Revised Common Lectionary (Semicontinuous)
ರಚನೆಗಾರ: ದಾವೀದ.
29 ದೇವಪುತ್ರರೇ,[a] ಯೆಹೋವನನ್ನು ಸ್ತುತಿಸಿರಿ!
ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.
2 ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ.
ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.[b]
3 ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು.
ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು.
4 ಯೆಹೋವನ ಸ್ವರವು
ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.
5 ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ.
ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು.
6 ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ;
ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ.
7 ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
8 ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು.
ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು.
9 ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ;
ಕಾಡಿನ ಮರಗಳು ಬರಿದಾಗುತ್ತವೆ;
ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.
10 ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು.
ಯೆಹೋವನು ಸದಾಕಾಲ ರಾಜನಾಗಿರುವನು.
11 ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ.
ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.
ದಾವೀದ ರಾಜನ ಮರಣ
2 ದಾವೀದನು ಸಾಯುವ ಕಾಲವು ಹತ್ತಿರವಾಯಿತು. ಆದ್ದರಿಂದ ದಾವೀದನು ಸೊಲೊಮೋನನೊಂದಿಗೆ ಮಾತನಾಡುತ್ತಾ, ಅವನಿಗೆ, 2 “ಎಲ್ಲರಂತೆ ನನಗೂ ಸಾಯುವ ಕಾಲ ಸಮೀಪಿಸಿತು. ನೀನಾದರೋ ಬಲಿಷ್ಠನಾಗಿರು; ಧೈರ್ಯವಂತನಾಗಿರು. 3 ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ. 4 ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”
10 ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು. 11 ದಾವೀದನು ಇಸ್ರೇಲನ್ನು ನಲವತ್ತು ವರ್ಷಗಳ ಕಾಲ ಆಳಿದನು. ಅವನು ಏಳು ವರ್ಷ ಹೆಬ್ರೋನಿನಲ್ಲೂ ಮೂವತ್ತಮೂರು ವರ್ಷ ಜೆರುಸಲೇಮಿನಲ್ಲೂ ಆಡಳಿತ ನಡೆಸಿದನು.
ಸೊಲೊಮೋನ ಮತ್ತು ಅದೋನೀಯ
12 ಈಗ ಸೊಲೊಮೋನನು ತನ್ನ ತಂದೆಯ ಸಿಂಹಾಸನದ ಮೇಲೆ ಕುಳಿತು ಆಡಳಿತ ನಡೆಸತೊಡಗಿದನು. ರಾಜ್ಯವು ಅವನ ಪೂರ್ಣ ಹತೋಟಿಯಲ್ಲಿ ಇತ್ತು.
ಯೇಸುವನ್ನು ಹಿಂಬಾಲಿಸಿದ ಪೇತ್ರ, ಯಾಕೋಬ, ಯೋಹಾನ
(ಮತ್ತಾಯ 4:18-22; ಮಾರ್ಕ 1:16-20)
5 ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು. 2 ಸರೋವರದ ದಡದಲ್ಲಿ ನಿಂತಿದ್ದ ಎರಡು ದೋಣಿಗಳನ್ನು ಯೇಸು ನೋಡಿದನು. ಬೆಸ್ತರು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. 3 ಯೇಸು ಸೀಮೋನನ ದೋಣಿಯಲ್ಲಿ ಹತ್ತಿ ಕುಳಿತುಕೊಂಡು ದೋಣಿಯನ್ನು ದಡದಿಂದ ಸ್ವಲ್ಪದೂರಕ್ಕೆ ನೂಕಬೇಕೆಂದು ಸೀಮೋನನಿಗೆ ಹೇಳಿದನು.
4 ಉಪದೇಶ ಮಾಡಿದಮೇಲೆ ಯೇಸು ಸೀಮೋನನಿಗೆ, “ದೋಣಿಯನ್ನು ಆಳವಾದ ನೀರಿನ ಸ್ಥಳಕ್ಕೆ ನಡೆಸಿ, ಮೀನುಹಿಡಿಯಲು ನಿಮ್ಮ ಬಲೆಗಳನ್ನು ನೀರಿನಲ್ಲಿ ಹಾಕಿರಿ” ಎಂದು ಹೇಳಿದನು.
5 ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಒಂದು ಮೀನೂ ಸಿಕ್ಕಲಿಲ್ಲ. ಆದರೆ, ನೀನು ಹೇಳಿದ್ದರಿಂದ ಬೀಸುತ್ತೇವೆ” ಎಂದನು. 6 ಬೆಸ್ತರು ತಮ್ಮ ಬಲೆಗಳನ್ನು ನೀರಿನೊಳಗೆ ಬೀಸಿದಾಗ, ಅವರ ಬಲೆಗಳು ಹರಿದುಹೋಗುವಷ್ಟು ಮೀನುಗಳು ರಾಶಿರಾಶಿಯಾಗಿ ಬಲೆಗಳಲ್ಲಿ ತುಂಬಿಕೊಂಡವು. 7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸ್ನೇಹಿತರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಮೀನುಗಳನ್ನು ತುಂಬಿಸಲು ದೋಣಿಗಳೆರಡೂ ಮುಳುಗುವಂತಾದವು.
8-9 ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು. 10 ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಆಶ್ಚರ್ಯಪಟ್ಟರು. (ಇವರಿಬ್ಬರೂ ಸೀಮೋನನ ಪಾಲುಗಾರರಾಗಿದ್ದರು.)
ಯೇಸು ಸೀಮೋನನಿಗೆ, “ಭಯಪಡಬೇಡ. ಇಂದಿನಿಂದ ನೀನು ಮೀನನ್ನು ಹಿಡಿಯದೆ, ಮನುಷ್ಯರನ್ನು ಒಟ್ಟುಗೂಡಿಸಲು ದುಡಿಯುವೆ!” ಎಂದು ಹೇಳಿದನು.
11 ಅವರು ತಮ್ಮ ದೋಣಿಗಳನ್ನು ದಡಕ್ಕೆ ಸಾಗಿಸಿದ ಮೇಲೆ ಎಲ್ಲವನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
Kannada Holy Bible: Easy-to-Read Version. All rights reserved. © 1997 Bible League International