Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 22:23-31

23 ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ.
    ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ!
    ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ!
24 ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ;
    ಆತನು ಅವರನ್ನು ದ್ವೇಷಿಸುವುದಿಲ್ಲ.
ಅವರು ಆತನನ್ನು ಕೂಗಿಕೊಳ್ಳುವಾಗ
    ಆತನು ಅವರಿಗೆ ಮರೆಯಾಗುವುದಿಲ್ಲ.

25 ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು;
    ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
26 ಬಡವರು ತಿಂದು ತೃಪ್ತರಾಗುವರು.
    ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ!
    ನಿಮ್ಮ ಹೃದಯವು ಯಾವಾಗಲೂ ಸಂತೋಷವಾಗಿರಲಿ.[a]
27 ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ.
    ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.
28 ಯಾಕೆಂದರೆ ಯೆಹೋವನೇ ರಾಜನು!
    ಆತನು ಜನಾಂಗಗಳನ್ನೆಲ್ಲಾ ಆಳುವನು.
29 ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು.
    ಸಾಯುವವರೂ ಸತ್ತುಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು.
30 ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು.
    ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು.
31 ಪ್ರತಿಯೊಂದು ತಲೆಮಾರಿನವರೂ ತಮ್ಮ ಮಕ್ಕಳಿಗೆ
    ಆತನ ಒಳ್ಳೆಯ ಕಾರ್ಯಗಳ ಬಗ್ಗೆ ಹೇಳುವರು.[b]

ಆದಿಕಾಂಡ 16:7-15

ಹಾಗರಳ ಮಗನಾದ ಇಷ್ಮಾಯೇಲ

ಯೆಹೋವನ ದೂತನು ಹಾಗರಳನ್ನು ಮರುಳುಗಾಡಿನ ಒರತೆಯೊಂದರ ಬಳಿಯಲ್ಲಿ ಕಂಡನು. ಆ ಒರತೆಯು ಶೂರಿಗೆ ಹೋಗುವ ದಾರಿಯ ಬಳಿಯಲ್ಲಿತ್ತು. ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು.

ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.

ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು. 10 ಇದಲ್ಲದೆ ಯೆಹೋವನ ದೂತನು ಹಾಗರಳಿಗೆ, “ನಾನು ನಿನ್ನ ಸಂತತಿಯವರನ್ನು ಅಸಂಖ್ಯಾತರನ್ನಾಗಿ ಮಾಡುವೆನು” ಅಂದನು.

11 ಇದಲ್ಲದೆ ದೇವದೂತನು ಆಕೆಗೆ,

“ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ;
    ನಿನಗೆ ಒಬ್ಬ ಮಗನು ಹುಟ್ಟುವನು.
ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು;
    ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.
12 ಇಷ್ಮಾಯೇಲನು ಕಾಡುಕತ್ತೆಯಂತೆ
    ಗಡುಸಾಗಿದ್ದು ಸ್ವತಂತ್ರವಾಗಿರುವನು.
ಅವನು ಪ್ರತಿಯೊಬ್ಬರಿಗೂ ವಿರೋಧವಾಗಿರುವನು;
    ಪ್ರತಿಯೊಬ್ಬರೂ ಅವನಿಗೆ ವಿರೋಧವಾಗಿರುವರು.
ಅವನು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಾ
    ತನ್ನ ಸಹೋದರರ ಸಮೀಪದಲ್ಲಿ ವಾಸಿಸಿದರೂ ಅವರಿಗೆ ವಿರೋಧವಾಗಿರುವನು.”

ಎಂದು ಹೇಳಿ ಹೊರಟುಹೋದನು.

13 ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’” ಎಂದು ಹೆಸರಿಟ್ಟಳು. 14 ಆದ್ದರಿಂದ ಆ ಬಾವಿಗೆ ಬೀರ್‌ಲಹೈರೋಯಿ (ಬೀರ್‌ಲಹೈರೋಯಿ. ಇದರರ್ಥ: “ನನ್ನನ್ನು ನೋಡುವ ಜೀವಸ್ವರೂಪನ ಬಾವಿ.”) ಎಂದು ಹೆಸರಾಯಿತು. ಈ ಬಾವಿಯು ಕಾದೇಶಿಗೂ ಬೆರೆದಿಗೂ ನಡುವೆ ಇದೆ.

15 ಹಾಗರಳು ಅಬ್ರಾಮನ ಮಗನಿಗೆ ಜನ್ಮಕೊಟ್ಟಳು. ಅಬ್ರಾಮನು ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.

ಮಾರ್ಕ 8:27-30

ಯೇಸುವೇ ಕ್ರಿಸ್ತನೆಂದು ಪೇತ್ರನ ಪ್ರಕಟನೆ

(ಮತ್ತಾಯ 16:13-20; ಲೂಕ 9:18-21)

27 ಯೇಸು ಮತ್ತು ಆತನ ಶಿಷ್ಯರು ಫಿಲಿಪ್ಪನ ಸೆಜರೇಯ ಎಂಬ ಪಟ್ಟಣದ ಸಮೀಪದಲ್ಲಿರುವ ಊರುಗಳಿಗೆ ಹೋದರು. ಅವರು ಪ್ರಯಾಣ ಮಾಡುತ್ತಿರುವಾಗ, ಯೇಸು ತನ್ನ ಶಿಷ್ಯರನ್ನು, “ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.

28 ಅದಕ್ಕೆ ಶಿಷ್ಯರು, “ಕೆಲವರು ನಿನ್ನನ್ನು, ‘ಸ್ನಾನಿಕ ಯೋಹಾನ’ ಎಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ ಎಂದು ಹೇಳುತ್ತಾರೆ. ಇನ್ನು ಕೆಲವು ಜನರು ನಿನ್ನನ್ನು, ‘ಪ್ರವಾದಿಗಳಲ್ಲಿ ಒಬ್ಬನು’ ಎನ್ನುತ್ತಾರೆ” ಎಂದು ಉತ್ತರಿಸಿದರು.

29 ಆಗ ಯೇಸು ಅವರಿಗೆ, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು.

ಕೂಡಲೇ ಪೇತ್ರನು, “ನೀನು ಬರಬೇಕಾದ ಕ್ರಿಸ್ತನು” ಎಂದು ಉತ್ತರಿಸಿದನು.

30 ಯೇಸು ತನ್ನ ಶಿಷ್ಯರಿಗೆ, “ನಾನು ಯಾರೆಂಬುದನ್ನು ಯಾರಿಗೂ ಹೇಳಬೇಡಿ” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International