Revised Common Lectionary (Complementary)
ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ.
3 ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ.
ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.
2 ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.
3 ಆದರೆ ಯೆಹೋವನೇ, ನೀನೇ ನನ್ನ ಗುರಾಣಿ.
ನೀನೇ ನನ್ನ ಗೌರವಕ್ಕೆ ಆಧಾರ.
ನನ್ನನ್ನು ಜಯವೀರನನ್ನಾಗಿ ಮಾಡು.
4 ನಾನು ಯೆಹೋವನಿಗೆ ಪ್ರಾರ್ಥಿಸಲು,
ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.
5 ಯೆಹೋವನು ನನ್ನನ್ನು ಕಾಪಾಡುವುದರಿಂದ
ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು.
6 ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ
ನನಗೆ ಭಯವಿಲ್ಲ.
7 ಯೆಹೋವನೇ, ಎದ್ದೇಳು!
ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು!
ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ
ಅವರ ಹಲ್ಲುಗಳು ಉದುರಿಹೋಗುತ್ತವೆ.
8 ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು.
ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.
12 “ಪಟ್ಟಣ ಕಟ್ಟುವುದಕ್ಕಾಗಿ ಜನರನ್ನು ಕೊಲ್ಲುವವನಿಗೂ ಪಟ್ಟಣದ ಕೋಟೆಗಳನ್ನು ಭದ್ರಪಡಿಸಲು ದುಷ್ಕೃತ್ಯಗಳನ್ನು ಮಾಡುವವನಿಗೂ ಕೇಡಾಗುವದು. 13 ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು. 14 ಆಗ ಎಲ್ಲಾ ಕಡೆಗಳಲ್ಲಿರುವ ಜನರು ಯೆಹೋವನ ಮಹಿಮೆಯನ್ನು ತಿಳಿದುಕೊಳ್ಳುವರು. ಹೇಗೆ ನೀರು ಸಮುದ್ರಕ್ಕೆ ಹರಿಯುತ್ತದೋ ಹಾಗೆ ಈ ವರ್ತಮಾನವು ಎಲ್ಲಾ ಕಡೆಗೆ ಹಬ್ಬುವದು. 15 ತಾನು ಸಿಟ್ಟುಗೊಂಡು ಇತರರು ಸಂಕಟಪಡುವಂತೆ ಮಾಡುವವನಿಗೆ ಬಹಳ ಕೇಡು ಉಂಟಾಗುವದು. ಸಿಟ್ಟಿನ ಭರದಲ್ಲಿ ಆ ಮನುಷ್ಯನು ಇತರ ಜನರನ್ನು ನೆಲಕ್ಕೆ ಅಪ್ಪಳಿಸಿಬಿಡುವನು. ಅವನು ಅವರನ್ನು ಅಮಲೇರಿದವರಂತೆಯೂ ಬೆತ್ತಲೆಯಾಗಿರುವವರಂತೆಯೂ ಪರಿಗಣಿಸುತ್ತಾನೆ.
16 “ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಆ ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ಆ ವ್ಯಕ್ತಿಯು ಆ ಕೋಪವನ್ನು ರುಚಿನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದುಬೀಳುವನು.
“ದುಷ್ಟ ಅಧಿಪತಿಯೇ, ನೀನು ಆ ಪಾತ್ರೆಯಿಂದ ಕುಡಿಯುವೆ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ. 17 ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿರುವೆ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುವೆ. ಆ ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವೆ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.”
ವಿಗ್ರಹಗಳ ವಿಷಯವಾದ ಸಂದೇಶ
18 ಆ ಮನುಷ್ಯನ ಸುಳ್ಳು ದೇವರು ಅವನಿಗೆ ಸಹಾಯ ಮಾಡಲಾರದು. ಯಾಕೆಂದರೆ ಅದು ಒಬ್ಬನು ಲೋಹದಿಂದ ಮಾಡಿದ ಕೇವಲ ವಿಗ್ರಹವಷ್ಟೆ. ಅದು ಕೇವಲ ಜಡಮೂರ್ತಿ. ಅದನ್ನು ಮಾಡಿದವನು, ಅದು ಅವನಿಗೆ ಸಹಾಯ ಮಾಡುವದೆಂದು ಯೋಚಿಸುವದು ಶುದ್ಧ ಮೂರ್ಖತನ. ಆ ಮೂರ್ತಿಯು ಮಾತಾಡುವೂದೂ ಇಲ್ಲ. 19 ಆ ಮೂರ್ತಿಗೆ “ಎದ್ದೇಳು” ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ “ಎಚ್ಚರವಾಗು” ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.
20 ಆದರೆ ಯೆಹೋವನಾದರೋ ಹಾಗಲ್ಲ. ಆತನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆದ್ದರಿಂದ ಎಲ್ಲಾ ಭೂನಿವಾಸಿಗಳು ಆತನ ಮುಂದೆ ಮೌನದಿಂದಿದ್ದು ಆತನನ್ನು ಗೌರವಿಸತಕ್ಕದ್ದು.
ಒಣಗಿಹೋದ ಅಂಜೂರ ಮರ
(ಮತ್ತಾಯ 21:18-19)
12 ಮರುದಿನ, ಯೇಸು ಬೆಥಾನಿಯದಿಂದ ಹೋಗುತ್ತಿರಲು ಆತನಿಗೆ ಹಸಿವಾಗಿತ್ತು. 13 ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ. 14 ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನಿನ್ನ ಹಣ್ಣನ್ನು ಯಾರೂ ತಿನ್ನದಂತಾಗಲಿ” ಎಂದನು. ಯೇಸುವಿನ ಶಿಷ್ಯರಿಗೂ ಈ ಮಾತು ಕೇಳಿಸಿತು.
ನಂಬಿಕೆಯ ಶಕ್ತಿ
(ಮತ್ತಾಯ 21:20-22)
20 ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರೊಂದಿಗೆ ಹೋಗುತ್ತಿದ್ದನು. ಹಿಂದಿನ ದಿನ ಯೇಸು ಶಪಿಸಿದ ಅಂಜೂರದ ಮರವನ್ನು ಶಿಷ್ಯರು ನೋಡಿದರು. ಅಂಜೂರದ ಮರವು ಬೇರುಸಹಿತ ಒಣಗಿಹೋಗಿತ್ತು. 21 ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು.
22 ಯೇಸು, “ದೇವರಲ್ಲಿ ನಂಬಿಕೆ ಇಡಿರಿ. 23 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ. 24 ಆದ್ದರಿಂದ ನೀವು ಪ್ರಾರ್ಥನೆಯಲ್ಲಿ ಬೇಡಿಕೊಂಡು, ಅದನ್ನೆಲ್ಲಾ ಹೊಂದಿಕೊಂಡಾಯಿತೆಂದು ನಂಬಿದರೆ, ಅದೆಲ್ಲಾ ನಿಮ್ಮದಾಗುತ್ತವೆ ಎಂದು ನಾನು ನಿಮಗೆ ಹೇಳುತ್ತೇನೆ.
Kannada Holy Bible: Easy-to-Read Version. All rights reserved. © 1997 Bible League International