Revised Common Lectionary (Semicontinuous)
ಸ್ತುತಿಗೀತೆ. ರಚನೆಗಾರ: ದಾವೀದ.
110 ಯೆಹೋವನು ನನ್ನ ಒಡೆಯನಿಗೆ,
“ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ
ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.
2 ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು.
ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.
3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ
ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು.
ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು.
ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.
4 ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ”
ಎಂದು ವಾಗ್ದಾನ ಮಾಡಿದ್ದಾನೆ.
ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.
5 ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ.
ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿಬಿಡುವನು.
6 ಆತನು ಜನಾಂಗಗಳಿಗೆ ತೀರ್ಪು ಮಾಡುವನು.
ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು.
ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.
7 ರಾಜನು ಮಾರ್ಗದಲ್ಲಿ
ತೊರೆಯ ನೀರನ್ನು ಕುಡಿದು ಬಲ ಹೊಂದುವನು.
ಮೋಶೆ ತನ್ನ ಜನರಿಗೆ ಸಹಾಯ ಮಾಡಿದ್ದು
11 ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ 12 ಮೋಶೆಯು ಸುತ್ತಲೂ ನೋಡಿ ಯಾರೂ ಗಮನಿಸುತ್ತಿಲ್ಲವೆಂದು ತಿಳಿದುಕೊಂಡು ಈಜಿಪ್ಟಿನವನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
13 ಮರುದಿನ, ಇಬ್ಬರು ಇಬ್ರಿಯರು ಜಗಳವಾಡುತ್ತಿರುವುದನ್ನು ಕಂಡ ಮೋಶೆಯು ಅವರಲ್ಲಿ ತಪ್ಪು ಮಾಡಿದವನಿಗೆ, “ನಿನ್ನ ನೆರೆಯವನಿಗೆ ಯಾಕೆ ಹೊಡೆಯುತ್ತಿರುವೆ?” ಎಂದು ಕೇಳಿದನು.
14 ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು.
ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.
15 ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತೀರ್ಮಾನಿಸಿದನು. ಆದರೆ ಮೋಶೆ ಫರೋಹನ ಬಳಿಯಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು.
ಮಿದ್ಯಾನಿನಲ್ಲಿ ಮೋಶೆ
16 ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು. 17 ಅಷ್ಟರಲ್ಲಿ ಅಲ್ಲಿಗೆ ಬಂದ ಕೆಲವು ಕುರುಬರು ನೀರು ಸೇದಲು ಅವರಿಗೆ ಅಡ್ಡಿಮಾಡಿದ್ದರಿಂದ ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರು ಕುಡಿಸಿದನು.
18 ಬಳಿಕ ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಮರಳಿಹೋದರು. ಅವರ ತಂದೆ, “ಈ ದಿನ ನೀವು ಬಹುಬೇಗನೆ ಮನೆಗೆ ಬಂದಿದ್ದೀರಲ್ಲಾ!” ಎಂದು ಕೇಳಿದನು.
19 ಆ ಹುಡುಗಿಯರು, “ಕುರುಬರು ನಮಗೆ ಅಡ್ಡಿ ಮಾಡಿದಾಗ ಈಜಿಪ್ಟಿನವನೊಬ್ಬನು ನಮ್ಮ ನೆರವಿಗೆ ಬಂದು ನಮಗೂ ನಮ್ಮ ಕುರಿಗಳಿಗೂ ನೀರು ಸೇದಿ ಕೊಟ್ಟನು” ಎಂದು ಉತ್ತರಿಸಿದರು.
20 ಅದಕ್ಕೆ ರೆಗೂವೇಲನು ತನ್ನ ಹೆಣ್ಣುಮಕ್ಕಳಿಗೆ, “ಆ ಮನುಷ್ಯನು ಎಲ್ಲಿದ್ದಾನೆ? ಅವನನ್ನು ನೀವು ಯಾಕೆ ಬಿಟ್ಟುಬಂದಿರಿ? ಅವನನ್ನು ಕರೆಯಿರಿ; ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.
21 ಮೋಶೆಯು ರೆಗೂವೇಲನೊಂದಿಗೆ ವಾಸಮಾಡಲು ಇಷ್ಟಪಟ್ಟನು; ರೆಗೂವೇಲನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆ ಮಾಡಿಸಿದನು. 22 ಚಿಪ್ಪೋರಳು ಗಂಡುಮಗುವಿಗೆ ಜನ್ಮವಿತ್ತಳು. ಮೋಶೆಯು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದ ಕಾರಣ ಆ ಮಗುವಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು.
ಇಸ್ರೇಲರಿಗೆ ಸಹಾಯ ಮಾಡಲು ದೇವರ ನಿರ್ಧಾರ
23 ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು. 24 ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮನೊಂದಿಗೂ ಇಸಾಕನೊಂದಿಗೂ ಯಾಕೋಬನೊಂದಿಗೂ ಮಾಡಿದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡನು. 25 ದೇವರು ಇಸ್ರೇಲರ ಸಂಕಟಗಳನ್ನು ನೋಡಿ ಅವರಿಗೆ ಸಹಾಯಮಾಡಲು ನಿಶ್ಚಯಿಸಿಕೊಂಡನು.
27 ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು; 28 ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು.
Kannada Holy Bible: Easy-to-Read Version. All rights reserved. © 1997 Bible League International