Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಯೋಬನು 19:23-27

23 “ನನ್ನ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡು ಬರೆದಿಟ್ಟರೆ ಎಷ್ಟೋ ಒಳ್ಳೆಯದು.
    ಸುರುಳಿಯಲ್ಲಿ ಬರೆದಿಟ್ಟರೆ ಅದೆಷ್ಟೋ ಮೇಲು.
24 ನನ್ನ ಮಾತುಗಳನ್ನು ಸೀಸದ ಹಲಗೆಯ ಮೇಲೆಯೂ ಬಂಡೆಯ ಮೇಲೆಯೂ ಕೆತ್ತಿದರೆ ಎಷ್ಟೋ ಒಳ್ಳೆಯದು.
    ಆಗ ಅವು ಶಾಶ್ವತವಾಗಿರುತ್ತವೆ.
25 ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ;
    ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.
26 ನನ್ನ ಚರ್ಮವು ನಾಶವಾದ ಮೇಲೆಯೂ
    ನಾನು ಈ ದೇಹದಲ್ಲಿ ದೇವರನ್ನು ನೋಡುವೆನು.
27 ನಾನು ಕಣ್ಣಾರೆ ದೇವರನ್ನು ನೋಡುವೆನು.
    ಬೇರೆ ಯಾರೂ ಅಲ್ಲದೆ ನಾನೇ ಆತನನ್ನು ನೋಡುವೆನು.
    ಈ ನಿರೀಕ್ಷೆಯಿಂದ ನನ್ನ ಹೃದಯವು ಉಲ್ಲಾಸಗೊಂಡಿದೆ.

ಕೀರ್ತನೆಗಳು 17:1-9

ಪ್ರಾರ್ಥನೆ. ರಚನೆಗಾರ: ದಾವೀದ.

17 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು.
    ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ.
    ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ.
    ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ
ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ.
    ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
ನಿನ್ನ ಆಜ್ಞೆಗಳಿಗೆ ವಿಧೇಯನಾಗಲು
    ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.
ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ.
    ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.
ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ.
    ಆದ್ದರಿಂದ ಈಗಲೂ ನನಗೆ ಕಿವಿಗೊಡು.
ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ
    ನೀನು ಸಹಾಯಮಾಡುವೆ;
ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು.
    ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.
ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು.
    ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ.
ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು.
    ನನಗೆ ಕೇಡುಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.

2 ಥೆಸಲೋನಿಕದವರಿಗೆ 2:1-5

ಕೆಟ್ಟಕಾರ್ಯಗಳು ಸಂಭವಿಸುವವು

ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವುದನ್ನು ಕುರಿತು ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಆತನನ್ನು ಸಂಧಿಸುವ ಕಾಲವನ್ನು ಕುರಿತು ನಿಮ್ಮೊಡನೆ ಮಾತನಾಡಲು ಇಚ್ಛಿಸುತ್ತೇವೆ. ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ. ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ. ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.

ಈ ಸಂಗತಿಗಳೆಲ್ಲವೂ ಸಂಭವಿಸುತ್ತವೆಯೆಂದು ನಾನು ನಿಮಗೆ ಮೊದಲೇ ತಿಳಿಸಿದ್ದೇನೆ. ಜ್ಞಾಪಕವಿಲ್ಲವೇ?

2 ಥೆಸಲೋನಿಕದವರಿಗೆ 2:13-17

ರಕ್ಷಣೆಗಾಗಿ ನೀವು ಆರಿಸಲ್ಪಟ್ಟಿರುವಿರಿ

13 ಸಹೋದರ ಸಹೋದರಿಯರೇ, ಪ್ರಭುವು ನಿಮ್ಮನ್ನು ಪ್ರೀತಿಸುತ್ತಾನೆ. ನಿಮ್ಮನ್ನು ರಕ್ಷಿಸಬೇಕೆಂದು ದೇವರು ನಿಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು. ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತೆ ಸಲ್ಲಿಸಬೇಕು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವ ಪವಿತ್ರಾತ್ಮನಿಂದ ಮತ್ತು ಸತ್ಯದ ಮೇಲೆ ನಿಮಗಿರುವ ನಂಬಿಕೆಯಿಂದ ನೀವು ರಕ್ಷಣೆ ಹೊಂದಿದ್ದೀರಿ. 14 ನೀವು ರಕ್ಷಣೆಯನ್ನು ಹೊಂದಿಕೊಂಡು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮಹಿಮೆಯಲ್ಲಿ ಪಾಲುಗಾರರಾಗಬೇಕೆಂದು, ನಾವು ಸಾರಿದ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಕರೆದನು. 15 ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ.

16-17 ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.

ಲೂಕ 20:27-38

ಯೇಸುವನ್ನು ಮೋಸಗೊಳಿಸಲು ಕೆಲವು ಸದ್ದುಕಾಯರ ಪ್ರಯತ್ನ

(ಮತ್ತಾಯ 22:23-33; ಮಾರ್ಕ 12:18-27)

27 ಕೆಲವು ಸದ್ದುಕಾಯರು[a] ಯೇಸುವಿನ ಬಳಿಗೆ ಬಂದರು. (ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದು ಸದ್ದುಕಾಯರು ನಂಬುತ್ತಾರೆ.) ಅವರು ಯೇಸುವಿಗೆ, 28 “ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು[b] ಮೋಶೆಯು ಬರೆದಿದ್ದಾನಷ್ಟೆ. 29 ಒಂದು ಕಾಲದಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯ ಸಹೋದರನು ಒಬ್ಬ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. 30 ಆಗ ಎರಡನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. 31 ಆಗ ಮೂರನೆಯ ಸಹೋದರನು ಆ ಸ್ತ್ರೀಯನ್ನು ಮದುವೆಯಾದನು. ಬಳಿಕ ಅವನೂ ಸತ್ತುಹೋದನು. ಇನ್ನುಳಿದ ಸಹೋದರರಿಗೂ ಹೀಗೆಯೇ ಆಯಿತು. ಅವರೆಲ್ಲರೂ ಮಕ್ಕಳಿಲ್ಲದೆ ಸತ್ತರು. 32 ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು. 33 ಆದರೆ ಆ ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿದ್ದರು. ಹೀಗಿರಲಾಗಿ, ಸತ್ತವರು ಪುನರುತ್ಥಾನ ಹೊಂದುವಾಗ, ಆ ಸ್ತ್ರೀಯು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು.

34 ಯೇಸು ಸದ್ದುಕಾಯರಿಗೆ, “ಭೂಲೋಕದಲ್ಲಿ ಜನರು ಒಬ್ಬರನ್ನೊಬ್ಬರು ಮದುವೆ ಆಗುತ್ತಾರೆ. 35 ಪುನರುತ್ಥಾನಕ್ಕೆ ಯೋಗ್ಯರಾದ ಕೆಲವು ಜನರು ಜೀವಂತವಾಗಿ ಎದ್ದುಬಂದು ಮತ್ತೆ ಜೀವಿಸುತ್ತಾರೆ. ಆ ಹೊಸ ಜೀವನದಲ್ಲಿ ಅವರು ಮದುವೆ ಆಗುವುದಿಲ್ಲ. 36 ಆ ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ. 37 ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ[c] ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ. 38 ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International