಿಧೇಯರಾಗಬೇಕು. ನಾನೇ ಯೆಹೋವನು.”
16 ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು. 17 ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು. 18 ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ. 19 ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು. 20 ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ. 21 ಆದರೆ ಸತ್ಯಮಾರ್ಗವನ್ನು ಅನುಸರಿಸುವವನು ಬೆಳಕಿಗೆ ಬರುತ್ತಾನೆ. ಅವನು ಮಾಡಿರುವ ಕಾರ್ಯಗಳೆಲ್ಲಾ ದೇವರ ಮೂಲಕವಾಗಿ ಮಾಡಿದ ಕಾರ್ಯಗಳೆಂದು ಬೆಳಕು ತೋರಿಸುತ್ತದೆ.
Kannada Holy Bible: Easy-to-Read Version. All rights reserved. © 1997 Bible League International