Revised Common Lectionary (Semicontinuous)
ಸ್ತುತಿಗೀತೆ. ರಚನೆಗಾರ: ದಾವೀದ.
139 ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ
ಸಂಪೂರ್ಣವಾಗಿ ತಿಳಿದುಕೊಂಡಿರುವೆ.
2 ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ.
ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.
3 ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ.
ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.
4 ಯೆಹೋವನೇ, ನನ್ನ ಬಾಯಿಂದ ಮಾತುಗಳು ಹೊರಡುವುದಕ್ಕಿಂತ ಮೊದಲೇ
ನಾನು ಹೇಳಬೇಕೆಂದಿರುವುದು ನಿನಗೆ ತಿಳಿದಿದೆ.
5 ನೀನು ನನ್ನ ಸುತ್ತಲೂ ಆವರಿಸಿರುವೆ;
ನಿನ್ನ ಹಸ್ತವನ್ನು ನನ್ನ ಮೇಲೆ ಇಟ್ಟಿರುವೆ.
6 ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ,
ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.
13 ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ.
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ.
14 ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.
ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ.
15 ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ.
ತಾಯಿಗರ್ಭದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬುಗಳು ಬೆಳೆಯುವುದನ್ನೂ ನೀನು ನೋಡಿದೆ.
16 ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ.
ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
17 ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಮುಖ್ಯವಾಗಿವೆ.
ಅವು ಅಸಂಖ್ಯಾತವಾಗಿವೆ.
18 ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ.
ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು.
16 ಆಗ ಯೆಹೋವನು ನ್ಯಾಯಾಧೀಶರೆಂಬ ಕೆಲವು ನಾಯಕರನ್ನು ಆರಿಸಿದನು. ಈ ನಾಯಕರು ಇಸ್ರೇಲರನ್ನು ಅವರ ವೈರಿಗಳಿಂದ ಕಾಪಾಡಿದರು. 17 ಆದರೆ ಇಸ್ರೇಲರು ನ್ಯಾಯಾಧೀಶರ ಮಾತನ್ನು ಕೇಳಲಿಲ್ಲ. ಅವರು ಯೆಹೋವನಿಗೆ ನಂಬಿಗಸ್ತರಾಗಿರದೆ ಬೇರೆಬೇರೆ ದೇವರುಗಳನ್ನು ಅನುಸರಿಸಿದರು. ಹಿಂದೆ ಇಸ್ರೇಲರ ಪೂರ್ವಿಕರು ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಿದ್ದರು. ಆದರೆ ಈಗ ಇಸ್ರೇಲರು ಬದಲಾಗಿ ಯೆಹೋವನ ಆಜ್ಞಾಪಾಲನೆಯನ್ನು ನಿಲ್ಲಿಸಿಬಿಟ್ಟರು.
18 ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು. 19 ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.
20 ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, “ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ. 21 ಆದ್ದರಿಂದ ಇನ್ನುಮುಂದೆ ನಾನು ಬೇರೆ ಜನಾಂಗಗಳನ್ನು ಸೋಲಿಸಿ ಇಸ್ರೇಲರ ಮಾರ್ಗವನ್ನು ಸರಾಗಮಾಡುವುದಿಲ್ಲ. ಯೆಹೋಶುವನು ಮರಣ ಹೊಂದಿದಾಗ ಆ ಜನಾಂಗದವರು ಇನ್ನೂ ಈ ಪ್ರದೇಶದಲ್ಲಿದ್ದರು. ಈ ಪ್ರದೇಶದಲ್ಲಿ ವಾಸಿಸಲು ಆ ಜನಾಂಗಗಳಿಗೆ ಇನ್ನು ಮೇಲೆಯೂ ಆಸ್ಪದಕೊಡುತ್ತೇನೆ. 22 ಇಸ್ರೇಲರು ತಮ್ಮ ಪೂರ್ವಿಕರಂತೆ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾರೆಯೇ ಎಂಬುದನ್ನು ನಾನು ಆ ಜನಾಂಗಗಳ ಮೂಲಕ ಪರೀಕ್ಷಿಸಿ ನೋಡುತ್ತೇನೆ” ಎಂದನು. 23 ಯೆಹೋವನು ಆ ಜನಾಂಗಗಳನ್ನು ಆ ಪ್ರದೇಶದಲ್ಲಿ ಇರುವುದಕ್ಕೆ ಬಿಟ್ಟನು. ಆ ಜನಾಂಗಗಳು ಈ ದೇಶವನ್ನು ಬಿಟ್ಟು ಹೋಗುವಂತೆ ಯೆಹೋವನು ಒತ್ತಾಯಪಡಿಸಲಿಲ್ಲ. ಅವರನ್ನು ಸೋಲಿಸಲು ಯೆಹೋಶುವನ ಸೈನ್ಯಕ್ಕೆ ಸಹಾಯ ಮಾಡಲಿಲ್ಲ.
16 ಪೌಲನು ಎದ್ದುನಿಂತುಕೊಂಡು ತನ್ನ ಮಾತುಗಳನ್ನು ಕೇಳಬೇಕೆಂದು ಜನರಿಗೆ ಕೈಸನ್ನೆ ಮಾಡಿ ಹೀಗೆಂದನು: “ನನ್ನ ಯೆಹೂದ್ಯ ಸಹೋದರರೇ, ನಿಜ ದೇವರನ್ನು ಆರಾಧಿಸುವ ಇತರ ಜನರೇ, ದಯವಿಟ್ಟು ನನಗೆ ಕಿವಿಗೊಡಿರಿ! 17 ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು. 18 ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು. 19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು. 20 ಇವೆಲ್ಲಾ ಸುಮಾರು ನಾನೂರ ಐವತ್ತು ವರ್ಷಗಳ ಅವಧಿಯಲ್ಲಿ ನಡೆದವು.
“ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದವರೆಗೆ ದೇವರು ನಮ್ಮ ಜನರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು. 21 ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು. 22 ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.
23 “ದೇವರು ತನ್ನ ವಾಗ್ದಾನಕ್ಕನುಸಾರವಾಗಿ ದಾವೀದನ ಸಂತಾನದವರಲ್ಲಿ ಒಬ್ಬನನ್ನು ಇಸ್ರೇಲರ ರಕ್ಷಕನನ್ನಾಗಿ ಕಳುಹಿಸಿ ಕೊಟ್ಟಿದ್ದಾನೆ. ಆತನೇ ಯೇಸು. 24 ಯೇಸು ಬರುವುದಕ್ಕಿಂತ ಮೊದಲು (ಸ್ನಾನಿಕ) ಯೋಹಾನನು ಯೆಹೂದ್ಯ ಜನರಿಗೆಲ್ಲಾ ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ’ ಎಂದು ಬೋಧಿಸಿದನು. 25 ‘ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ’ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ.
Kannada Holy Bible: Easy-to-Read Version. All rights reserved. © 1997 Bible League International