Revised Common Lectionary (Semicontinuous)
ರಚನೆಗಾರ: ದಾವೀದ.
29 ದೇವಪುತ್ರರೇ,[a] ಯೆಹೋವನನ್ನು ಸ್ತುತಿಸಿರಿ!
ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.
2 ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ.
ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.[b]
3 ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು.
ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು.
4 ಯೆಹೋವನ ಸ್ವರವು
ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.
5 ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ.
ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು.
6 ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ;
ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ.
7 ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
8 ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು.
ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು.
9 ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ;
ಕಾಡಿನ ಮರಗಳು ಬರಿದಾಗುತ್ತವೆ;
ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.
10 ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು.
ಯೆಹೋವನು ಸದಾಕಾಲ ರಾಜನಾಗಿರುವನು.
11 ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ.
ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.
ಯೆಹೂದ ಮತ್ತು ಜೆರುಸಲೇಮಿಗೆ ದೈವಸಂದೇಶ
2 ಆಮೋಚನ ಮಗನಾದ ಯೆಶಾಯನು ಯೆಹೂದ ಮತ್ತು ಜೆರುಸಲೇಮಿನ ಬಗ್ಗೆ ನೋಡಿದ ದರ್ಶನ.
2 ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು
ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.
3 ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು.
ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ.
ಯಾಕೋಬನ ದೇವರ ಆಲಯಕ್ಕೆ ಹೋಗೋಣ.
ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು.
ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು.
ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ
ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.
4 ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು.
ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು.
ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು;
ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು;
ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು.
ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು.
ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.
5 ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು.
9 ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ. 10 ನಿಮ್ಮ ದೇಹವು ಪಾಪದ ದೆಸೆಯಿಂದಾಗಿ ಯಾವಾಗಲೂ ಸತ್ತದ್ದಾಗಿದೆ. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ಆತ್ಮನು ನಿಮಗೆ ಜೀವವನ್ನು ಕೊಡುತ್ತಾನೆ. ಏಕೆಂದರೆ ಕ್ರಿಸ್ತನು ನಿಮ್ಮನ್ನು ನೀತಿವಂತರನ್ನಾಗಿ ಮಾಡಿದ್ದಾನೆ. 11 ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.
Kannada Holy Bible: Easy-to-Read Version. All rights reserved. © 1997 Bible League International