Revised Common Lectionary (Semicontinuous)
ಕೊರ್ನೇಲಿಯನ ಮನೆಯಲ್ಲಿ ಪೇತ್ರನ ಪ್ರಸಂಗ
34 ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು. 35 ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ. 36 ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!
37 “ಜುದೇಯದಲ್ಲೆಲ್ಲಾ ಏನಾಯಿತೆಂಬುದು ನಿಮಗೆ ಗೊತ್ತಿದೆ. ಗಲಿಲಾಯದಲ್ಲಿ ಯೋಹಾನನು[a] ದೀಕ್ಷಾಸ್ನಾನದ ಬಗ್ಗೆ ಜನರಿಗೆ ಬೋಧಿಸಿದ ಮೇಲೆ ಅದು ಆರಂಭವಾಯಿತು. 38 ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.
39 “ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಆ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು. 40 ಆದರೆ, ದೇವರು ಆತನನ್ನು ಮೂರನೆಯ ದಿನದಲ್ಲಿ ಜೀವಂತವಾಗಿ ಎಬ್ಬಿಸಿದನು! ಯೇಸುವನ್ನು ಸ್ಪಷ್ಟವಾಗಿ ನೋಡುವ ಅವಕಾಶವನ್ನು ದೇವರು ಜನರಿಗೆ ಒದಗಿಸಿಕೊಟ್ಟನು. 41 ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಆ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು.
42 “ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು. 43 ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.
ಸೇವಕರಿಗಾಗಿ ದೇವರ ಔತಣ
6 ಆ ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು.
7 ಆದರೆ ಎಲ್ಲಾ ಜನಾಂಗಗಳನ್ನು ಮತ್ತು ಜನರನ್ನು ಮುಚ್ಚುವ ಒಂದು ಮುಸುಕು ಇದೆ. ಆ ಮುಸುಕು ಯಾವದೆಂದರೆ ಮರಣ. 8 ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.
9 ಆ ಸಮಯದಲ್ಲಿ ಜನರು,
“ನಮ್ಮ ದೇವರು ಇಲ್ಲಿದ್ದಾನೆ.
ಆತನಿಗಾಗಿಯೇ ನಾವು ಕಾಯುತ್ತಿದ್ದೆವು.
ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ.
ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು.
ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು.
118 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ.
ಆತನು ಒಳ್ಳೆಯವನು.
ಆತನ ಪ್ರೀತಿಯು ಶಾಶ್ವತವಾದದ್ದು!
2 ಇಸ್ರೇಲರೇ,
“ಆತನ ಪ್ರೀತಿ ಶಾಶ್ವತವಾದದ್ದು” ಎಂದು ಹೇಳಿರಿ.
14 ನನ್ನ ಬಲವೂ ಜಯಗೀತೆಯೂ ಯೆಹೋವನೇ.
ಆತನೇ ನನ್ನನ್ನು ರಕ್ಷಿಸುವನು!
15 ಜಯೋತ್ಸವವು ನೀತಿವಂತರ ಮನೆಗಳಲ್ಲಿ ಕೇಳಿಬರುತ್ತಿದೆ.
ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿಸಿದ್ದಾನೆ.
16 ಯೆಹೋವನ ಬಲಗೈ ಜಯಗಳಿಸಿದೆ.
ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿದ್ದಾನೆ.
17 ನಾನು ಸಾಯುವುದಿಲ್ಲ;
ನಾನು ಜೀವದಿಂದಿದ್ದು ಯೆಹೋವನ ಕಾರ್ಯಗಳ ಕುರಿತು ಹೇಳುತ್ತೇನೆ.
18 ಯೆಹೋವನು ನನ್ನನ್ನು ಶಿಕ್ಷಿಸಿದರೂ
ಸಾವಿಗೀಡುಮಾಡಲಿಲ್ಲ.
19 ನೀತಿಯ ಬಾಗಿಲುಗಳೇ, ನನಗೋಸ್ಕರ ತೆರೆಯಿರಿ,
ನಾನು ಒಳಗೆ ಬಂದು ಯೆಹೋವನನ್ನು ಆರಾಧಿಸುತ್ತೇನೆ.
20 ಅವು ಯೆಹೋವನ ಬಾಗಿಲುಗಳು.
ನೀತಿವಂತರು ಮಾತ್ರ ಆ ಬಾಗಿಲುಗಳ ಮೂಲಕ ಹೋಗಬಲ್ಲರು.
21 ಯೆಹೋವನೇ, ನನ್ನ ಪ್ರಾರ್ಥನೆಗೆ ನೀನು ಉತ್ತರಿಸಿ
ನನ್ನನ್ನು ರಕ್ಷಿಸಿದ್ದಕ್ಕೋಸ್ಕರ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.
22 ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.
23 ಇದು ಯೆಹೋವನಿಂದಲೇ ಆಯಿತು.
ನಮಗಂತೂ ಇದು ಆಶ್ಚರ್ಯಕರವಾಗಿದೆ!
24 ಈ ದಿನವನ್ನು ಮಾಡಿದಾತನು ಯೆಹೋವನೇ.
ಇಂದೇ ನಾವು ಉಲ್ಲಾಸದಿಂದ ಆನಂದಿಸೋಣ.
ಕ್ರಿಸ್ತನ ವಿಷಯವಾದ ಸುವಾರ್ತೆ
15 ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ. 2 ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.
3 ನಾನು ಸ್ವೀಕರಿಸಿಕೊಂಡ ಸಂದೇಶವನ್ನು ನಾನು ನಿಮಗೆ ತಿಳಿಸಿದೆನು. ಆ ಸಂಗತಿಗಳು ಬಹಳ ಮುಖ್ಯವಾದುವುಗಳಾಗಿವೆ. ಪವಿತ್ರ ಗ್ರಂಥವು ಹೇಳುವಂತೆ, ಕ್ರಿಸ್ತನು ನಮ್ಮ ಪಾಪಗಳಿಗೋಸ್ಕರವಾಗಿ ಸತ್ತು 4 ಹೂಳಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬಂದನು. 5 ಬಳಿಕ ಕ್ರಿಸ್ತನು ಪೇತ್ರನಿಗೆ ಕಾಣಿಸಿಕೊಂಡನು. ಅನಂತರ ಹನ್ನೆರಡು ಮಂದಿ ಅಪೊಸ್ತಲರಿಗೆ ಕಾಣಿಸಿಕೊಂಡನು. 6 ತರುವಾಯ, ಒಂದೇ ಸಮಯದಲ್ಲಿ ಐನೂರಕ್ಕಿಂತಲೂ ಹೆಚ್ಚು ಮಂದಿ ಸಹೋದರರಿಗೆ ಕಾಣಿಸಿಕೊಂಡನು. ಈ ಸಹೋದರರಲ್ಲಿ ಬಹುಮಂದಿ ಇಂದಿನವರೆಗೂ ಬದುಕಿದ್ದಾರೆ. ಆದರೆ ಕೆಲವರು ಸತ್ತುಹೋದರು. 7 ಬಳಿಕ ಕ್ರಿಸ್ತನು ಯಾಕೋಬನಿಗೆ ಕಾಣಿಸಿಕೊಂಡನು. ಅನಂತರ ಮತ್ತೊಮ್ಮೆ ಎಲ್ಲಾ ಅಪೊಸ್ತಲರಿಗೆ ಕಾಣಿಸಿಕೊಂಡನು. 8 ಕಟ್ಟಕಡೆಗೆ, ಕ್ರಿಸ್ತನು, ದಿನ ತುಂಬುವ ಮೊದಲೇ ಹುಟ್ಟಿದಂತಿದ್ದ ನನಗೆ ಕಾಣಿಸಿಕೊಂಡನು.
9 ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ. 10 ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.) 11 ಆದ್ದರಿಂದ ನಾನು ಬೋಧನೆ ಮಾಡಿದೆನೊ ಅಥವಾ ಇತರ ಅಪೊಸ್ತಲರು ಬೋಧನೆ ಮಾಡಿದರೊ ಎಂಬುದು ಮುಖ್ಯವಲ್ಲ. ನಾವೆಲ್ಲರೂ ಒಂದೇ ಸಂದೇಶವನ್ನು ಬೋಧಿಸುತ್ತೇವೆ ಮತ್ತು ನೀವು ನಂಬಿರುವುದೂ ಅದನ್ನೇ.
ಕೊರ್ನೇಲಿಯನ ಮನೆಯಲ್ಲಿ ಪೇತ್ರನ ಪ್ರಸಂಗ
34 ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು. 35 ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ. 36 ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!
37 “ಜುದೇಯದಲ್ಲೆಲ್ಲಾ ಏನಾಯಿತೆಂಬುದು ನಿಮಗೆ ಗೊತ್ತಿದೆ. ಗಲಿಲಾಯದಲ್ಲಿ ಯೋಹಾನನು[a] ದೀಕ್ಷಾಸ್ನಾನದ ಬಗ್ಗೆ ಜನರಿಗೆ ಬೋಧಿಸಿದ ಮೇಲೆ ಅದು ಆರಂಭವಾಯಿತು. 38 ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.
39 “ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಆ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು. 40 ಆದರೆ, ದೇವರು ಆತನನ್ನು ಮೂರನೆಯ ದಿನದಲ್ಲಿ ಜೀವಂತವಾಗಿ ಎಬ್ಬಿಸಿದನು! ಯೇಸುವನ್ನು ಸ್ಪಷ್ಟವಾಗಿ ನೋಡುವ ಅವಕಾಶವನ್ನು ದೇವರು ಜನರಿಗೆ ಒದಗಿಸಿಕೊಟ್ಟನು. 41 ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಆ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು.
42 “ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು. 43 ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.
ಬರಿದಾದ ಸಮಾಧಿ
(ಮತ್ತಾಯ 28:1-10; ಮಾರ್ಕ 16:1-8; ಲೂಕ 24:1-12)
20 ಭಾನುವಾರದ ಮುಂಜಾನೆ ಮಗ್ದಲದ ಮರಿಯಳು ಯೇಸುವಿನ ದೇಹವಿದ್ದ ಸಮಾಧಿಯ ಬಳಿಗೆ ಬಂದಳು. ಆಗ ಇನ್ನೂ ಕತ್ತಲಿತ್ತು. ಸಮಾಧಿಯ ಬಾಗಿಲಿಗೆ ಮುಚ್ಚಿದ್ದ ದೊಡ್ಡ ಕಲ್ಲು ಅಲ್ಲಿಂದ ತೆಗೆದುಹಾಕಲ್ಪಟ್ಟಿರುವುದನ್ನು ಕಂಡ ಮರಿಯಳು 2 ಸೀಮೋನ್ ಪೇತ್ರನ ಮತ್ತು (ಯೇಸು ಪ್ರೀತಿಸುತ್ತಿದ್ದ) ಮತ್ತೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಅವರು ಸಮಾಧಿಯೊಳಗಿಂದ ಪ್ರಭುವನ್ನು ತೆಗೆದುಕೊಂಡಿದ್ದಾರೆ, ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲ” ಎಂದು ಹೇಳಿದಳು.
3 ಆದ್ದರಿಂದ ಪೇತ್ರನು ಮತ್ತು ಮತ್ತೊಬ್ಬ ಶಿಷ್ಯನು ಸಮಾಧಿಯ ಬಳಿಗೆ ಹೊರಟರು. 4 ಅವರಿಬ್ಬರೂ ಓಡುತ್ತಾ ಹೋದರು. ಆದರೆ ಆ ಮತ್ತೊಬ್ಬ ಶಿಷ್ಯನು ಪೇತ್ರನಿಗಿಂತಲೂ ವೇಗವಾಗಿ ಓಡುತ್ತಾ ಹೋಗಿ ಸಮಾಧಿಯನ್ನು ಮೊದಲು ತಲುಪಿದನು. 5 ಆ ಶಿಷ್ಯನು ಬಗ್ಗಿ ಒಳಗೆ ನೋಡಿದನು.
6 ನಾರುಬಟ್ಟೆಯ ತುಂಡುಗಳು ಅಲ್ಲಿ ಬಿದ್ದಿರುವುದನ್ನು ಅವನು ಕಂಡನು. 7 ಅಲ್ಲದೆ ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆಯನ್ನೂ ಅವನು ಕಂಡನು. ಆ ಬಟ್ಟೆಯು ಸುತ್ತಲ್ಪಟ್ಟು, ಇತರ ನಾರುಬಟ್ಟೆಗಳಿಂದ ಪ್ರತ್ಯೇಕವಾಗಿ ಬಿದ್ದಿತ್ತು. 8 ಬಳಿಕ ಆ ಮತ್ತೊಬ್ಬ ಶಿಷ್ಯನು ಒಳಗೆ ಹೋದನು. ಸಮಾಧಿಯನ್ನು ಮೊದಲು ತಲುಪಿದವನೇ ಆ ಶಿಷ್ಯನು. ಅವನು ಸಂಭವಿಸಿರುವುದನ್ನು ಕಂಡು ನಂಬಿಕೊಂಡನು. 9 (ಯೇಸು ಸತ್ತು ಜೀವಂತವಾಗಿ ಎದ್ದುಬರಬೇಕೆಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿರುವುದು ಈ ಶಿಷ್ಯರಿಗೆ ಇನ್ನೂ ಅರ್ಥವಾಗಿರಲಿಲ್ಲ.)
ಮಗ್ದಲದ ಮರಿಯಳಿಗೆ ಯೇಸುವಿನ ದರ್ಶನ
(ಮಾರ್ಕ 16:9-11)
10 ಬಳಿಕ ಶಿಷ್ಯರು ಹಿಂತಿರುಗಿ ಮನೆಗೆ ಹೋದರು. 11 ಆದರೆ ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ, 12 ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ದೇವದೂತರನ್ನು ಕಂಡಳು. ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಅವರಲ್ಲೊಬ್ಬನು ಯೇಸುವಿನ ತಲೆಯಿದ್ದ ಕಡೆಯಲ್ಲಿಯೂ ಮತ್ತೊಬ್ಬನು ಪಾದವಿದ್ದ ಕಡೆಯಲ್ಲಿಯೂ ಕುಳಿತುಕೊಂಡಿದ್ದನು.
13 ದೇವದೂತರು ಮರಿಯಳಿಗೆ, “ಅಮ್ಮಾ, ಏಕೆ ಅಳುತ್ತಿರುವೆ?” ಎಂದು ಕೇಳಿದರು.
ಮರಿಯಳು, “ನನ್ನ ಪ್ರಭುವಿನ ದೇಹವನ್ನು ಕೆಲವು ಜನರು ತೆಗೆದುಕೊಂಡು ಹೋಗಿದ್ದಾರೆ. ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟಳು. 14 ಮರಿಯಳು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದನ್ನು ಕಂಡಳು. ಆದರೆ ಆತನು ಯೇಸು ಎಂಬುದು ಆಕೆಗೆ ಗೊತ್ತಿರಲಿಲ್ಲ.
15 ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು.
ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು.
16 ಯೇಸು ಆಕೆಗೆ, “ಮರಿಯಳೇ” ಎಂದನು.
ಮರಿಯಳು ಯೇಸುವಿನ ಕಡೆಗೆ ತಿರುಗಿ, ಯೆಹೂದ್ಯರ ಭಾಷೆಯಲ್ಲಿ “ರಬ್ಬೂನಿ” ಎಂದಳು. (ರಬ್ಬೂನಿ ಎಂದರೆ “ಗುರು”.)
17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.
18 ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಹೋಗಿ, “ನಾನು ಪ್ರಭುವನ್ನು ಕಂಡೆನು!” ಎಂದು ಹೇಳಿದಳು. ಮತ್ತು ಯೇಸು ಹೇಳಿದ ಸಂಗತಿಗಳನ್ನು ಆಕೆ ಅವರಿಗೆ ತಿಳಿಸಿದಳು.
ಯೇಸುವಿನ ಪುನರುತ್ಥಾನ
(ಮತ್ತಾಯ 28:1-8; ಲೂಕ 24:1-12; ಯೋಹಾನ 20:1-10)
16 ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು. 2 ವಾರದ ಮೊದಲನೆಯ ದಿನ, ಮುಂಜಾನೆಯಲ್ಲಿಯೇ, ಅವರು ಸಮಾಧಿಗೆ ಹೊರಟರು. ಆಗ ಸೂರ್ಯೋದಯವಾಗಿದ್ದರೂ ಇನ್ನೂ ನಸುಕಾಗಿತ್ತು. 3 ಆ ಸ್ತ್ರೀಯರು ಒಬ್ಬರಿಗೊಬ್ಬರು, “ದೊಡ್ಡ ಬಂಡೆಯಿಂದ ಸಮಾಧಿಯ ಬಾಗಿಲನ್ನು ಮುಚ್ಚಲಾಗಿದೆ. ಈ ಬಂಡೆಯನ್ನು ನಮಗಾಗಿ ಯಾರು ಉರುಳಿಸುತ್ತಾರೆ?” ಎಂದುಕೊಂಡರು.
4 ಆ ಸ್ತ್ರೀಯರು ಸಮಾಧಿಯನ್ನು ತಲುಪಿದಾಗ ಆ ಬಂಡೆ ಉರುಳಿರುವುದನ್ನು ಕಂಡರು. ಆ ಬಂಡೆಯು ಬಹಳ ದೊಡ್ಡದಾಗಿತ್ತು ಆದರೆ ಅದನ್ನು ಬಾಗಿಲಿನಿಂದ ದೂರಕ್ಕೆ ಉರುಳಿಸಲಾಗಿತ್ತು. 5 ಆ ಸ್ತ್ರೀಯರು ಸಮಾಧಿಯೊಳಗೆ ಹೋದಾಗ ಬಿಳುಪಾದ ನಿಲುವಂಗಿ ಧರಿಸಿದ್ದ ಒಬ್ಬ ಯುವಕನು ಸಮಾಧಿಯ ಬಲಗಡೆ ಕುಳಿತಿರುವುದನ್ನು ಕಂಡು ಭಯಗೊಂಡರು.
6 ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ. 7 ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.
8 ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ.[a]
Kannada Holy Bible: Easy-to-Read Version. All rights reserved. © 1997 Bible League International