Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 17:1-7

ಪ್ರಾರ್ಥನೆ. ರಚನೆಗಾರ: ದಾವೀದ.

17 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು.
    ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ.
    ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ.
    ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ
ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ.
    ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
ನಿನ್ನ ಆಜ್ಞೆಗಳಿಗೆ ವಿಧೇಯನಾಗಲು
    ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.
ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ.
    ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.
ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ.
    ಆದ್ದರಿಂದ ಈಗಲೂ ನನಗೆ ಕಿವಿಗೊಡು.
ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ
    ನೀನು ಸಹಾಯಮಾಡುವೆ;
ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು.
    ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.

ಕೀರ್ತನೆಗಳು 17:15

15 ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು.
    ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.

ಯೆಶಾಯ 43:1-7

ದೇವರು ಯಾವಾಗಲೂ ತನ್ನ ಜನರೊಂದಿಗಿರುವನು

43 ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ. ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು. ಯಾಕೆಂದರೆ ಯೆಹೋವನಾದ ನಾನೇ ನಿನ್ನ ದೇವರು. ಇಸ್ರೇಲಿನ ಪರಿಶುದ್ಧನಾದ ನಾನೇ ನಿನ್ನ ರಕ್ಷಕನು. ಈಜಿಪ್ಟನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನ್ನನ್ನು ನನ್ನವನನ್ನಾಗಿ ಮಾಡಿಕೊಳ್ಳಲು ನಿನಗೆ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟೆನು. ನೀನು ನನಗೆ ಅಮೂಲ್ಯನಾದುದರಿಂದ ನಾನು ನಿನ್ನನ್ನು ಗೌರವಿಸಿ ಪ್ರೀತಿಸುವೆನು. ನೀನು ವಾಸಿಸುವಂತೆ ನಾನು ನಿನಗೆ ಎಲ್ಲಾ ಜನರನ್ನು ಮತ್ತು ಜನಾಂಗಗಳನ್ನು ಕೊಡುವೆನು.

“ಆದ್ದರಿಂದ ಭಯಪಡಬೇಡ, ನಾನೇ ನಿನ್ನೊಂದಿಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು. ನಾನು ಉತ್ತರಕ್ಕೆ ‘ನನ್ನ ಜನರನ್ನು ಬಿಟ್ಟುಕೊಡು’ ಎಂದು ಹೇಳುವೆನು. ದಕ್ಷಿಣಕ್ಕೆ, ‘ನನ್ನ ಜನರನ್ನು ಸೆರೆಮನೆಯಲ್ಲಿರಿಸಬೇಡ’ ಎಂದು ಹೇಳುವೆನು. ಬಹುದೂರ ದೇಶಗಳಿಂದ ನನ್ನ ಮಕ್ಕಳನ್ನು ನನ್ನ ಬಳಿಗೆ ಕರೆದುಕೊಂಡು ಬಾ. ನನ್ನ ಹೆಸರನ್ನು ಹೊಂದಿರುವ ನನ್ನ ಜನರನ್ನೆಲ್ಲಾ ನನ್ನ ಬಳಿಗೆ ಕರೆದುಕೊಂಡು ಬಾ. ನನಗಾಗಿಯೇ ನಿರ್ಮಿಸಿದ ನನ್ನ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವರನ್ನು ನಿರ್ಮಿಸಿದಾತನು ನಾನೇ, ಅವರು ನನ್ನವರೇ!

ಮತ್ತಾಯ 15:32-39

ನಾಲ್ಕು ಸಾವಿರಕ್ಕಿಂತ ಹೆಚ್ಚು ಜನರಿಗೆ ಆಹಾರದಾನ

(ಮಾರ್ಕ 8:1-10)

32 ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು.

33 ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು.

34 ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದನು.

ಶಿಷ್ಯರು, “ನಮ್ಮಲ್ಲಿ ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳಿವೆ” ಎಂದರು.

35 ಆಗ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವುದಕ್ಕೆ ಆತನು ಆಜ್ಞಾಪಿಸಿ, 36 ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಅವುಗಳನ್ನು ಜನರಿಗೆ ಹಂಚಿದರು. 37 ಜನರೆಲ್ಲರೂ ತಿಂದು ತೃಪ್ತರಾದರು. ಬಳಿಕ ತಿನ್ನಲಾರದೆ ಉಳಿದುಹೋದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು. 38 ಅಂದು ಊಟ ಮಾಡಿದ್ದವರಲ್ಲಿ ಗಂಡಸರೇ ಸುಮಾರು ನಾಲ್ಕುಸಾವಿರ ಮಂದಿಯಿದ್ದರು. ಇವರಲ್ಲದೆ ಹೆಂಗಸರು ಮತ್ತು ಮಕ್ಕಳು ಸಹ ಊಟಮಾಡಿದರು. 39 ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International