Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಆದಿಕಾಂಡ 18:1-10

ಮೂವರು ಸಂದರ್ಶಕರು

18 ಅಬ್ರಹಾಮನು ಮಮ್ರೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಅಂದು ಬಿಸಿಲಿನ ತಾಪದಿಂದಾಗಿ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು. ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ, “ಸ್ವಾಮಿಗಳೇ, ನಿಮ್ಮ ಸೇವಕನಾದ ನನ್ನ ಜೊತೆಯಲ್ಲಿ ಸ್ವಲ್ಪ ಸಮಯವಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಲು ನೀರನ್ನು ತಂದುಕೊಡುವೆನು. ನೀವು ಮರದ ಕೆಳಗೆ ವಿಶ್ರಾಂತಿ ತೆಗೆದುಕೊಳ್ಳಿರಿ. ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು.

ಆ ಮೂವರು ಪುರುಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.

ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು. ಬಳಿಕ ಅವನು ತನ್ನ ಪಶುಗಳಿದ್ದಲ್ಲಿಗೆ ಓಡಿಹೋಗಿ ಉತ್ತಮವಾದ ಎಳೆಕರುವನ್ನು ತೆಗೆದು ಸೇವಕನಿಗೆ ಕೊಟ್ಟು, “ಬೇಗನೇ ಕರುವನ್ನು ಕೊಯ್ದು, ಊಟಕ್ಕೆ ಸಿದ್ಧಮಾಡು” ಎಂದು ಹೇಳಿದನು. ಅಬ್ರಹಾಮನು ಆ ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಆ ಮೂವರು ಊಟ ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು.

ಆ ಪುರುಷರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ ಸಾರಳು ಎಲ್ಲಿ?” ಎಂದು ಕೇಳಿದರು.

ಅಬ್ರಹಾಮನು ಅವರಿಗೆ, “ಆಕೆ ಗುಡಾರದಲ್ಲಿ ಇದ್ದಾಳೆ” ಅಂದನು.

10 ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು.

ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.

ಕೀರ್ತನೆಗಳು 15

ರಚನೆಗಾರ: ದಾವೀದ.

15 ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು?
    ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು?
ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ
    ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.
ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ
    ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.
ಅವನು ದೇವದೂಷಕರನ್ನು ತಿರಸ್ಕರಿಸುವವನೂ
    ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ
ತನಗೆ ತೊಂದರೆಯಾದರೂ
    ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ
    ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು.
ಹೀಗೆ ಜೀವಿಸುವವನು
    ದೇವರಿಗೆ ಸಮೀಪವಾಗಿಯೇ ಇರುತ್ತಾನೆ.[a]

ಕೊಲೊಸ್ಸೆಯವರಿಗೆ 1:15-28

ನಾವು ಕ್ರಿಸ್ತನ ಕಡೆಗೆ ನೋಡುವಾಗ ದೇವರನ್ನೇ ಕಾಣುತ್ತೇವೆ

15 ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ.
    ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ.
    ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.
16 ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು,
    ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು,
    ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು.
ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.

17 ಅವುಗಳಿಗಿಂತ ಮೊದಲೇ ಕ್ರಿಸ್ತನಿದ್ದನು.
    ಸಮಸ್ತಕ್ಕೂ ಆತನೇ ಆಧಾರಭೂತನಾಗಿದ್ದಾನೆ.
18 ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ.
    ಪ್ರತಿಯೊಂದೂ ಆತನಿಂದಲೇ ಬರುತ್ತದೆ.
    ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ.
ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.

19 ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ನೆಲಸಿರಬೇಕೆಂಬುದೂ,
20     ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ
    ಭೂಪರಲೋಕಗಳಲ್ಲಿರುವ ಸಮಸ್ತವನ್ನು
ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.

21 ಒಂದು ಕಾಲದಲ್ಲಿ ನೀವು ದೇವರಿಂದ ಬೇರ್ಪಟ್ಟಿದ್ದಿರಿ, ದುಷ್ಕೃತ್ಯಗಳನ್ನು ಮಾಡುತ್ತಾ ನಿಮ್ಮ ಮನಸ್ಸುಗಳಲ್ಲಿ ದೇವರಿಗೆ ಶತ್ರುಗಳಾಗಿದ್ದಿರಿ. 22 ಈಗಲಾದರೋ ಕ್ರಿಸ್ತನು ಶರೀರಧಾರಿಯಾಗಿ ಈ ಲೋಕದಲ್ಲಿದ್ದಾಗ ತನ್ನ ಪ್ರಾಣವನ್ನೇ ಕೊಡುವುದರ ಮೂಲಕ ನಿಮಗೂ ದೇವರಿಗೂ ಸಂಧಾನ ಮಾಡಿದ್ದಾನೆ. ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿಷ್ಕಳಂಕರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ದೇವರ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು. 23 ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.

ಸಭೆಗಾಗಿ ಪೌಲನ ಕಾರ್ಯ

24 ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ. 25 ನಾನು ಸಭೆಗೆ ಸೇವಕನಾದೆನು. ಏಕೆಂದರೆ ದೇವರು ನನಗೆ ವಿಶೇಷವಾದ ಕಾರ್ಯವನ್ನು ಮಾಡುವಂತೆ ಆಜ್ಞಾಪಿಸಿದನು. ಈ ಕಾರ್ಯವು ನಿಮಗೆ ಸಹಾಯ ಮಾಡುವುದು. ದೇವರ ಉಪದೇಶವನ್ನು ಸಂಪೂರ್ಣವಾಗಿ ತಿಳಿಸುವುದೇ ಆ ಕಾರ್ಯ. 26 ಆದಿಕಾಲದಿಂದಲೂ ಅಡಗಿಸಿಟ್ಟಿದ್ದ ರಹಸ್ಯಸತ್ಯವೇ ಈ ಉಪದೇಶ. ಈ ಸತ್ಯವನ್ನು ಎಲ್ಲಾ ಜನರಿಗೆ ಮರೆಮಾಡಲಾಗಿತ್ತು. ಈಗಲಾದರೋ ಈ ರಹಸ್ಯಸತ್ಯವನ್ನು ದೇವರ ಪವಿತ್ರ ಜನರಿಗೆ ತಿಳಿಸಲಾಗಿದೆ. 27 ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ. 28 ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.

ಲೂಕ 10:38-42

ಮರಿಯಳು ಮತ್ತು ಮಾರ್ಥಳು

38 ಯೇಸು ಮತ್ತು ಆತನ ಶಿಷ್ಯರು ಪ್ರಯಾಣ ಮಾಡುತ್ತಾ ಒಂದು ಊರಿಗೆ ಬಂದರು. ಮಾರ್ಥಳೆಂಬ ಸ್ತ್ರೀ ಯೇಸುವನ್ನು ತನ್ನ ಮನೆಗೆ ಆಮಂತ್ರಿಸಿದಳು. 39 ಆಕೆಗೆ ಮರಿಯಳೆಂಬ ತಂಗಿ ಇದ್ದಳು. ಮರಿಯಳು ಯೇಸುವಿನ ಪಾದಗಳ ಬಳಿ ಕುಳಿತುಕೊಂಡು ಆತನ ಉಪದೇಶವನ್ನು ಕೇಳುತ್ತಿದ್ದಳು. ಆದರೆ ಆಕೆಯ ಸಹೋದರಿಯಾದ ಮಾರ್ಥಳು ಅತಿಥಿಸತ್ಕಾರ ಮಾಡುತ್ತಿದ್ದಳು. 40 ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು.

41 ಆದರೆ ಪ್ರಭುವು ಅವಳಿಗೆ, “ಮಾರ್ಥಾ, ಮಾರ್ಥಾ, ನೀನು ಅನೇಕ ಕೆಲಸಗಳ ಬಗ್ಗೆ ಚಿಂತಿಸುತ್ತಾ ಗಲಿಬಿಲಿಯಾಗಿರುವೆ. 42 ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International