Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಯೆಶಾಯ 1:10-18

10 ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ. 11 ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ. 12 ನೀವು ನನ್ನನ್ನು ಸಂಧಿಸಲು ಬರುವಾಗ, ನನ್ನ ಪ್ರಾಕಾರಗಳನ್ನು ತುಳಿದುಹಾಕುವಿರಿ. ಹಾಗೆ ಮಾಡಲು ನಿಮಗೆ ಹೇಳಿದವರು ಯಾರು?

13 “ನಿಮ್ಮ ಅಯೋಗ್ಯವಾದ ಯಜ್ಞಗಳನ್ನು ನನ್ನ ಬಳಿಗೆ ತರಬೇಡಿ; ನಿಮ್ಮ ಧೂಪವು ನನಗೆ ಅಸಹ್ಯ; ನಿಮ್ಮ ಅಮಾವಾಸ್ಯೆಯನ್ನಾಗಲಿ ಹಬ್ಬವನ್ನಾಗಲಿ ಸಬ್ಬತ್ತನ್ನಾಗಲಿ ನಾನು ಸಹಿಸಲಾರೆ. ನಿಮ್ಮ ಪವಿತ್ರಕೂಟಗಳಲ್ಲಿ ನೀವು ಮಾಡುವ ದುಷ್ಟತನವನ್ನು ನಾನು ಸಹಿಸಲಾರೆ. 14 ನಿಮ್ಮ ಮಾಸಿಕಕೂಟಗಳನ್ನೂ ಸಭಾಕೂಟಗಳನ್ನೂ ನಾನು ದ್ವೇಷಿಸುತ್ತೇನೆ. ಇವು ನನಗೆ ಭಾರವಾಗಿವೆ. ಈ ಭಾರದಿಂದ ನಾನು ಬೇಸತ್ತು ಹೋಗಿದ್ದೇನೆ.

15 “ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.

16 “ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ; 17 ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”

18 ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.

ಕೀರ್ತನೆಗಳು 32:1-7

ರಚನೆಗಾರ: ದಾವೀದ.

32 ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ
    ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ
    ಅವನೇ ಧನ್ಯನು.
ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ
    ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ
    ಅವನೇ ಧನ್ಯನು.

ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ
    ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು;
    ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು.
ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು.
    ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.

ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು.
    ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ.
    ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.
ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತರು ನಿನ್ನಲ್ಲಿ ಪ್ರಾರ್ಥಿಸಲಿ.
    ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.
ನೀನು ನನಗೆ ಆಶ್ರಯದುರ್ಗವಾಗಿರುವೆ.
    ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ.
ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.

2 ಥೆಸಲೋನಿಕದವರಿಗೆ 1:1-4

ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ.

ತಂದೆಯಾದ ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಕೃಪೆಯೂ ಶಾಂತಿಯೂ ನಿಮಗಿರಲಿ.

ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ. ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.

2 ಥೆಸಲೋನಿಕದವರಿಗೆ 1:11-12

11 ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ. 12 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಲೆಂದು ಮತ್ತು ನೀವೂ ಆತನಲ್ಲಿ ಮಹಿಮೆ ಹೊಂದಲೆಂದು ನಾವು ಪ್ರಾರ್ಥಿಸುತ್ತೇವೆ. ಆ ಮಹಿಮೆಯು ನಮ್ಮ ದೇವರ ಮತ್ತು ಪ್ರಭು ಯೇಸು ಕ್ರಿಸ್ತನ ಕೃಪೆಯಿಂದ ಬರುತ್ತದೆ.

ಲೂಕ 19:1-10

ಜಕ್ಕಾಯ

19 ಒಮ್ಮೆ ಯೇಸು ಜೆರಿಕೊ ಪಟ್ಟಣದ ಮೂಲಕ ಹೋಗುತ್ತಿದ್ದನು. ಆ ಪಟ್ಟಣದಲ್ಲಿ ಜಕ್ಕಾಯನೆಂಬ ಮನುಷ್ಯನಿದ್ದನು. ಅವನು ಐಶ್ವರ್ಯವಂತನೂ ಪ್ರಧಾನ ಸುಂಕವಸೂಲಿಗಾರನೂ ಆಗಿದ್ದನು. ಅವನು ಯೇಸುವನ್ನು ನೋಡಲು ಬಯಸಿದನು. ಯೇಸುವನ್ನು ನೋಡುವುದಕ್ಕಾಗಿ ಇತರ ಅನೇಕ ಜನರೂ ಅಲ್ಲಿದ್ದರು. ಜಕ್ಕಾಯನು ಬಹಳ ಗಿಡ್ಡನಾಗಿದ್ದುದರಿಂದ ಆ ಜನರ ಗುಂಪಿನ ದೆಸೆಯಿಂದ ಯೇಸುವನ್ನು ನೋಡಲಾಗಲಿಲ್ಲ. ಆದ್ದರಿಂದ ಅವನು ಬೇರೊಂದು ಸ್ಥಳಕ್ಕೆ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿ ಕುಳಿತುಕೊಂಡನು. ಯೇಸು ಆ ಸ್ಥಳದ ಮೂಲಕ ಹೋಗುವನೆಂದು ಜಕ್ಕಾಯನಿಗೆ ಗೊತ್ತಿತ್ತು.

ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು.

ಆಗ ಜಕ್ಕಾಯನು ಬೇಗನೆ ಕೆಳಗಿಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು. ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು.

ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.

ಯೇಸು, “ಈ ಮನುಷ್ಯನು ಒಳ್ಳೆಯವನೇ ಸರಿ. ಇವನು ನಿಜವಾಗಿಯೂ ಅಬ್ರಹಾಮನ ಕುಟುಂಬಕ್ಕೆ ಸೇರಿದ್ದಾನೆ. ಇಂದೇ ಈ ಮನೆಗೆ ರಕ್ಷಣೆ ಆಯಿತು. 10 ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International