Revised Common Lectionary (Semicontinuous)
ರಚನೆಗಾರ: ದಾವೀದ.
20 ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ.
ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ.
2 ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ.
ಚೀಯೋನಿನಿಂದ ನಿನಗೆ ಆಧಾರ ನೀಡಲಿ.
3 ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ.
ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.
4 ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ.
ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ.
5 ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು.
ಆತನ ಹೆಸರನ್ನು ಕೊಂಡಾಡೋಣ.
ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ.
6 ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು.
ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು;
ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.
7 ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು.
ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು.
ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.
8 ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು;
ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!
9 ಯಾಕೆಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು!
ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು.
ಯಾಜಕರು ಹೇಳಬೇಕಾದ ಆಶೀರ್ವಚನ
22 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 23 “ನೀನು ಆರೋನನಿಗೂ ಅವನ ಪುತ್ರರಿಗೂ ಹೀಗೆ ಆಜ್ಞಾಪಿಸು: ನೀವು ಇಸ್ರೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು:
24 ‘ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ.
25 ಯೆಹೋವನು ನಿಮ್ಮನ್ನು ಕನಿಕರದಿಂದ ನೋಡಿ
ನಿಮ್ಮ ಮೇಲೆ ದಯವಿಡಲಿ.
26 ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು
ಶಾಂತಿಯನ್ನು ಅನುಗ್ರಹಿಸಲಿ.’”
27 ಬಳಿಕ ಯೆಹೋವನು, “ಹೀಗೆ ಆರೋನನೂ ಅವನ ಪುತ್ರರೂ ಇಸ್ರೇಲರನ್ನು ನನ್ನ ಹೆಸರಿನಿಂದ ಆಶೀರ್ವದಿಸುವುದರಿಂದ ನಾನು ಅವರನ್ನು ಆಶೀರ್ವದಿಸುವೆನು” ಎಂದನು.
ಉರಿಯುವ ದೀಪದಂತಿರಿ
(ಲೂಕ 8:16-18)
21 ನಂತರ ಯೇಸು ಅವರಿಗೆ, “ನೀವು ಉರಿಯುತ್ತಿರುವ ದೀಪವನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಇಡುತ್ತೀರಾ? ಇಲ್ಲ! ದೀಪವನ್ನು ದೀಪಸ್ತಂಭದ ಮೇಲೆ ಇಡುವಿರಿ. 22 ಆಗ ಪ್ರತಿಯೊಂದೂ ಸ್ಪಷ್ಟವಾಗಿ ಗೋಚರವಾಗುವುದು. ರಹಸ್ಯವಾದ ಪ್ರತಿಯೊಂದೂ ಬಟ್ಟಬಯಲಾಗುವುದು. 23 ನನ್ನ ಮಾತುಗಳನ್ನು ಕೇಳುತ್ತಿರುವ ಜನರೇ, ಆಲಿಸಿರಿ! 24 ನೀವು ಕೇಳುತ್ತಿರುವ ಪ್ರತಿಯೊಂದು ವಿಷಯವನ್ನು ಎಚ್ಚರಿಕೆಯಿಂದ ಆಲೋಚಿಸಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನೀವು ಕೊಟ್ಟದ್ದಕ್ಕಿಂತ ಹೆಚ್ಚಾಗಿ ಕೊಡುವರು. 25 ಯಾವನಲ್ಲಿ ಹೆಚ್ಚಾಗಿರುತ್ತದೆಯೋ ಅವನಿಗೆ ಇನ್ನೂ ಕೊಡಲಾಗುವುದು. ಯಾವನಲ್ಲಿ ಇರುವುದಿಲ್ಲವೋ ಅವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು” ಎಂದು ಹೇಳಿದನು.
Kannada Holy Bible: Easy-to-Read Version. All rights reserved. © 1997 Bible League International