Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 17:1-9

ಪ್ರಾರ್ಥನೆ. ರಚನೆಗಾರ: ದಾವೀದ.

17 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು.
    ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ.
    ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ.
    ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ
ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ.
    ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
ನಿನ್ನ ಆಜ್ಞೆಗಳಿಗೆ ವಿಧೇಯನಾಗಲು
    ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.
ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ.
    ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.
ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ.
    ಆದ್ದರಿಂದ ಈಗಲೂ ನನಗೆ ಕಿವಿಗೊಡು.
ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ
    ನೀನು ಸಹಾಯಮಾಡುವೆ;
ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು.
    ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.
ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು.
    ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ.
ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು.
    ನನಗೆ ಕೇಡುಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.

ವಿಮೋಚನಕಾಂಡ 3:13-20

13 ಆಗ ಮೋಶೆಯು ದೇವರಿಗೆ, “ನಾನು ಇಸ್ರೇಲರ ಬಳಿಗೆ ಹೋಗಿ ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದರೆ, ಅವರು ‘ಆತನ ಹೆಸರೇನು?’ ಎಂದು ಕೇಳುವರು. ಆಗ ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು.

14 ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು. 15 ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.

16 ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ. 17 ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.

18 “ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.

19 “ಆದರೆ ಈಜಿಪ್ಟಿನ ರಾಜನು ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂಬುದು ನನಗೆ ಗೊತ್ತಿದೆ. 20 ಆದ್ದರಿಂದ ನಾನು ಕೈಚಾಚಿ ಈಜಿಪ್ಟಿನ ವಿರುದ್ಧ ಮಹತ್ಕಾರ್ಯಗಳನ್ನು ಮಾಡಿ ಅನೇಕ ವಿಧದಲ್ಲಿ ಅದನ್ನು ಬಾಧಿಸುವೆನು. ಆಗ ಅವನು ನಿಮ್ಮನ್ನು ಹೋಗಗೊಡಿಸುವನು.

ಲೂಕ 20:1-8

ಯೆಹೂದ್ಯನಾಯಕರು ಯೇಸುವಿಗೆ ಕೇಳಿದ ಪ್ರಶ್ನೆ

(ಮತ್ತಾಯ 21:23-27; ಮಾರ್ಕ 11:27-33)

20 ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು, “ನಮಗೆ ಹೇಳು! ನೀನು ಯಾವ ಅಧಿಕಾರದಿಂದ ಈ ಸಂಗತಿಗಳನ್ನು ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು?” ಎಂದು ಕೇಳಿದರು.

ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ಜನರಿಗೆ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ದೇವರಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ? ನನಗೆ ಹೇಳಿರಿ” ಎಂದು ಉತ್ತರಕೊಟ್ಟನು.

ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತು’ ಎಂದು ಉತ್ತರಕೊಟ್ಟರೆ, ‘ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು. ‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು. ಬಳಿಕ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು.

ಯೇಸು ಅವರಿಗೆ, “ಹಾಗಾದರೆ, ಈ ಸಂಗತಿಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂಬುದನ್ನು ನಾನೂ ನಿಮಗೆ ಹೇಳುವುದಿಲ್ಲ” ಅಂದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International