Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 53

ರಚನೆಗಾರ: ದಾವೀದ.

53 ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು.
    ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ.
    ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ.
ಮನುಷ್ಯರಲ್ಲಿ ತನಗೋಸ್ಕರ ಹುಡುಕುತ್ತಿರುವ ಬುದ್ಧಿವಂತರು ಇದ್ದಾರೋ
    ಎಂದು ದೇವರು ಪರಲೋಕದಿಂದ ನೋಡುತ್ತಿದ್ದಾನೆ.
ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ.
    ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ.
ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ.
    ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ!

ದೇವರು ಹೀಗೆನ್ನುತ್ತಾನೆ: “ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ!
    ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ.
    ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶಮಾಡಲು ಸಿದ್ಧರಾಗಿದ್ದಾರೆ.”

ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು!
    ಅವರು ಇಸ್ರೇಲರ ಶತ್ರುಗಳು.
ದೇವರು ಅವರನ್ನು ತಿರಸ್ಕರಿಸಿದ್ದಾನೆ.
    ಆದ್ದರಿಂದ ದೇವಜನರು ಅವರನ್ನು ಸೋಲಿಸುವರು,
ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.

ಚೀಯೋನ್ ಪರ್ವತದ ಮೇಲಿರುವಾತನು
    ಇಸ್ರೇಲಿಗೆ ಜಯವನ್ನು ತರುವನು!
ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು.
    ಯಾಕೋಬನೇ ಉಲ್ಲಾಸಿಸು!
    ಇಸ್ರೇಲೇ ಬಹು ಸಂತೋಷಪಡು.

1 ಸಮುವೇಲನು 15:10-23

ಸಮುವೇಲನು ಸೌಲನಿಗೆ ಅವನ ಪಾಪದ ಬಗ್ಗೆ ತಿಳಿಸುವನು

10 ಸಮುವೇಲನಿಗೆ ಯೆಹೋವನ ಸಂದೇಶ ಬಂದಿತು. 11 ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.

12 ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು.

ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು. 13 ಸೌಲನು ಸಮುವೇಲನ ಹತ್ತಿರಕ್ಕೆ ಹೋಗಿ, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಯೆಹೋವನ ಆಜ್ಞೆಗಳನ್ನು ಪಾಲಿಸಿದ್ದೇನೆ” ಎಂದು ಹೇಳಿದನು.

14 ಅದಕ್ಕೆ ಸಮುವೇಲನು, “ಹಾಗಿದ್ದರೆ ನಾನು ಕೇಳುತ್ತಿರುವ ಶಬ್ದವೇನು? ದನಕುರಿಗಳ ಶಬ್ದವು ಕೇಳುತ್ತಿದೆಯಲ್ಲಾ!” ಎಂದನು.

15 ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದ್ದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು.

16 ಸಮುವೇಲನು ಸೌಲನಿಗೆ, “ಯೆಹೋವನು ಕಳೆದ ರಾತ್ರಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುತ್ತೇನೆ” ಎಂದನು.

ಸೌಲನು. “ಸರಿ, ತಿಳಿಸು” ಎಂದು ಉತ್ತರಿಸಿದನು.

17 ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಪನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ. 18 ಆತನು ನಿನಗೆ, ‘ಹೋಗು ದುಷ್ಟರಾದ ಅಮಾಲೇಕ್ಯರ ಮೇಲೆ ಯುದ್ಧ ಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಗೊಳಿಸು’ ಎಂದು ಆಜ್ಞಾಪಿಸಿದರು. 19 ಆದರೆ ನೀನು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ. ನೀನು ಅವುಗಳನ್ನು ನಿನ್ನ ಬಳಿಯಲ್ಲಿಟ್ಟುಕೊಳ್ಳಲು ಬಯಸಿದೆ. ಹೀಗೆ ಯೆಹೋವನು ಕೆಟ್ಟದೆಂದು ಹೇಳಿದ್ದನ್ನೇ ನೀನು ಮಾಡಿದೆ!” ಎಂದು ಹೇಳಿದನು.

20 ಸೌಲನು, “ಆದರೆ ನಾನು ಯೆಹೋವನಿಗೆ ವಿಧೇಯನಾದೆ. ಆತನು ಕಳುಹಿಸಿದಲ್ಲಿಗೆ ನಾನು ಹೋಗಿ ಅಮಾಲೇಕ್ಯರೆಲ್ಲರನ್ನು ನಾಶಗೊಳಿಸಿದೆ. ಆದರೆ ಒಬ್ಬನನ್ನೇ ನಾನು ತಂದೆನು. ಅವನೇ ರಾಜನಾದ ಅಗಾಗ. 21 ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞವನ್ನರ್ಪಿಸುವುದಕ್ಕಾಗಿ ಸೈನಿಕರು ಉತ್ತಮವಾದ ದನಕುರಿಗಳನ್ನು ವಶಪಡಿಸಿಕೊಂಡು ಬಂದರು” ಎಂದು ಉತ್ತರಿಸಿದನು.

22 ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ. 23 ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.

ಪ್ರಕಟನೆ 21:22-22:5

22 ನಾನು ನಗರದಲ್ಲಿ ಒಂದು ಆಲಯವನ್ನೂ ನೋಡಲಿಲ್ಲ. ಸರ್ವಶಕ್ತನಾದ ದೇವರಾದ ಪ್ರಭು ಮತ್ತು ಕುರಿಮರಿಯಾದಾತನು (ಯೇಸು) ನಗರದ ಆಲಯವಾಗಿದ್ದಾರೆ. 23 ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.

24 ಕುರಿಮರಿಯಾದಾತನು ನೀಡಿದ ಬೆಳಕಿನಿಂದ ಲೋಕದ ಜನರು ನಡೆಯುತ್ತಾರೆ. ಲೋಕದ ರಾಜರುಗಳು ತಮ್ಮ ಸಿರಿಸಂಪತ್ತನ್ನು ನಗರಕ್ಕೆ ತರುತ್ತಾರೆ. 25 ನಗರದ ಬಾಗಿಲುಗಳು ಎಂದಿಗೂ ಮುಚ್ಚುವುದೇ ಇಲ್ಲ. ಏಕೆಂದರೆ ಅಲ್ಲಿ ರಾತ್ರಿಯೇ ಇಲ್ಲ. 26 ಜನಾಂಗಗಳ ವೈಭವ ಮತ್ತು ಗೌರವಗಳು ನಗರಕ್ಕೆ ಬರುತ್ತವೆ. 27 ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.

22 ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ, ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.

ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ. ಅವರು ಆತನ ಮುಖವನ್ನು ನೋಡುತ್ತಾರೆ. ದೇವರ ಹೆಸರನ್ನು ಅವರ ಹಣೆಗಳ ಮೇಲೆ ಬರೆಯಲಾಗುತ್ತದೆ. ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International