Revised Common Lectionary (Complementary)
12 ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು.
ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.
13 ಯೆಹೋವನು ಪರಲೋಕದಿಂದ
ಮನುಷ್ಯರನ್ನು ದೃಷ್ಟಿಸಿ ನೋಡುವನು.
14 ಆತನು ತನ್ನ ಮಹಾಸಿಂಹಾಸನದಿಂದ
ಭೂನಿವಾಸಿಗಳೆಲ್ಲರನ್ನು ನೋಡುವನು.
15 ಅವರೆಲ್ಲರ ಮನುಸ್ಸುಗಳನ್ನು ಸೃಷ್ಟಿಸಿದವನು ಆತನೇ.
ಅವರೆಲ್ಲರ ಆಲೋಚನೆಗಳು ಆತನಿಗೆ ತಿಳಿದಿವೆ.
16 ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ.
ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.
17 ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ.
ಅವುಗಳ ಬಲವು ನಿನ್ನನ್ನು ರಕ್ಷಿಸಲಾರದು.
18 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು.
ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು.
19 ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ.
ಅವರು ಹಸಿವೆಯಿಂದಿರುವಾಗ ಆತನು ಅವರಿಗೆ ಶಕ್ತಿಕೊಡುವನು.
20 ಆದ್ದರಿಂದ ಯೆಹೋವನಿಗಾಗಿಯೇ ಕಾದುಕೊಂಡಿರುತ್ತೇವೆ.
ಆತನೇ ನಮ್ಮ ಸಹಾಯಕನೂ ಗುರಾಣಿಯೂ ಆಗಿದ್ದಾನೆ.
21 ದೇವರು ನನ್ನನ್ನು ಸಂತೋಷಗೊಳಿಸುವನು.
ನಾನು ಆತನ ಪರಿಶುದ್ಧ ಹೆಸರಿನಲ್ಲಿಯೇ ಭರವಸವಿಟ್ಟಿದ್ದೇನೆ.
22 ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ.
ನಿನ್ನ ಶಾಶ್ವತವಾದ ಪ್ರೀತಿಯು ನಮ್ಮ ಮೇಲಿರಲಿ.
ಐಶ್ವರ್ಯವು ಸಂತೋಷವನ್ನು ಕೊಡಲಾರದು
6 ಈ ಲೋಕದಲ್ಲಿ ಮತ್ತೊಂದು ಅನ್ಯಾಯವನ್ನು ಕಂಡಿದ್ದೇನೆ. ಅದನ್ನು ಗ್ರಹಿಸಿಕೊಳ್ಳುವುದಕ್ಕೂ ಕಷ್ಟ. 2 ದೇವರು ಒಬ್ಬನಿಗೆ ಐಶ್ವರ್ಯವನ್ನು, ಆಸ್ತಿಪಾಸ್ತಿಯನ್ನು ಮತ್ತು ಘನತೆಯನ್ನು ಕೊಡುವನು. ಅವನು ತನಗೆ ಈಗ ಬೇಕಾಗಿರುವ ಮತ್ತು ಮುಂದೆ ಬೇಕಾಗುವ ಎಲ್ಲವನ್ನೂ ಹೊಂದಿರುವನು. ಆದರೆ ಅವುಗಳನ್ನು ಅನುಭವಿಸಲು ದೇವರು ಅವನಿಗೆ ಅವಕಾಶಕೊಡುವುದಿಲ್ಲ. ಮತ್ತೊಬ್ಬನು ಬಂದು ಎಲ್ಲವನ್ನೂ ತೆಗೆದುಕೊಳ್ಳುವನು. ಇದು ಸಹ ತುಂಬ ಕೆಟ್ಟದ್ದೂ ಅರ್ಥವಿಲ್ಲದ್ದೂ ಆಗಿದೆ.
3 ಒಬ್ಬನು ಬಹುಕಾಲ ಬದುಕಬಹುದು. ಅವನಿಗೆ ನೂರು ಮಂದಿ ಮಕ್ಕಳಿರಬಹುದು. ಆದರೆ ಅವನಿಗೆ ಸುಖತೃಪ್ತಿಯೂ ಸತ್ತ ಮೇಲೆ ಉತ್ತರಕ್ರಿಯೆಯೂ ಇಲ್ಲದಿದ್ದರೆ ಹುಟ್ಟುವಾಗಲೇ ಸಾಯುವ ಮಗು ಅವನಿಗಿಂತಲೂ ಉತ್ತಮ. 4 ಮಗುವು ಹುಟ್ಟುವಾಗಲೇ ಸತ್ತುಹೋದರೆ ಅದಕ್ಕೆ ನಿಜವಾಗಿಯೂ ಅರ್ಥವಿಲ್ಲ. ಅದು ಹೆಸರನ್ನೂ ಹೊಂದಿಲ್ಲದೆ ಕತ್ತಲೆಯ ಗುಂಡಿಯಲ್ಲಿ ಹೂಳಲ್ಪಡುವುದು. 5 ಅದು ಸೂರ್ಯನನ್ನು ನೋಡಲೇ ಇಲ್ಲ. ಅದಕ್ಕೆ ತಿಳಿವಳಿಕೆಯೂ ಇಲ್ಲ. ಆದರೆ ದೇವರು ಅನುಗ್ರಹಿಸಿದವುಗಳಲ್ಲಿ ಸಂತೋಷಪಡದವನಿಗಿಂತ ಆ ಮಗುವೇ ಹೆಚ್ಚು ವಿಶ್ರಾಂತಿಯನ್ನು ಪಡೆದುಕೊಳ್ಳುವುದು. 6 ಅವನು ಎರಡು ಸಾವಿರ ವರ್ಷಗಳ ಕಾಲ ಬದುಕಿಯೂ ಜೀವನದಲ್ಲಿ ಸಂತೋಷಪಡದಿದ್ದರೆ ಏನು ಪ್ರಯೋಜನ? ಆ ಮಗುವೂ ಅವನೂ ಕತ್ತಲೆ ಗುಂಡಿಗೇ ಹೋಗುವರು.
ಸ್ತೆಫನನ ಪ್ರಸಂಗ
7 ಪ್ರಧಾನಯಾಜಕನು ಸ್ತೆಫನನಿಗೆ, “ಈ ಸಂಗತಿಗಳು ನಿಜವೋ?” ಎಂದು ಕೇಳಿದನು. 2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು. 3 ದೇವರು ಅಬ್ರಹಾಮನಿಗೆ, ‘ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು’(A) ಎಂದು ಹೇಳಿದನು.
4 “ಆದ್ದರಿಂದ ಅಬ್ರಹಾಮನು ಖಾಲ್ದೆಯ[a] ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು. 5 ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)
6 “ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು. 7 ಆದರೆ ಅವರನ್ನು ಗಲಾಮರನ್ನಾಗಿ ಮಾಡಿಕೊಂಡ ಜನಾಂಗವನ್ನು ನಾನು ದಂಡಿಸುವೆನು’(B) ಎಂದು ಹೇಳಿದನು. ಇದಲ್ಲದೆ ದೇವರು ಅವನಿಗೆ, ‘ಆ ಬಳಿಕ ನಿನ್ನ ಜನರು ಆ ದೇಶದಿಂದ ಹೊರಗೆ ಬಂದು ನನ್ನನ್ನು ಈ ಸ್ಥಳದಲ್ಲಿ ಆರಾಧಿಸುವರು’(C) ಎಂದು ಹೇಳಿದನು.
8 “ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.
Kannada Holy Bible: Easy-to-Read Version. All rights reserved. © 1997 Bible League International