Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಅಪೊಸ್ತಲರ ಕಾರ್ಯಗಳು 8:26-40

ಫಿಲಿಪ್ಪನು ಇಥಿಯೋಪಿಯದವನಿಗೆ ನೀಡಿದ ಉಪದೇಶ

26 ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು.

27 ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು. 28 ಈಗ ಅವನು ತನ್ನ ಮನೆಗೆ ಮರಳಿ ಹೋಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತುಕೊಂಡು ಯೆಶಾಯನ ಗ್ರಂಥವನ್ನು ಓದುತ್ತಿದ್ದನು.

29 ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು. 30 ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.

31 ಆ ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು. 32 ಅವನು ಓದುತ್ತಿದ್ದ ಪವಿತ್ರ ಗ್ರಂಥದ ಭಾಗವು ಇಂತಿದೆ:

“ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ಆತನಿದ್ದನು.
ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವ ಕುರಿಯಂತೆ ಆತನಿದ್ದನು.
    ಆತನು ಬಾಯಿ ತೆರೆಯಲಿಲ್ಲ.
33 ಆತನಿಗೆ ಅವಮಾನ ಮಾಡಿದರು. ಆತನಿಗೆ ನ್ಯಾಯವು ದೊರೆಯಲಿಲ್ಲ.
ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದುಬಿಟ್ಟರಲ್ಲಾ!
    ಆತನ ಸಂತತಿಯವರ ಬಗ್ಗೆ ಯಾರು ಮಾತಾಡಬಲ್ಲರು?”(A)

34 ಅವನು ಫಿಲಿಪ್ಪನಿಗೆ, “ದಯವಿಟ್ಟು ನನಗೆ ಹೇಳು, ಯಾವ ಪ್ರವಾದಿಯ ಬಗ್ಗೆ ಇಲ್ಲಿ ಹೇಳುತ್ತಿದ್ದಾನೆ? ಅವನು ತನ್ನ ಬಗ್ಗೆ ಹೇಳುತ್ತಿದ್ದಾನೋ ಅಥವಾ ಬೇರೊಬ್ಬನ ಬಗ್ಗೆ ಹೇಳುತ್ತಿದ್ದಾನೋ?” ಎಂದು ಕೇಳಿದನು. 35 ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು.

36 ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು. 37 [a] 38 ಬಳಿಕ ಅವನು ರಥವನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿದನು. ಅವರಿಬ್ಬರೂ ನೀರಿನೊಳಗೆ ಇಳಿದುಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. 39 ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು. 40 ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು.

ಕೀರ್ತನೆಗಳು 22:25-31

25 ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು;
    ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
26 ಬಡವರು ತಿಂದು ತೃಪ್ತರಾಗುವರು.
    ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ!
    ನಿಮ್ಮ ಹೃದಯವು ಯಾವಾಗಲೂ ಸಂತೋಷವಾಗಿರಲಿ.[a]
27 ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ.
    ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.
28 ಯಾಕೆಂದರೆ ಯೆಹೋವನೇ ರಾಜನು!
    ಆತನು ಜನಾಂಗಗಳನ್ನೆಲ್ಲಾ ಆಳುವನು.
29 ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು.
    ಸಾಯುವವರೂ ಸತ್ತುಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು.
30 ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು.
    ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು.
31 ಪ್ರತಿಯೊಂದು ತಲೆಮಾರಿನವರೂ ತಮ್ಮ ಮಕ್ಕಳಿಗೆ
    ಆತನ ಒಳ್ಳೆಯ ಕಾರ್ಯಗಳ ಬಗ್ಗೆ ಹೇಳುವರು.[b]

1 ಯೋಹಾನ 4:7-21

ಪ್ರೀತಿಯು ದೇವರಿಂದ ಬರುತ್ತದೆ

ಪ್ರಿಯ ಸ್ನೇಹಿತರೇ, ಪ್ರೀತಿಯು ದೇವರಿಂದ ಬಂದಿರುವುದರಿಂದ ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಪ್ರೀತಿಸುವವನು ದೇವರಿಂದ ಹೊಸದಾಗಿ ಹುಟ್ಟಿದವನಾಗಿದ್ದಾನೆ. ಆದ್ದರಿಂದ ಅವನು ದೇವರನ್ನು ಬಲ್ಲವನಾಗಿರುತ್ತಾನೆ. ಪ್ರೀತಿಸದಿರುವವನು ದೇವರನ್ನು ತಿಳಿದಿಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪಿ. ದೇವರು ತನ್ನ ಒಬ್ಬನೇ ಮಗನ ಮೂಲಕ ನಮಗೆ ಜೀವವನ್ನು ಕೊಡುವುದಕ್ಕಾಗಿ ಆತನನ್ನು ಈ ಲೋಕಕ್ಕೆ ಕಳುಹಿಸಿದನು. ಹೀಗೆ ದೇವರು ತನ್ನ ಪ್ರೀತಿಯನ್ನು ನಮಗೆ ತೋರಿಸಿದ್ದಾನೆ. 10 ದೇವರಿಗೆ ನಮ್ಮ ಮೇಲಿರುವ ಪ್ರೀತಿಯೇ ನಿಜವಾದ ಪ್ರೀತಿ. ನಮಗೆ ದೇವರ ಮೇಲಿರುವ ಪ್ರೀತಿ ನಿಜವಾದ ಪ್ರೀತಿಯಲ್ಲ. ನಮ್ಮ ಪಾಪ ನಿವಾರಣೆಗಾಗಿ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು.

11 ಪ್ರಿಯ ಸ್ನೇಹಿತರೇ, ಹೀಗೆ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ಆದ್ದರಿಂದ ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. 12 ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೆ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಸಿರುತ್ತಾನೆ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾದ ಮಟ್ಟವನ್ನು ತಲುಪುತ್ತದೆ.

13 ನಾವು ದೇವರಲ್ಲಿ ನೆಲೆಸಿದ್ದೇವೆ ಮತ್ತು ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ತಿಳಿದದೆ. ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದ ಇದು ನಮಗೆ ತಿಳಿದಿದೆ. 14 ದೇವರು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿದ್ದನ್ನು ನಾವು ನೋಡಿದ್ದೇವೆ. ನಾವು ಈಗ ಜನರಿಗೆ ಹೇಳುತ್ತಿರುವುದು ಅದನ್ನೇ. 15 “ಯೇಸುವೇ ದೇವರ ಮಗನೆಂದು ನಾನು ನಂಬುತ್ತೇನೆ” ಎಂದು ಹೇಳುವವನಲ್ಲಿ ದೇವರು ನೆಲೆಸಿದ್ದಾನೆ ಮತ್ತು ಅವನು ದೇವರಲ್ಲಿ ನೆಲೆಸಿದ್ದಾನೆ. 16 ಹೀಗಿರಲಾಗಿ ನಮ್ಮ ಮೇಲೆ ದೇವರಿಗಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ನಾವು ಆ ಪ್ರೀತಿಯಲ್ಲಿ ಭರವಸವಿಟ್ಟಿದ್ದೇವೆ.

ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿದ್ದಾನೆ. 17 ಹೀಗೆ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾಗುವುದರಿಂದ ದೇವರು ನಮಗೆ ತೀರ್ಪು ನೀಡುವ ದಿನದಂದು ನಾವು ನಿರ್ಭಯದಿಂದಿರುತ್ತೇವೆ. ಈ ಲೋಕದಲ್ಲಿ ನಾವು ಆತನಂತೆಯೇ (ಕ್ರಿಸ್ತನು ಅಥವಾ ದೇವರು) ಇರುವುದರಿಂದ ನಾವು ಧೈರ್ಯದಿಂದಿರುತ್ತೇವೆ. 18 ದೇವರ ಪ್ರೀತಿಯು ಎಲ್ಲಿರುವುದೋ ಅಲ್ಲಿ ಭಯವಿರುವುದಿಲ್ಲ. ಏಕೆಂದರೆ ದೇವರ ಪರಿಪೂರ್ಣ ಪ್ರೀತಿಯು ಭಯವನ್ನು ತೆಗೆದುಹಾಕುತ್ತದೆ. ದೇವರ ದಂಡನೆಯೇ ಒಬ್ಬ ವ್ಯಕ್ತಿಯಲ್ಲಿ ಭಯವನ್ನು ಉಂಟುಮಾಡುವಂಥದ್ದು. ಆದ್ದರಿಂದ ಭಯವಿರುವವನಲ್ಲಿ ದೇವರ ಪ್ರೀತಿ ಪರಿಪೂರ್ಣವಾಗಿಲ್ಲ.

19 ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. 20 “ನಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿಕೊಳ್ಳುವವನು ತನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ದ್ವೇಷಿಸಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನು ತನ್ನ ಸಹೋದರನನ್ನು ಕಣ್ಣಾರೆ ನೋಡುತ್ತಿದ್ದರೂ ಅವನನ್ನು ದ್ವೇಷಿಸುತ್ತಾನೆ. ಆದ್ದರಿಂದ ಅವನು ದೇವರನ್ನು ಪ್ರೀತಿಸಲಾಗುವುದಿಲ್ಲ. ಏಕೆಂದರೆ ಅವನು ದೇವರನ್ನು ಎಂದೂ ನೋಡಿಲ್ಲ! 21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ದೇವರು ನಮಗೆ ನೀಡಿರುವ ಆಜ್ಞೆಯಾಗಿದೆ.

ಯೋಹಾನ 15:1-8

ಯೇಸು ದ್ರಾಕ್ಷಿಬಳ್ಳಿಯಂತಿದ್ದಾನೆ

15 “ನಾನು ನಿಜವಾದ ದ್ರಾಕ್ಷಿಬಳ್ಳಿ. ನನ್ನ ತಂದೆ ತೋಟಗಾರನು. ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು. ನಾನು ನಿಮಗೆ ಹೇಳಿದ ಉಪದೇಶದಿಂದ ನೀವು ಈಗಾಗಲೇ ಶುದ್ಧರಾಗಿದ್ದೀರಿ. ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು.

“ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು. ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಕೇಳಿಕೊಳ್ಳಿರಿ, ಅದು ನಿಮಗೆ ದೊರೆಯುವುದು. ನೀವು ಬಹಳ ಫಲಕೊಟ್ಟು, ನೀವೇ ನನ್ನ ಶಿಷ್ಯರೆಂಬುದನ್ನು ತೋರಿಸಬೇಕು. ಇದರಿಂದ ನನ್ನ ತಂದೆಗೆ ಮಹಿಮೆ ಆಗುವುದು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International