Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
1 ರಾಜರುಗಳು 17:8-16

ನಂತರ ಯೆಹೋವನು ಎಲೀಯನಿಗೆ, “ಚೀದೋನ್ಯರ ಚಾರೆಪ್ತಗೆ ಹೋಗಿ ಅಲ್ಲಿ ವಾಸಮಾಡು. ಆ ಸ್ಥಳದಲ್ಲಿ ಒಬ್ಬ ವಿಧವೆಯು ವಾಸಿಸುತ್ತಾಳೆ. ನಿನಗೆ ಆಹಾರವನ್ನು ಕೊಡುವಂತೆ ಅವಳಿಗೆ ನಾನು ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.

10 ಎಲೀಯನು ಚಾರೆಪ್ತಗೆ ಹೋದನು. ಅವನು ಊರು ಬಾಗಿಲಿಗೆ ಹೋದಾಗ, ಅಲ್ಲಿ ಒಬ್ಬ ವಿಧವೆಯನ್ನು ನೋಡಿದನು. ಆ ಸ್ತ್ರೀಯು ಬೆಂಕಿಗಾಗಿ ಸೌದೆಯನ್ನು ಒಟ್ಟುಗೂಡಿಸುತ್ತಿದ್ದಳು. ಎಲೀಯನು ಅವಳಿಗೆ, “ನನಗೆ ಕುಡಿಯುವುದಕ್ಕೆ ಚಂಬಿನಲ್ಲಿ ಸ್ವಲ್ಪ ನೀರನ್ನು ನೀನು ತರುವೆಯಾ?” ಎಂದು ಕೇಳಿದನು. 11 ಆ ಸ್ತ್ರೀಯು ಅವನಿಗೆ ನೀರನ್ನು ತರಲು ಹೋಗುತ್ತಿರುವಾಗ, ಎಲೀಯನು, “ದಯವಿಟ್ಟು ಒಂದು ತುಂಡು ರೊಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.

12 ಆ ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.

13 ಎಲೀಯನು ಆ ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ಆ ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ. 14 ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ಆ ಮಡಕೆಯಲ್ಲಿರುವ ಹಿಟ್ಟು ಎಂದೆಂದಿಗೂ ಖಾಲಿಯಾಗುವುದಿಲ್ಲ. ಆ ಪಾತ್ರೆಯಲ್ಲಿ ಯಾವಾಗಲೂ ಎಣ್ಣೆಯಿರುತ್ತದೆ. ಯೆಹೋವನು ಭೂಮಿಯ ಮೇಲೆ ಮಳೆಯನ್ನು ಸುರಿಸುವ ತನಕ ಇದು ಹೀಗೆಯೇ ಮುಂದುವರಿಯುತ್ತದೆ’” ಎಂದು ಹೇಳಿದನು.

15 ಆ ಸ್ತ್ರೀಯು ತನ್ನ ಮನೆಗೆ ಹೋದಳು. ಎಲೀಯನು ಹೇಳಿದಂತೆ ಆಕೆಯು ಮಾಡಿದಳು. ಎಲೀಯನು, ಆ ಸ್ತ್ರೀಯು ಮತ್ತು ಅವಳ ಮಗನು ಅನೇಕ ದಿನಗಳಿಗಾಗುವಷ್ಟು ಆಹಾರವನ್ನು ಹೊಂದಿದ್ದರು. 16 ಮಡಕೆಯಲ್ಲಿದ್ದ ಹಿಟ್ಟು ಮತ್ತು ಪಾತ್ರೆಯಲ್ಲಿದ್ದ ಎಣ್ಣೆ ಎಂದೆಂದಿಗೂ ಖಾಲಿಯಾಗಲಿಲ್ಲ. ಯೆಹೋವನು ಎಲೀಯನ ಮೂಲಕ ಹೇಳಿದ್ದಂತೆಯೇ ಇದು ಸಂಭವಿಸಿತು.

1 ರಾಜರುಗಳು 17:17-24

17 ಸ್ವಲ್ಪಕಾಲದ ತರುವಾಯ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಅವನಿಗೆ ರೋಗವು ಹೆಚ್ಚಾಗುತ್ತಲೇ ಇತ್ತು. ಕೊನೆಗೆ ಆ ಬಾಲಕನು ಉಸಿರಾಡುವುದನ್ನೇ ನಿಲ್ಲಿಸಿದನು. 18 ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.

19 ಎಲೀಯನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿದನು. ಎಲೀಯನು ಬಾಲಕನನ್ನು ಅವಳಿಂದ ತೆಗೆದುಕೊಂಡು, ಮೇಲಂತಸ್ತಿಗೆ ಹೋದನು. ಅವನು ನೆಲೆಸಿದ್ದ ಕೊಠಡಿಯ ಹಾಸಿಗೆಯ ಮೇಲೆ ಆ ಬಾಲಕನನ್ನು ಮಲಗಿಸಿದನು. 20 ನಂತರ ಎಲೀಯನು, “ನನ್ನ ದೇವರಾದ ಯೆಹೋವನೇ, ಈ ವಿಧವೆಯು ತನ್ನ ಮನೆಯಲ್ಲಿ ನನಗೆ ಸ್ಥಳವನ್ನು ಕೊಟ್ಟಿದ್ದಾಳೆ. ನೀನು ಅವಳಿಗೆ ಈ ಕೇಡನ್ನು ಮಾಡುವೆಯಾ? ನೀನು ಅವಳ ಮಗುವನ್ನು ಸಾಯಿಸುವೆಯಾ?” ಎಂದು ಪ್ರಾರ್ಥಿಸಿದನು. 21 ಬಳಿಕ ಆ ಬಾಲಕನ ಮೇಲೆ ಎಲೀಯನು ಮೂರು ಬಾರಿ ಬೋರಲಬಿದ್ದು, “ನನ್ನ ದೇವರಾದ ಯೆಹೋವನೇ, ಈ ಬಾಲಕನಿಗೆ ಮತ್ತೆ ಜೀವವನ್ನು ಕೊಡು” ಎಂದು ಪ್ರಾರ್ಥಿಸಿದನು.

22 ಯೆಹೋವನು ಎಲೀಯನ ಪ್ರಾರ್ಥನೆಗೆ ಕಿವಿಗೊಟ್ಟನು. ಆ ಬಾಲಕನು ಮತ್ತೆ ಉಸಿರಾಡಲಾರಂಭಿಸಿದನು. ಅವನು ಜೀವಂತನಾದನು! 23 ಎಲೀಯನು ಆ ಬಾಲಕನನ್ನು ಕೆಳ ಅಂತಸ್ತಿಗೆ ಕರೆದೊಯ್ದನು. ಎಲೀಯನು ಬಾಲಕನನ್ನು ಅವನ ತಾಯಿಗೆ ಒಪ್ಪಿಸಿ, “ನಿನ್ನ ಮಗ ಬದುಕಿದ್ದಾನೆ, ನೋಡು” ಎಂದು ಹೇಳಿದನು.

24 ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.

ಕೀರ್ತನೆಗಳು 146

146 ಯೆಹೋವನಿಗೆ ಸ್ತೋತ್ರವಾಗಲಿ!
    ನನ್ನ ಮನವೇ, ಯೆಹೋವನನ್ನು ಸ್ತುತಿಸು!
ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು;
    ಆತನನ್ನು ಸಂಕೀರ್ತಿಸುವೆನು.
ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ.
    ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.
ಮನುಷ್ಯರು ಸತ್ತು ಸಮಾಧಿಗೆ ಸೇರುವರು;
    ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.
ಯಾರಿಗೆ ದೇವರು ಸಹಾಯಕನೋ,
    ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.
ಯೆಹೋವನು ಆಕಾಶವನ್ನೂ ಭೂಮಿಯನ್ನೂ
    ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು.
ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.
ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ;
    ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ.
ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.
    ಯೆಹೋವನು ಕುರುಡರಿಗೆ ದೃಷ್ಟಿಕೊಡುವನು.
ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು.
    ಯೆಹೋವನು ನೀತಿವಂತರನ್ನು ಪ್ರೀತಿಸುವನು.
ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ.
    ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ.
    ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.
10 ಯೆಹೋವನು ಸದಾಕಾಲ ಆಳುವನು!
    ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು!

ಯೆಹೋವನಿಗೆ ಸ್ತೋತ್ರವಾಗಲಿ!

ಗಲಾತ್ಯದವರಿಗೆ 1:11-24

ಪೌಲನ ಅಧಿಕಾರ ದೇವರಿಂದ ಬಂದದ್ದು

11 ಸಹೋದರರೇ, ನಾವು ಸಾರಿದ ಸುವಾರ್ತೆ ಮನುಷ್ಯರಿಂದ ಬಂದದ್ದಲ್ಲವೆಂಬುದು ನಿಮಗೆ ತಿಳಿದಿರಲಿ. 12 ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.

13 ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು. 14 ಯೆಹೂದ್ಯಧರ್ಮದ ನಾಯಕನಾಗಲು ನನ್ನ ಸಮವಯಸ್ಕರರಿಗಿಂತ ಎಷ್ಟೋ ಕಾರ್ಯಗಳನ್ನು ಮಾಡಿದೆನು. ನಮ್ಮ ಪೂರ್ವಿಕರ ಸಂಪ್ರದಾಯಗಳನ್ನು ಬೇರೆಲ್ಲರಿಗಿಂತಲೂ ಅತ್ಯಧಿಕ ನಿಷ್ಠೆಯಿಂದ ಅನುಸರಿಸಿದೆನು.

15 ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು. 16 ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ. 17 ಅಪೊಸ್ತಲರನ್ನು ನೋಡುವುದಕ್ಕಾಗಿ ಜೆರುಸಲೇಮಿಗೂ ಹೋಗಲಿಲ್ಲ. ಅವರು ನನಗಿಂತ ಮೊದಲೇ ಅಪೊಸ್ತಲರಾಗಿದ್ದರು. ಆದರೆ, ನಾನು ತಡಮಾಡದೆ ಅರೇಬಿಯಾಕ್ಕೆ ಹೋದೆನು. ಆ ಬಳಿಕ ದಮಸ್ಕ ಪಟ್ಟಣಕ್ಕೆ ಹಿಂತಿರುಗಿದೆನು.

18 ಮೂರು ವರ್ಷಗಳ ನಂತರ ಪೇತ್ರನನ್ನು ಭೇಟಿಯಾಗಲು ಜೆರುಸಲೇಮಿಗೆ ಹೋದೆನು. ಅವನೊಂದಿಗೆ ಹದಿನೈದು ದಿನಗಳ ಕಾಲ ಇದ್ದೆನು. 19 ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ. 20 ನಾನು ಬರೆಯುತ್ತಿರುವ ಈ ಸಂಗತಿಗಳು ಸುಳ್ಳಲ್ಲವೆಂದು ದೇವರಿಗೆ ಗೊತ್ತಿದೆ. 21 ತರುವಾಯ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.

22 ಕ್ರಿಸ್ತನಲ್ಲಿರುವ ಜುದೇಯದ ಸಭೆಗಳವರು ನನ್ನನ್ನು ಹಿಂದೆಂದೂ ಭೇಟಿಯಾಗಿರಲಿಲ್ಲ. 23 “ಈ ಮನುಷ್ಯನು ನಮ್ಮನ್ನು ಹಿಂಸಿಸುತ್ತಿದ್ದನು. ಆದರೆ ಈಗ ಇವನು ತಾನು ಮೊದಲೊಮ್ಮೆ ನಾಶಮಾಡಲು ಪ್ರಯತ್ನಿಸಿದ ನಂಬಿಕೆಯ ಬಗ್ಗೆ ಜನರಿಗೆ ಹೇಳುತ್ತಿದ್ದಾನೆ” ಎಂಬುದನ್ನು ಮಾತ್ರ ಅವರು ಕೇಳಿದ್ದರು. 24 ಅವರು ನನ್ನ ನಿಮಿತ್ತ ದೇವರನ್ನು ಕೊಂಡಾಡಿದರು.

ಲೂಕ 7:11-17

ಸತ್ತವನಿಗೆ ಜೀವದಾನ

11 ಮರುದಿನ ಯೇಸು ನಾಯಿನ್ ಎಂಬ ಊರಿಗೆ ಹೋದನು. ಯೇಸುವಿನೊಡನೆ ಆತನ ಶಿಷ್ಯರೂ ಹೋಗುತ್ತಿದ್ದರು. ಅವರೊಡನೆ ಅನೇಕ ಜನರು ದೊಡ್ಡ ಸಮೂಹವಾಗಿ ಹೋಗುತ್ತಿದ್ದರು. 12 ಯೇಸು ಊರಬಾಗಿಲಿನ ಬಳಿಗೆ ಬಂದಾಗ, ಸತ್ತುಹೋಗಿದ್ದ ಒಬ್ಬನನ್ನು ಸಮಾಧಿ ಮಾಡುವುದಕ್ಕಾಗಿ ಹೊತ್ತುಕೊಂಡು ಹೋಗುತ್ತಿದ್ದ ಜನರ ಗುಂಪನ್ನು ಕಂಡನು. ವಿಧವೆಯೊಬ್ಬಳ ಒಬ್ಬನೇ ಮಗನು ಸತ್ತುಹೋಗಿದ್ದನು. ಅವನ ಶವವನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಊರಿನ ಅನೇಕ ಜನರು ಆಕೆಯೊಡನೆ ಇದ್ದರು. 13 ಪ್ರಭುವು (ಯೇಸು) ಆಕೆಯನ್ನು ಕಂಡು ತನ್ನ ಹೃದಯದಲ್ಲಿ ಮರುಕಗೊಂಡು, “ಅಳಬೇಡ” ಎಂದು ಹೇಳಿ 14 ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು. 15 ಆಗ ಅವನು ಎದ್ದು ಕುಳಿತುಕೊಂಡು ಮಾತಾಡತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.

16 ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.

17 ಯೇಸುವಿನ ಕುರಿತಾದ ಈ ಸುದ್ದಿಯು ಜುದೇಯದಲ್ಲಿಯೂ ಅದರ ಸುತ್ತಮುತ್ತಲಿನ ಎಲ್ಲಾ ಸ್ಥಳಗಳಲ್ಲಿಯೂ ಹಬ್ಬಿಕೊಂಡಿತು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International