Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 111

111 ಯೆಹೋವನಿಗೆ ಸ್ತೋತ್ರವಾಗಲಿ!
ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ
    ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು.
ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು.
    ಜನರು ಅವುಗಳಲ್ಲಿ ಸಂತೋಷಿಸುತ್ತಾ ಅವುಗಳನ್ನೇ ಧ್ಯಾನಿಸುವರು.
ಆತನು ಮಹತ್ವವಾದ ಮತ್ತು ಅದ್ಭುತವಾದ ಕಾರ್ಯಗಳನ್ನು ಮಾಡುವನು.
    ಆತನ ನೀತಿಯು ಶಾಶ್ವತವಾದದ್ದು.
ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ
    ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.
ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು;
    ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು.
ಆತನು ಅನ್ಯಜನಾಂಗಗಳ ದೇಶವನ್ನು
    ತನ್ನ ಜನರಿಗೆ ಕೊಡುವುದರ ಮೂಲಕ ಪ್ರಬಲವಾದ ಕಾರ್ಯಗಳನ್ನು ಮಾಡಿದ್ದಾನೆ.
ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ.
    ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ.
ದೇವರ ಆಜ್ಞೆಗಳು ಶಾಶ್ವತವಾಗಿವೆ.
    ಅವು ಯಥಾರ್ಥವಾಗಿಯೂ ಮತ್ತು ಶುದ್ಧವಾಗಿಯೂ ಇವೆ.
ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ.
    ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ.
10 ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ.
    ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ.
ಆತನಿಗೆ ಸದಾಕಾಲ ಸ್ತೋತ್ರವಾಗಲಿ.

ಧರ್ಮೋಪದೇಶಕಾಂಡ 13:1-5

ಸುಳ್ಳು ಪ್ರವಾದಿಗಳು

13 “ಒಬ್ಬ ಪ್ರವಾದಿಯಾಗಲಿ ಕನಸಿನ ಅರ್ಥ ಹೇಳುವವನಾಗಲಿ ನಿಮ್ಮ ಬಳಿಗೆ ಬಂದು ನಿಮಗೊಂದು ಸೂಚಕಕಾರ್ಯವನ್ನಾಗಲಿ ಅದ್ಭುತಕಾರ್ಯವನ್ನಾಗಲಿ ಮಾಡಿತೋರಿಸುತ್ತೇನೆ ಎಂದು ಹೇಳಿದರೂ ಹೇಳಬಹುದು. ಅವನು ಅದ್ಭುತಕಾರ್ಯಗಳನ್ನು ಮಾಡಿತೋರಿಸಬಹುದು. ಆಮೇಲೆ ಅವನು ನಿಮಗೆ ಗೊತ್ತಿಲ್ಲದ ದೇವರನ್ನು ಅನುಸರಿಸಲು ನಿಮಗೆ ಹೇಳಬಹುದು. ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು. ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದುಬಿಡದೆ ಸೇವಿಸಬೇಕು. ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.

ಮತ್ತಾಯ 8:28-9:1

ದೆವ್ವದಿಂದ ಪೀಡಿತರಾಗಿದ್ದ ಇಬ್ಬರಿಗೆ ಬಿಡುಗಡೆ

(ಮಾರ್ಕ 5:1-20; ಲೂಕ 8:26-39)

28 ಯೇಸು ಸರೋವರದ ಮತ್ತೊಂದು ತೀರದಲ್ಲಿದ್ದ ಗದರೇನ ಪ್ರಾಂತ್ಯಕ್ಕೆ ಬಂದನು. ಅಲ್ಲಿ ದೆವ್ವಗಳಿಂದ ಪೀಡಿತರಾಗಿದ್ದ ಇಬ್ಬರು ಯೇಸುವಿನ ಬಳಿಗೆ ಬಂದರು. ಅವರು ಸಮಾಧಿಯ ಗವಿಗಳಲ್ಲಿ ವಾಸವಾಗಿದ್ದರು ಮತ್ತು ಬಹಳ ಅಪಾಯಕಾರಿಗಳಾಗಿದ್ದರು. ಆದ್ದರಿಂದ ಜನರು ಆ ಮಾರ್ಗದಲ್ಲಿ ಹೋಗುತ್ತಿರಲಿಲ್ಲ. 29 ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.

30 ಆ ಸ್ಥಳದ ಹತ್ತಿರ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು. 31 ಆ ದೆವ್ವಗಳು, “ನಾವು ಇವರಿಬ್ಬರನ್ನು ಬಿಟ್ಟುಹೋಗುವಂತೆ ನೀನು ಮಾಡಬೇಕೆಂದಿದ್ದರೆ, ದಯವಿಟ್ಟು ನಮ್ಮನ್ನು ಆ ಹಂದಿಗಳೊಳಗೆ ಕಳುಹಿಸು” ಎಂದು ಬೇಡಿಕೊಂಡವು.

32 ಯೇಸು ಅವುಗಳಿಗೆ, “ಹೋಗಿ” ಅಂದನು. ಆಗ ಆ ದೆವ್ವಗಳು ಅವರಿಬ್ಬರನ್ನು ಬಿಟ್ಟು ಹಂದಿಗಳೊಳಗೆ ಹೋದವು. ಕೂಡಲೇ ಹಂದಿಗಳೆಲ್ಲಾ ಗುಡ್ಡದ ಕೆಳಗೆ ಓಡಿ ಸರೋವರದಲ್ಲಿ ಬಿದ್ದು ನೀರಿನಲ್ಲಿ ಮುಳುಗಿಹೋದವು. 33 ಹಂದಿಗಳನ್ನು ಮೇಯಿಸುತ್ತಿದ್ದವರು ಪಟ್ಟಣದೊಳಕ್ಕೆ ಓಡಿಹೋಗಿ ಹಂದಿಗಳಿಗೂ ದೆವ್ವಗಳಿಂದ ಪೀಡಿತರಾಗಿದ್ದವರಿಗೂ ಸಂಭವಿಸಿದ್ದನ್ನು ಜನರಿಗೆ ತಿಳಿಸಿದರು. 34 ಆಗ ಪಟ್ಟಣದ ಜನರೆಲ್ಲರೂ ಯೇಸುವನ್ನು ನೋಡಲು ಹೋಗಿ, ತಮ್ಮ ಸ್ಥಳವನ್ನು ಬಿಟ್ಟುಹೋಗಬೇಕೆಂದು ಆತನನ್ನು ಬೇಡಿಕೊಂಡರು.

ಸ್ವಸ್ಥತೆಯನ್ನು ಹೊಂದಿದ ಪಾರ್ಶ್ವವಾಯು ರೋಗಿ

(ಮಾರ್ಕ 2:1-12; 5:17-26)

ಯೇಸು ದೋಣಿಯನ್ನು ಹತ್ತಿ ಸರೋವರವನ್ನು ದಾಟಿ ತನ್ನ ಸ್ವಂತ ಊರಿಗೆ ಹೋದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International