Revised Common Lectionary (Semicontinuous)
ರಚನೆಗಾರ: ದಾವೀದ.
24 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದೇ.
ಲೋಕವೂ ಅದರ ನಿವಾಸಿಗಳೂ ಆತನವೇ.
2 ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ.
ಅದನ್ನು ಜಲರಾಶಿಗಳ ಮೇಲೆ ಕಟ್ಟಿದವನೂ ಆತನೇ.
3 ಯೆಹೋವನ ಪರ್ವತವನ್ನು ಹತ್ತುವವರು ಎಂಥವರಾಗಿರಬೇಕು?
ಆತನ ಪವಿತ್ರ ಆಲಯದಲ್ಲಿ ನಿಂತುಕೊಳ್ಳುವವರು ಎಂಥವರಾಗಿರಬೇಕು?
4 ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ
ಶುದ್ಧ ಹೃದಯವುಳ್ಳವರೂ
ನನ್ನ ಹೆಸರಿನಲ್ಲಿ[a] ಮೋಸ ಪ್ರಮಾಣ ಮಾಡದವರೂ
ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.
5 ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು;
ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು.
6 ಆತನನ್ನು ಅನುಸರಿಸುವವರು ಇಂಥವರೇ.
ಸಹಾಯಕ್ಕಾಗಿ ಯಾಕೋಬನ ದೇವರ ಬಳಿಗೆ ಹೋಗುವವರು ಇಂಥವರೇ.
7 ಹೆಬ್ಬಾಗಿಲುಗಳೇ, ಉನ್ನತವಾಗಿರಿ!
ಪುರಾತನ ದ್ವಾರಗಳೇ, ತೆರದುಕೊಂಡಿರಿ.
ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.
8 ಮಹಿಮಾಸ್ವರೂಪನಾದ ಈ ರಾಜನು ಯಾರು?
ಬಲಿಷ್ಠನೂ ಮಹಾಪರಾಕ್ರಮಿಯೂ ಆಗಿರುವ
ಯೆಹೋವನೇ ಆತನು.
9 ಹೆಬ್ಬಾಗಿಲುಗಳೇ, ಉನ್ನತವಾಗಿರಿ!
ಪುರಾತನ ದ್ವಾರಗಳೇ, ತೆರೆದುಕೊಂಡಿರಿ.
ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.
10 ಮಹಿಮಾಸ್ವರೂಪನಾದ ಈ ರಾಜನು ಯಾರು?
ಸೇನಾಧೀಶ್ವರನಾದ ಯೆಹೋವನೇ ಆ ರಾಜನು.
ಮಹಿಮಾಸ್ವರೂಪನಾದ ರಾಜನು ಆತನೇ.
ಒಡಂಬಡಿಕೆ ಪೆಟ್ಟಿಗೆ
37 ಬೆಚಲೇಲನು ಜಾಲೀಮರದಿಂದ ಪವಿತ್ರ ಪೆಟ್ಟಿಗೆಯನ್ನು ಮಾಡಿದನು. ಪೆಟ್ಟಿಗೆಯು ಎರಡೂವರೆ ಮೊಳ ಉದ್ದ ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರವಿತ್ತು. 2 ಪೆಟ್ಟಿಗೆಯ ಹೊರಗಿನ ಮತ್ತು ಒಳಗಿನ ಭಾಗವನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ಬಳಿಕ ಪೆಟ್ಟಿಗೆಯ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು. 3 ಅವನು ಚಿನ್ನದ ನಾಲ್ಕು ಬಳೆಗಳನ್ನು ಮಾಡಿಸಿ ಪೆಟ್ಟಿಗೆಯ ನಾಲ್ಕು ಮೂಲೆಗಳಲ್ಲಿ ಇರಿಸಿದನು. ಈ ಬಳೆಗಳು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸಲ್ಪಡುತ್ತಿದ್ದವು. ಪ್ರತಿಯೊಂದು ಬದಿಯಲ್ಲೂ ಎರಡು ಬಳೆಗಳಿದ್ದವು. 4 ಬಳಿಕ ಪೆಟ್ಟಿಗೆಯನ್ನು ಹೊರುವುದಕ್ಕಾಗಿ ಕೋಲುಗಳನ್ನು ಜಾಲೀಮರದಿಂದ ಮಾಡಿಸಿದನು. ಅದನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. 5 ಪೆಟ್ಟಿಗೆಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅವನು ಕೋಲುಗಳನ್ನು ಸೇರಿಸಿದನು. 6 ಬಳಿಕ ಅವನು ಅಪ್ಪಟ ಬಂಗಾರದ ಕೃಪಾಸನವನ್ನು ಮಾಡಿಸಿದನು. ಅದು ಎರಡೂವರೆ ಮೊಳ ಉದ್ದ ಮತ್ತು ಒಂದೂವರೆ ಮೊಳ ಅಗಲ ಇತ್ತು. 7 ಬಳಿಕ ಬೆಚಲೇಲನು ಬಂಗಾರವನ್ನು ಸುತ್ತಿಗೆಯಿಂದ ಕೆತ್ತಿ ಎರಡು ಕೆರೂಬಿಗಳ ಆಕಾರಗಳನ್ನು ಮಾಡಿದನು. ಅವನು ಕೆರೂಬಿದೂತರನ್ನು ಕೃಪಾಸನದ ಕೊನೆಗಳಲ್ಲಿ ಇಟ್ಟನು. 8 ಒಂದು ಕೆರೂಬಿಯನ್ನು ಕೃಪಾಸನದ ಒಂದು ಕೊನೆಯಲ್ಲೂ ಇನ್ನೊಂದನ್ನು ಮತ್ತೊಂದು ಕೊನೆಯಲ್ಲೂ ಇಟ್ಟನು. ಅವುಗಳನ್ನು ಒಟ್ಟಾಗಿ ಕೃಪಾಸನಕ್ಕೆ ಜೋಡಿಸಿ ಒಂದೇ ವಸ್ತುವನ್ನಾಗಿ ಮಾಡಿದನು. 9 ಕೆರೂಬಿಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿದ್ದವು. ಅವುಗಳು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
ವಿಶೇಷ ಮೇಜು
10 ತರುವಾಯ, ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇತ್ತು. 11 ಅವನು ಮೇಜನ್ನು ಅಪ್ಪಟ ಬಂಗಾರದಿಂದ ಹೊದಿಸಿದನು; ಮೇಜಿನ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು. 12 ಬಳಿಕ ಅವನು ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿದನು; ಆ ಚೌಕಟ್ಟಿಗೆ ಚಿನ್ನದ ಗೋಟನ್ನು ಕಟ್ಟಿಸಿದನು. 13 ಬಳಿಕ ಅವನು ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿ ಅವುಗಳನ್ನು ಇರಿಸಿದನು. 14 ಅವನು ಬಳೆಗಳನ್ನು ಮೇಜಿನ ತುದಿಯಲ್ಲಿರುವ ಚೌಕಟ್ಟಿಗೆ ಹತ್ತಿರವಾಗಿ ಇರಿಸಿದನು. ಕೋಲುಗಳಿಂದ ಮೇಜನ್ನು ಹೊರುವುದಕ್ಕಾಗಿ ಈ ಬಳೆಗಳು ಇದ್ದವು. 15 ಬಳಿಕ ಮೇಜನ್ನು ಹೊರುವುದಕ್ಕಾಗಿ ಉಪಯೋಗಿಸಲ್ಪಡುತ್ತಿದ್ದ ಕೋಲುಗಳನ್ನು ಜಾಲೀಮರದಿಂದ ಮಾಡಿದನು. ಕೋಲುಗಳನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. 16 ಬಳಿಕ ಅವನು ಮೇಜಿನಲ್ಲಿ ಉಪಯೋಗಿಸಲ್ಪಡುತ್ತಿದ್ದ ಎಲ್ಲಾ ವಸ್ತುಗಳನ್ನು ಮಾಡಿದನು. ಅವನು ಅಪ್ಪಟ ಬಂಗಾರದ ತಟ್ಟೆ, ಚಮಚ, ಬೋಗುಣಿ ಮತ್ತು ಹೂಜೆಗಳನ್ನು ಮಾಡಿದನು. ಬೋಗುಣಿ ಮತ್ತು ಹೂಜೆಗಳು ಪಾನದ್ರವ್ಯ ಸಮರ್ಪಣೆಗಳನ್ನು ಅರ್ಪಿಸುವುದಕ್ಕೆ ಉಪಯುಕ್ತವಾಗಿದ್ದವು.
ಕ್ರೈಸ್ತರು ಮಾಡತಕ್ಕ ಕಾರ್ಯಗಳು
2 ಪ್ರಾರ್ಥನೆಯನ್ನು ತಪ್ಪದೆ ಮಾಡಿರಿ, ನೀವು ಪ್ರಾರ್ಥಿಸುವಾಗ, ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ. 3 ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ. 4 ಈ ಸತ್ಯವನ್ನು ನಾನು ಜನರಿಗೆ ಸ್ಪಷ್ಟವಾಗಿಯೂ ಸರಳವಾಗಿಯೂ ತಿಳಿಸಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.
5 ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ. 6 ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.
ಪೌಲನೊಂದಿಗಿರುವ ಜನರನ್ನು ಕುರಿತ ಸುದ್ಧಿ
7 ತುಖಿಕನು ಕ್ರಿಸ್ತನಲ್ಲಿ ನನ್ನ ಪ್ರೀತಿಯ ಸಹೋದರನಾಗಿದ್ದಾನೆ. ನನ್ನೊಡನೆ ಅವನೂ ಪ್ರಭುವಿನಲ್ಲಿ ನಂಬಿಗಸ್ತನಾದ ಸೇವಕನೂ ದಾಸನೂ ಆಗಿದ್ದಾನೆ. ನನಗೆ ಸಂಭವಿಸುತ್ತಿರುವುದನ್ನೆಲ್ಲ ಅವನು ನಿಮಗೆ ತಿಳಿಸುತ್ತಾನೆ. 8 ಆದಕಾರಣವೇ ನಾನು ಅವನನ್ನು ಕಳುಹಿಸುತ್ತಿದ್ದೇನೆ. ನಾವು ಹೇಗಿರುವೆವು ಎಂಬುದನ್ನು ನೀವು ತಿಳಿದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮನ್ನು ಪ್ರೋತ್ಸಾಹಿಸಲು ನಾನು ಅವನನ್ನು ಒನೇಸಿಮನ ಜೊತೆಯಲ್ಲಿ ಕಳುಹಿಸುತ್ತಿದ್ದೇನೆ. 9 ಒನೇಸಿಮನು ಕ್ರಿಸ್ತನಲ್ಲಿ ನಂಬಿಗಸ್ತನಾದ ಪ್ರೀತಿಯ ಸಹೋದರನಾಗಿದ್ದಾನೆ. ಅವನು ನಿಮ್ಮ ಊರಿನವನೇ. ಇಲ್ಲಿ ಸಂಭವಿಸಿದ್ದೆಲ್ಲವನ್ನು ಅವರು ನಿಮಗೆ ತಿಳಿಸುತ್ತಾರೆ.
10 ಅರಿಸ್ತಾರ್ಕನು ವಂದನೆ ತಿಳಿಸಿದ್ದಾನೆ. ಅವನೂ ನನ್ನೊಡನೆ ಸೆರೆಯಲ್ಲಿದ್ದಾನೆ. ಬಾರ್ನಬನಿಗೆ ಸೋದರ ಬಾಂಧ್ಯವ್ಯವುಳ್ಳ ಮಾರ್ಕನೂ ವಂದನೆಯನ್ನು ಹೇಳುತ್ತಾನೆ. (ಮಾರ್ಕನ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ಈಗಾಗಲೇ ಹೇಳಿದ್ದೇನೆ. ಅವನು ಬಂದರೆ ಅವನನ್ನು ಸ್ವಾಗತಿಸಿರಿ.) 11 ಯೇಸುವು (ಯುಸ್ತನೆಂದೂ ಅವನನ್ನು ಕರೆಯುತ್ತಾರೆ.) ಸಹ ವಂದನೆಯನ್ನು ಹೇಳುತ್ತಾನೆ. ಯೆಹೂದ್ಯರಲ್ಲಿ ವಿಶ್ವಾಸಿಗಳಾಗಿರುವ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಇವರೇ ನನಗೆ ಆದರಣೆಯಾಗಿದ್ದಾರೆ.
12 ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ. 13 ಅವನು ನಿಮಗೋಸ್ಕರ, ಲವೊದಿಕೀಯ ಮತ್ತು ಹಿರೆಯಾ ಪೊಲಿಯದ ಜನರಿಗೋಸ್ಕರ ಬಹಳ ಪ್ರಯಾಸಪಟ್ಟು ಕೆಲಸ ಮಾಡಿದನೆಂಬುದು ನನಗೆ ತಿಳಿದಿದೆ. 14 ದೇಮನು ಮತ್ತು ಪ್ರೀತಿಯ ಸ್ನೇಹಿತನಾದ ವೈದ್ಯ ಲೂಕನು ವಂದನೆಗಳನ್ನು ಹೇಳುತ್ತಾರೆ.
15 ಲವೊದಿಕೀಯದಲ್ಲಿರುವ ಸಹೋದರ ಸಹೋದರಿಯರಿಗೆ ವಂದನೆಗಳನ್ನು ತಿಳಿಸಿರಿ. ನುಂಫಳಿಗೂ ಅವಳ ಮನೆಯಲ್ಲಿ ಸೇರುವ ಸಭೆಯವರಿಗೂ ವಂದನೆಗಳನ್ನು ತಿಳಿಸಿರಿ. 16 ಈ ಪತ್ರವನ್ನು ಓದಿದ ನಂತರ ಲವೊದಿಕೀಯದ ಸಭೆಯವರಿಗೂ ಓದಲು ಕೊಡಿರಿ. ನಾನು ಲವೊದಿಕೀಯದವರಿಗೆ ಬರೆದಿರುವ ಪತ್ರವನ್ನು ನೀವೂ ಓದಿರಿ. 17 ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.
18 ನಿಮಗೆ ನನ್ನ ವಂದನೆಗಳು. ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.
Kannada Holy Bible: Easy-to-Read Version. All rights reserved. © 1997 Bible League International