Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 95

95 ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ!
    ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ.
ಆತನಿಗೆ ಕೃತಜ್ಞತಾಸುತ್ತಿ ಮಾಡೋಣ.
    ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ.
ಯಾಕೆಂದರೆ ಯೆಹೋವನು ಮಹಾದೇವರಾಗಿದ್ದಾನೆ!
    ಆತನು ದೇವರುಗಳಿಗೆಲ್ಲಾ ಮಹಾರಾಜನಾಗಿದ್ದಾನೆ.
ಭೂಮಿಯ ಆಳವೂ ಉನ್ನತೋನ್ನತವಾದ ಶಿಖರಗಳೂ ಆತನವೇ.
ಸಮುದ್ರವು ಆತನದೇ, ಅದನ್ನು ಸೃಷ್ಟಿಸಿದಾತನು ಆತನೇ.
    ಭೂಮಿಯೂ ಆತನ ಕೈಕೆಲಸವೇ.
ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ.
    ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.
ನಮ್ಮ ದೇವರು ಆತನೇ, ನಾವು ಆತನವರೇ.
    ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.

ದೇವರು ಹೀಗೆನ್ನುತ್ತಾನೆ: “ನೀವು ಮೆರೀಬಾದಲ್ಲಿಯೂ
    ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡತನ ಮಾಡಬೇಡಿ.
ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು.
    ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು.
10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು,
    ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು.
    ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.
11 ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು
    ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”

1 ಸಮುವೇಲನು 16:1-13

ಸಮುವೇಲನು ಬೆತ್ಲೆಹೇಮಿಗೆ ಹೋಗುವನು

16 ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.

ಅದಕ್ಕೆ ಸಮುವೇಲನು, “ನಾನು ಹೊರಟರೆ ಸೌಲನಿಗೆ ಈ ಸುದ್ದಿಯು ತಿಳಿಯುತ್ತದೆ. ಆಗ ಅವನು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಾನೆ” ಎಂದನು.

ಯೆಹೋವನು, “ಬೆತ್ಲೆಹೇಮಿಗೆ ಹೋಗು. ನಿನ್ನೊಡನೆ ಒಂದು ಎಳೆಕರುವನ್ನು ತೆಗೆದುಕೊಂಡು ಹೋಗು. ‘ನಾನು ಯೆಹೋವನಿಗೆ ಯಜ್ಞವನ್ನರ್ಪಿಸಲು ಬಂದಿದ್ದೇನೆ’ ಎಂದು ಹೇಳು. ಯಜ್ಞಕಾರ್ಯಕ್ಕೆ ಇಷಯನನ್ನು ಆಹ್ವಾನಿಸು. ಆ ಮೇಲೆ ನೀನು ಮಾಡಬೇಕಾದದ್ದನ್ನು ನಾನು ತೋರಿಸುತ್ತೇನೆ. ನಾನು ತೋರಿಸಿದ ಮನುಷ್ಯನಿಗೆ ನೀನು ಅಭಿಷೇಕವನ್ನು ಮಾಡಬೇಕು” ಎಂದು ಹೇಳಿದನು.

ಸಮುವೇಲನು ತನಗೆ ಯೆಹೋವನು ಹೇಳಿದಂತೆ ಮಾಡಿದನು. ಸಮುವೇಲನು ಬೆತ್ಲೆಹೇಮಿಗೆ ಹೋದನು. ಬೆತ್ಲೆಹೇಮಿನ ಹಿರಿಯರು ಭಯದಿಂದ ನಡುಗಿದರು. ಅವರು ಸಮುವೇಲನನ್ನು ಕಂಡು, “ನಿನ್ನ ಆಗಮನವು ಶುಭಕರವಾಗಿದೆಯೇ?” ಎಂದು ಕೇಳಿದರು.

ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು.

ಇಷಯನು ಮತ್ತು ಅವನ ಮಕ್ಕಳು ಬಂದಾಗ, ಸಮುವೇಲನು ಎಲೀಯಾಬನನ್ನು ನೋಡಿದನು. ಸಮುವೇಲನು ತನ್ನಲ್ಲೇ ಯೋಚಿಸುತ್ತಾ, “ಯೆಹೋವನು ಆಯ್ಕೆ ಮಾಡಿರುವವನು ನಿಜವಾಗಿಯೂ ಅವನೇ ಇರಬೇಕು” ಎಂದುಕೊಂಡನು.

ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.

ನಂತರ ಇಷಯನು ಎರಡನೆಯ ಮಗನಾದ ಅಬೀನಾದಾಬನನ್ನು ಕರೆದನು. ಅಬೀನಾದಾಬನು ಸಮುವೇಲನ ಹತ್ತಿರಕ್ಕೆ ಬಂದನು. ಸಮುವೇಲನು, “ಯೆಹೋವನು ಆರಿಸಿಕೊಂಡಿರುವ ವ್ಯಕ್ತಿ ಇವನಲ್ಲ” ಎಂದು ಹೇಳಿದನು.

ಅನಂತರ ಇಷಯನು ಶಮ್ಮನನ್ನು ಸಮುವೇಲನ ಬಳಿಗೆ ಕಳುಹಿಸಿದನು. ಆದರೆ ಸಮುವೇಲನು, “ಯೆಹೋವನು ಇವನನ್ನೂ ಆರಿಸಲಿಲ್ಲ” ಎಂದನು.

10 ಇಷಯನು ತನ್ನ ಏಳು ಜನ ಮಕ್ಕಳನ್ನು ಸಮುವೇಲನಿಗೆ ತೋರಿಸಿದನು. ಆದರೆ ಸಮುವೇಲನು, “ಯೆಹೋವನು ಇವರಲ್ಲಿ ಯಾರೊಬ್ಬನನ್ನೂ ಆರಿಸಿಕೊಳ್ಳಲಿಲ್ಲ” ಎಂದನು.

11 ನಂತರ ಸಮುವೇಲನು ಇಷಯನನ್ನು, “ನಿನಗೆ ಇರುವ ಮಕ್ಕಳು ಇಷ್ಟೆಯೋ?” ಎಂದು ಕೇಳಿದನು.

ಇಷಯನು, “ಇಲ್ಲ, ನನಗೆ ಇನ್ನೊಬ್ಬ ಕಿರಿಯ ಮಗನಿದ್ದಾನೆ. ಅವನು ಕುರಿಮೇಯಿಸುವದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು.

ಆಗ ಸಮುವೇಲನು, “ಅವನನ್ನು ಕರೆಕಳುಹಿಸು. ಅವನನ್ನು ಇಲ್ಲಿಗೆ ಬರಹೇಳು. ಅವನು ಬರುವತನಕ ನಾವು ಊಟಕ್ಕೆ ಕುಳಿತುಕೊಳ್ಳುವುದು ಬೇಡ” ಎಂದು ಹೇಳಿದನು.

12 ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೋ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು.

ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಆಜ್ಞಾಪಿಸಿದನು.

13 ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.

1 ಪೇತ್ರನು 5:1-5

ದೇವರ ಮಂದೆ

ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ. ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ. ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ. ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.

ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು.

“ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ.
    ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”(A)

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International