Revised Common Lectionary (Semicontinuous)
118 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ.
ಆತನು ಒಳ್ಳೆಯವನು.
ಆತನ ಪ್ರೀತಿಯು ಶಾಶ್ವತವಾದದ್ದು!
2 ಇಸ್ರೇಲರೇ,
“ಆತನ ಪ್ರೀತಿ ಶಾಶ್ವತವಾದದ್ದು” ಎಂದು ಹೇಳಿರಿ.
14 ನನ್ನ ಬಲವೂ ಜಯಗೀತೆಯೂ ಯೆಹೋವನೇ.
ಆತನೇ ನನ್ನನ್ನು ರಕ್ಷಿಸುವನು!
15 ಜಯೋತ್ಸವವು ನೀತಿವಂತರ ಮನೆಗಳಲ್ಲಿ ಕೇಳಿಬರುತ್ತಿದೆ.
ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿಸಿದ್ದಾನೆ.
16 ಯೆಹೋವನ ಬಲಗೈ ಜಯಗಳಿಸಿದೆ.
ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿದ್ದಾನೆ.
17 ನಾನು ಸಾಯುವುದಿಲ್ಲ;
ನಾನು ಜೀವದಿಂದಿದ್ದು ಯೆಹೋವನ ಕಾರ್ಯಗಳ ಕುರಿತು ಹೇಳುತ್ತೇನೆ.
18 ಯೆಹೋವನು ನನ್ನನ್ನು ಶಿಕ್ಷಿಸಿದರೂ
ಸಾವಿಗೀಡುಮಾಡಲಿಲ್ಲ.
19 ನೀತಿಯ ಬಾಗಿಲುಗಳೇ, ನನಗೋಸ್ಕರ ತೆರೆಯಿರಿ,
ನಾನು ಒಳಗೆ ಬಂದು ಯೆಹೋವನನ್ನು ಆರಾಧಿಸುತ್ತೇನೆ.
20 ಅವು ಯೆಹೋವನ ಬಾಗಿಲುಗಳು.
ನೀತಿವಂತರು ಮಾತ್ರ ಆ ಬಾಗಿಲುಗಳ ಮೂಲಕ ಹೋಗಬಲ್ಲರು.
21 ಯೆಹೋವನೇ, ನನ್ನ ಪ್ರಾರ್ಥನೆಗೆ ನೀನು ಉತ್ತರಿಸಿ
ನನ್ನನ್ನು ರಕ್ಷಿಸಿದ್ದಕ್ಕೋಸ್ಕರ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.
22 ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.
23 ಇದು ಯೆಹೋವನಿಂದಲೇ ಆಯಿತು.
ನಮಗಂತೂ ಇದು ಆಶ್ಚರ್ಯಕರವಾಗಿದೆ!
24 ಈ ದಿನವನ್ನು ಮಾಡಿದಾತನು ಯೆಹೋವನೇ.
ಇಂದೇ ನಾವು ಉಲ್ಲಾಸದಿಂದ ಆನಂದಿಸೋಣ.
ಭೂಲೋಕದ ಸೃಷ್ಟಿ
1 ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು. 2 ಭೂಮಿಯು ಅಸ್ತವ್ಯಸ್ತವಾಗಿಯೂ ಬರಿದಾಗಿಯೂ ಇತ್ತು. ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ಜಲಸಮೂಹಗಳ ಮೇಲೆ ಚಲಿಸುತ್ತಿದ್ದನು.[a]
ಮೊದಲನೆ ದಿನ—ಬೆಳಕು
3 ಆಗ ದೇವರು, “ಬೆಳಕಾಗಲಿ” ಅನ್ನಲು ಬೆಳಕಾಯಿತು. 4 ದೇವರಿಗೆ ಬೆಳಕು ಒಳ್ಳೆಯದಾಗಿ ಕಂಡಿತು. ಬಳಿಕ ದೇವರು ಕತ್ತಲೆಯಿಂದ ಬೆಳಕನ್ನು ಬೇರ್ಪಡಿಸಿದನು. 5 ದೇವರು ಬೆಳಕಿಗೆ ಹಗಲೆಂದೂ ಕತ್ತಲೆಗೆ ರಾತ್ರಿಯೆಂದೂ ಹೆಸರಿಟ್ಟನು.
ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೊದಲನೆ ದಿನವಾಯಿತು.
ಎರಡನೆ ದಿನ—ಆಕಾಶ
6 ಬಳಿಕ ದೇವರು, “ಜಲಸಮೂಹಗಳ ನಡುವೆ ಗುಮಟ[b] ಉಂಟಾಗಲಿ. ಅದು ಕೆಳಭಾಗದ ನೀರುಗಳನ್ನು ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಲಿ” ಅಂದನು. 7 ಹೀಗೆ ದೇವರು ಗುಮಟವನ್ನು ಉಂಟುಮಾಡಿ ಅದರ ಕೆಳಭಾಗದ ನೀರುಗಳನ್ನು ಅದರ ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಿದನು. 8 ದೇವರು ಆ ಗುಮಟಕ್ಕೆ ಆಕಾಶವೆಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಎರಡನೆ ದಿನವಾಯಿತು.
ಮೂರನೆ ದಿನ—ಒಣನೆಲ ಮತ್ತು ಸಸ್ಯಗಳು
9 ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. 10 ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟಿಗೆ ಸೇರಿಕೊಂಡಿದ್ದ ನೀರಿಗೆ ಸಮುದ್ರವೆಂದೂ ಹೆಸರಿಟ್ಟನು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
11 ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು. 12 ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
13 ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೂರನೆ ದಿನವಾಯಿತು.
ನಾಲ್ಕನೆ ದಿನ—ಸೂರ್ಯ, ಚಂದ್ರ ಮತ್ತು ನಕ್ಷತ್ರ
14 ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ. 15 ಈ ಬೆಳಕುಗಳು ಆಕಾಶದಲ್ಲಿದ್ದು ಭೂಮಿಯ ಮೇಲೆ ಬೆಳಕನ್ನು ಪ್ರಕಾಶಿಸಲಿ” ಅಂದನು. ಹಾಗೆಯೇ ಆಯಿತು.
16 ಆದ್ದರಿಂದ ದೇವರು ಎರಡು ದೊಡ್ಡಬೆಳಕುಗಳನ್ನು ಸೃಷ್ಟಿಸಿದನು. ಹಗಲನ್ನಾಳುವುದಕ್ಕಾಗಿ ದೊಡ್ಡಬೆಳಕನ್ನೂ ರಾತ್ರಿಯನ್ನಾಳುವುದಕ್ಕಾಗಿ ಅದಕ್ಕಿಂತ ಚಿಕ್ಕಬೆಳಕನ್ನೂ ಸೃಷ್ಟಿಸಿದನು. ಆತನು ನಕ್ಷತ್ರಗಳನ್ನು ಸಹ ಸೃಷ್ಟಿಸಿದನು. 17 ಈ ಬೆಳಕುಗಳು ಭೂಮಿಯ ಮೇಲೆ ಪ್ರಕಾಶಿಸಲೆಂದು ದೇವರು ಅವುಗಳನ್ನು ಆಕಾಶದಲ್ಲಿರಿಸಿದನು. 18 ಹಗಲನ್ನು ಮತ್ತು ರಾತ್ರಿಯನ್ನು ಆಳಲೆಂದು ದೇವರು ಈ ಬೆಳಕುಗಳನ್ನು ಆಕಾಶದಲ್ಲಿರಿಸಿದನು. ಇವು ಬೆಳಕನ್ನು ಕತ್ತಲೆಯಿಂದ ಬೇರ್ಪಡಿಸಿದವು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
19 ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ನಾಲ್ಕನೆ ದಿನವಾಯಿತು.
ಯಾವ ಬಗೆಯ ದೇಹವನ್ನು ನಾವು ಹೊಂದಿಕೊಳ್ಳುವೆವು?
35 “ಸತ್ತವರು ಹೇಗೆ ಎದ್ದುಬರುವರು? ಅವರಿಗೆ ಯಾವ ಬಗೆಯ ದೇಹವಿರುತ್ತದೆ?” ಎಂದು ಕೆಲವರು ಕೇಳಬಹುದು. 36 ಅವು ಮೂಢ ಪ್ರಶ್ನೆಗಳು. ನೀವು ಬೀಜವನ್ನು ಬಿತ್ತಿದಾಗ, ಆ ಬೀಜವು ಜೀವ ಹೊಂದಿಕೊಂಡು ಬೆಳೆಯುವುದಕ್ಕಿಂತ ಮುಂಚೆ ಸಾಯಲೇಬೇಕು. 37 ನೀವು ಬೀಜವನ್ನು ಬಿತ್ತುವಾಗ, ಆ ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು. 38 ಅದರೆ ದೇವರು ತನ್ನ ಯೋಜನೆಗನುಸಾರವಾಗಿ ಅದಕ್ಕೆ ದೇಹವನ್ನು ಕೊಡುತ್ತಾನೆ ಮತ್ತು ದೇವರು ಪ್ರತಿಯೊಂದು ಬಗೆಯ ಬೀಜಕ್ಕೆ ಅದರದೇ ಆದ ದೇಹವನ್ನು ಕೊಡುತ್ತಾನೆ. 39 ಎಲ್ಲಾ ಶರೀರಗಳು ಒಂದೇ ರೀತಿಯ ಮಾಂಸವನ್ನು ಹೊಂದಿರುವುದಿಲ್ಲ. ಜನರಿಗೆ ಒಂದು ಬಗೆಯ ಮಾಂಸವಿರುತ್ತದೆ; ಪ್ರಾಣಿಗಳಿಗೆ ಮತ್ತೊಂದು ಬಗೆಯ ಮಾಂಸವಿರುತ್ತದೆ; ಪಕ್ಷಿಗಳಿಗೆ ಇನ್ನೊಂದು ಬಗೆಯ ಮಾಂಸವಿರುತ್ತದೆ. ಮೀನುಗಳು ಬೇರೊಂದು ರೀತಿಯ ಮಾಂಸವನ್ನು ಹೊಂದಿರುತ್ತವೆ. 40 ಇದಲ್ಲದೆ ಪರಲೋಕದ ಶರೀರಗಳಿವೆ ಮತ್ತು ಭೂಲೋಕದ ಶರೀರಗಳಿವೆ. ಪರಲೋಕದ ಶರೀರಗಳಿಗೆ ಒಂದು ಬಗೆಯ ಸೌಂದರ್ಯವಿರುತ್ತದೆ. ಭೂಲೋಕದ ಶರೀರಗಳಿಗೆ ಮತ್ತೊಂದು ಬಗೆಯ ಸೌಂದರ್ಯವಿರುತ್ತದೆ. 41 ಸೂರ್ಯನಿಗೆ ಒಂದು ಬಗೆಯ ಸೌಂದರ್ಯವಿದೆ; ಚಂದ್ರನಿಗೆ ಮತ್ತೊಂದು ಬಗೆಯ ಸೌಂದರ್ಯವಿದೆ. ನಕ್ಷತ್ರಗಳಿಗೆ ಇನ್ನೊಂದು ಬಗೆಯ ಸೌಂದರ್ಯವಿದೆ. ಪ್ರತಿಯೊಂದು ನಕ್ಷತ್ರವು ತನ್ನದೇ ಆದ ಸೌಂದರ್ಯವನ್ನು ಹೊಂದಿದೆ.
42 ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದುಬರುವ ಆ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ. 43 ದೇಹವು ಹೀನಾವಸ್ಥೆಯಲ್ಲಿ ಬಿತ್ತಲ್ಪಡುವುದು, ಆದರೆ ಮಹಿಮೆಯೊಡನೆ ಎದ್ದುಬರುವುದು. ದೇಹವು ಬಿತ್ತಲ್ಪಟ್ಟಾಗ, ಅದು ಬಲಹೀನವಾಗಿರುತ್ತದೆ. ಆದರೆ ಅದು ಎದ್ದುಬಂದಾಗ ಅದಕ್ಕೆ ಶಕ್ತಿಯಿರುತ್ತದೆ. 44 ಬಿತ್ತಲ್ಪಟ್ಟ ದೇಹವು ಭೌತಿಕವಾದದ್ದು. ಆದರೆ ಅದು ಎದ್ದುಬಂದಾಗ, ಆತ್ಮಿಕ ದೇಹವಾಗಿರುತ್ತದೆ.
ಭೌತಿಕ ದೇಹವಿದೆ. ಆದ್ದರಿಂದ ಆತ್ಮಿಕ ದೇಹವೂ ಇದೆ. 45 “ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು”(A) ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು. 46 ಮೊದಲು ಬಂದವನು ಆತ್ಮಿಕ ಮನುಷ್ಯನಲ್ಲ, ಅವನು ಪ್ರಾಕೃತ ಮನುಷ್ಯ. ಅನಂತರ ಆತ್ಮಿಕ ಮನುಷ್ಯನು ಬಂದನು. 47 ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು. 48 ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ. 49 ಭೂಮಿಯ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಂಡೆವು. ಆದ್ದರಿಂದ ಪರಲೋಕದ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಳ್ಳುವೆವು.
Kannada Holy Bible: Easy-to-Read Version. All rights reserved. © 1997 Bible League International