Revised Common Lectionary (Semicontinuous)
ಇಸ್ರೇಲರಿಗೆ ಹಿಂಸೆ
8 ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ. 9 ಈ ರಾಜನು ತನ್ನ ಜನರಿಗೆ, “ಇಸ್ರೇಲರ ಸಂಖ್ಯೆಯು ಹೆಚ್ಚಾಯಿತು; ಅವರು ನಮಗಿಂತಲೂ ಬಲಿಷ್ಠರಾದರು. 10 ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು.
11 ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.
12 ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು. 13 ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು.
14 ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆ, ಗಾರೆ, ಬೇಸಾಯ ಮತ್ತು ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.
ದೇವರನ್ನು ಹಿಂಬಾಲಿಸಿದ ದಾದಿಯರು
15 ಇಸ್ರೇಲಿನ ಸ್ತ್ರೀಯರಿಗೆ ಹೆರಿಗೆ ಮಾಡಿಸಲು ಇಬ್ರಿಯರಾದ ಇಬ್ಬರು ದಾದಿಯರಿದ್ದರು. ಇವರ ಹೆಸರು: ಶಿಫ್ರಾ ಮತ್ತು ಪೂಗಾ. ಈಜಿಪ್ಟಿನ ರಾಜನು ಈ ದಾದಿಯರೊಡನೆ ಮಾತಾಡಿ ಅವರಿಗೆ, 16 “ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು.
17 ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.
18 ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು.
19 ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯ ಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು. 20-21 ಈ ದಾದಿಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದ ಕಾರಣ ಆತನು ಅವರನ್ನೂ ಅವರ ಕುಟುಂಬಗಳನ್ನೂ ಅಭಿವೃದ್ಧಿಪಡಿಸಿದನು.
ಇದಲ್ಲದೆ ಇಸ್ರೇಲರ ಸಂಖ್ಯೆಯು ಅಧಿಕವಾಗಿ ಬೆಳೆಯತೊಡಗಿತು. 22 ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.
ಮೋಶೆಯ ಬಾಲ್ಯ
2 ಲೇವಿ ಕುಟುಂಬದ ಒಬ್ಬನು ಲೇವಿ ಕುಟುಂಬಕ್ಕೆ ಸೇರಿದ ಸ್ತ್ರೀಯೊಬ್ಬಳನ್ನು ಮದುವೆಯಾದನು. 2 ಆ ಸ್ತ್ರೀಯು ಗರ್ಭಿಣಿಯಾಗಿ ಗಂಡುಮಗುವಿಗೆ ಜನ್ಮವಿತ್ತಳು. ಮಗುವು ಸುಂದರವಾಗಿತ್ತು. ಆಕೆ ಮೂರು ತಿಂಗಳವರೆಗೆ ಆ ಮಗುವನ್ನು ಬಚ್ಚಿಟ್ಟಳು. 3 ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು. 4 ಮಗುವಿಗೆ ಏನಾಗುವುದೋ ಎಂದು ನೋಡಲು ಮಗುವಿನ ಅಕ್ಕ ಅಲ್ಲಿದ್ದುಕೊಂಡು ಕಾಯುತ್ತಿದ್ದಳು.
5 ಅದೇ ಸಮಯದಲ್ಲಿ ಫರೋಹನ ಮಗಳು ಸ್ನಾನ ಮಾಡುವುದಕ್ಕೆ ನದಿಗೆ ಹೋದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಎತ್ತರವಾದ ಹುಲ್ಲಿನ ಮೇಲಿದ್ದ ಬುಟ್ಟಿಯನ್ನು ನೋಡಿ ತನ್ನ ಸೇವಕಿಯರಲ್ಲಿ ಒಬ್ಬಳಿಗೆ, “ಹೋಗಿ ಅದನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು. 6 ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.
7 ಮಗುವಿನ ಅಕ್ಕ ಆಕೆಯ ಬಳಿಗೆ ಬಂದು, “ಮಗುವಿಗೆ ಹಾಲು ಕುಡಿಸಲು ಒಬ್ಬ ಇಬ್ರಿಯ ಸ್ತ್ರೀಯನ್ನು ಕರೆದುಕೊಂಡು ಬರಲೇ?” ಎಂದು ಕೇಳಿದಳು.
8 ಅರಸನ ಮಗಳು, “ಹೋಗಿ, ಕರೆದುಕೊಂಡು ಬಾ” ಅಂದಳು.
ಆದ್ದರಿಂದ ಆ ಹುಡುಗಿ ಹೋಗಿ ಮಗುವಿನ ಸ್ವಂತ ತಾಯಿಯನ್ನು ಕರೆದುಕೊಂಡು ಬಂದಳು.
9 ರಾಜನ ಮಗಳು ತಾಯಿಗೆ, “ಈ ಮಗುವಿಗೆ ಹಾಲು ಕುಡಿಸಿ ನೋಡಿಕೊ, ನಾನು ನಿನಗೆ ಸಂಬಳ ಕೊಡುವೆನು” ಎಂದು ಹೇಳಿದಳು.
ಆದ್ದರಿಂದ ಆ ಸ್ತ್ರೀ ತನ್ನ ಮಗುವನ್ನು ತೆಗೆದುಕೊಂಡು ಸಾಕಿದಳು. 10 ಮಗುವು ಬೆಳೆಯಿತು. ಸ್ವಲ್ಪಕಾಲದ ನಂತರ ಆ ಸ್ತ್ರೀಯು ಬಾಲಕನನ್ನು ರಾಜನ ಮಗಳ ಬಳಿಗೆ ಕರೆದುಕೊಂಡು ಬಂದಳು. ರಾಜನ ಮಗಳು ಆ ಬಾಲಕನನ್ನು ತನ್ನ ಸ್ವಂತ ಮಗನೆಂದು ಸ್ವೀಕರಿಸಿದಳು. ಆ ಬಾಲಕನನ್ನು ನೀರಿನೊಳಗಿಂದ ಎಳೆದೆನೆಂದು ಆ ಬಾಲಕನಿಗೆ “ಮೋಶೆ” ಎಂದು ಹೆಸರಿಟ್ಟಳು.
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ.
124 ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?
ಇಸ್ರೇಲರೇ, ನನಗೆ ಉತ್ತರಹೇಳಿ.
2 ವೈರಿಗಳು ನಮ್ಮ ಮೇಲೆ ಆಕ್ರಮಣ ಮಾಡಿದಾಗ
ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?
3 ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ
ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು.
4 ಶತ್ರುಸೈನ್ಯಗಳು ನಮ್ಮನ್ನು ಕೊಚ್ಚಿಕೊಂಡು ಹೋಗುವ
ಪ್ರವಾಹದಂತೆಯೂ ಮುಳುಗಿಸುವ ನದಿಯಂತೆಯೂ ಆಗಿರುತ್ತಿದ್ದರು.
5 ಆ ಗರ್ವಿಷ್ಠರು ನಮ್ಮ ಪಾಲಿಗೆ ಬಾಯಿಯವರೆಗೂ
ಮೇಲೇರಿ ಮುಳುಗಿಸುವ ನೀರಿನಂತಾಗುತ್ತಿದ್ದರು.
6 ಯೆಹೋವನಿಗೆ ಸ್ತೋತ್ರವಾಗಲಿ!
ನಮ್ಮ ಶತ್ರುಗಳು ನಮ್ಮನ್ನು ಹಿಡಿದು ಕೊಲ್ಲಲು ಆತನು ಅವಕಾಶ ಕೊಡಲಿಲ್ಲ.
7 ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ.
ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು.
8 ನಮಗೆ ಸಹಾಯವು ಯೆಹೋವನಿಂದಲೇ ಬಂದಿತು.
ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ.
ನಿಮ್ಮ ಜೀವಿತಗಳನ್ನು ದೇವರಿಗೆ ಕೊಡಿರಿ
12 ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ. 2 ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.
3 ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ. 4 ಪ್ರತಿಯೊಬ್ಬರಿಗೂ ಒಂದು ದೇಹವಿದೆ. ಆ ದೇಹಕ್ಕೆ ಅನೇಕ ಅಂಗಾಂಗಗಳಿವೆ. ಆ ಅಂಗಾಂಗಗಳು ಒಂದೇ ಕಾರ್ಯವನ್ನು ಮಾಡುವುದಿಲ್ಲ. 5 ಹೀಗೆ ನಮ್ಮಲ್ಲಿ ಅನೇಕರಿದ್ದರೂ ಕ್ರಿಸ್ತನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ನಾವು ಆ ದೇಹದ ಅಂಗಗಳಾಗಿದ್ದೇವೆ. ಆ ದೇಹದ ಪ್ರತಿಯೊಂದು ಅಂಗವು ಇತರ ಅಂಗಗಳಿಗೂ ಸೇರಿಕೊಂಡಿದೆ.
6 ನಾವೆಲ್ಲರೂ ಬೇರೆಬೇರೆ ವರಗಳನ್ನು ಹೊಂದಿದ್ದೇವೆ. ದೇವರು ನಮಗೆ ಕೊಟ್ಟಿರುವ ಕೃಪೆಯಿಂದಲೇ ಪ್ರತಿಯೊಂದು ವರವು ಬಂದಿದೆ. ಪ್ರವಾದಿಸುವ ವರವನ್ನು ಹೊಂದಿರುವವನು ತನಗಿರುವ ನಂಬಿಕೆಯೊಂದಿಗೆ ಆ ವರವನ್ನು ಉಪಯೋಗಿಸಬೇಕು. 7 ಸೇವೆಮಾಡುವ ವರವನ್ನು ಹೊಂದಿರುವವನು ಸೇವೆಮಾಡಬೇಕು. 8 ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.
ಯೇಸುವೇ ಕ್ರಿಸ್ತನೆಂದು ಪೇತ್ರನ ಪ್ರಕಟನೆ
(ಮಾರ್ಕ 8:27-30; ಲೂಕ 9:18-21)
13 ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.
14 ಶಿಷ್ಯರು, “ಕೆಲವರು ‘ಸ್ನಾನಿಕ ಯೋಹಾನ’ನೆಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ನೆಂದು ಹೇಳುತ್ತಾರೆ. ಮತ್ತೆ ಕೆಲವರು ‘ಯೆರೆಮೀಯ’ನೆಂದು ಇಲ್ಲವೆ ‘ಪ್ರವಾದಿಗಳಲ್ಲಿ ಒಬ್ಬ’ನೆಂದು ಹೇಳುತ್ತಾರೆ” ಎಂದು ಉತ್ತರಕೊಟ್ಟರು.
15 ಅದಕ್ಕೆ ಆತನು, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು.
16 ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.
17 ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು. 18 ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ.[a] ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು. 19 ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.
20 ಬಳಿಕ ಯೇಸು ತನ್ನ ಶಿಷ್ಯರಿಗೆ, ತಾನು ಕ್ರಿಸ್ತನೆಂಬುದನ್ನು ಯಾರಿಗೂ ಹೇಳಕೂಡದೆಂದು ಎಚ್ಚರಿಕೆ ಕೊಟ್ಟನು.
Kannada Holy Bible: Easy-to-Read Version. All rights reserved. © 1997 Bible League International