Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 68:24-35

24 ಇಗೋ, ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ.
    ನನ್ನ ರಾಜನಾದ ಪರಿಶುದ್ಧ ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ.
25 ಮುಂಭಾಗದಲ್ಲಿ ಗಾಯಕರೂ ಹಿಂಭಾಗದಲ್ಲಿ ವಾದ್ಯ ಬಾರಿಸುವವರೂ
    ಸುತ್ತಲು ದಮ್ಮಡಿ ಬಡಿಯುವ ಯುವತಿಯರೂ ಹೋಗುತ್ತಿದ್ದಾರೆ.
26 ಮಹಾಸಭೆಯಲ್ಲಿ ದೇವರಿಗೆ ಸ್ತೋತ್ರವಾಗಲಿ!
    ಇಸ್ರೇಲ್ ಜನರೇ, ಯೆಹೋವನಿಗೆ ಸ್ತೋತ್ರಮಾಡಿರಿ!
27 ಅವರನ್ನು ಮುನ್ನಡೆಸಿಕೊಂಡು ಹೋಗುವವರಲ್ಲಿ ಮೊದಲನೆಯದಾಗಿ ಬೆನ್ಯಾಮೀನನ ಚಿಕ್ಕ ಕುಲವಿದೆ;
    ಅದರ ನಂತರ ಯೆಹೂದನ ಮಹಾಕುಲವಿದೆ.
    ಅದರ ನಂತರ ಜೆಬುಲೂನ್ ಮತ್ತು ನಫ್ತಾಲಿ ಕುಲಗಳ ನಾಯಕರು ಇದ್ದಾರೆ.

28 ದೇವರೇ, ನಿನ್ನ ಬಲವನ್ನು ನಮಗೆ ತೋರಿಸು!
    ಹಿಂದಿನ ಕಾಲದಲ್ಲಿ ನಮಗಾಗಿ ಮಾಡಿದ ಬಲಪ್ರಯೋಗವನ್ನು ನಮಗೆ ತೋರಿಸು.
29 ರಾಜರುಗಳು ತಮ್ಮ ಕಾಣಿಕೆಗಳನ್ನು ತೆಗೆದುಕೊಂಡು
    ಜೆರುಸಲೇಮಿನ ನಿನ್ನ ಆಲಯಕ್ಕೆ ಬರುವರು.
30 ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು.
    ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು.
ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ
    ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು.
31 ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು.
    ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು.
32 ಭೂರಾಜರುಗಳೇ, ದೇವರಿಗೆ ಗಾಯನ ಮಾಡಿರಿ!
    ನಮ್ಮ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿರಿ!

33 ದೇವರಿಗೆ ಗಾಯನ ಮಾಡಿರಿ!
ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು.
    ಆತನ ಗರ್ಜನೆಗೆ ಕಿವಿಗೊಡಿರಿ!
34 ದೇವರ ಬಲವನ್ನು ಕೊಂಡಾಡಿರಿ.
    ಆತನ ಗಾಂಭೀರ್ಯವು ಇಸ್ರೇಲರ ಆಶ್ರಯವಾಗಿದೆ.
    ಆತನ ಶಕ್ತಿಯು ಆಕಾಶಗಳಲ್ಲಿ ವ್ಯಾಪಿಸಿದೆ.
35 ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ.
ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು.
ದೇವರಿಗೆ ಸ್ತೋತ್ರ!

2 ಸಮುವೇಲನು 6:16-23

16 ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.

17 ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.

18 ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. 19 ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.

ಮೀಕಲಳು ದಾವೀದನನ್ನು ತಿರಸ್ಕರಿಸಿದಳು

20 ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸಲು ಹೋದನು. ಆದರೆ ಸೌಲನ ಮಗಳಾದ ಮೀಕಲಳು ಅವನನ್ನು ಭೇಟಿಮಾಡಲು ಹೊರಗೆ ಬಂದು, “ಇಸ್ರೇಲರ ರಾಜನು ಈ ದಿನ ತನ್ನ ಗೌರವವನ್ನು ಕಾಪಾಡಿಕೊಳ್ಳಲಿಲ್ಲ! ನಾಚಿಕೆಯಿಲ್ಲದೆ ತನ್ನೆಲ್ಲ ಬಟ್ಟೆಗಳನ್ನೂ ತೆಗೆದುಹಾಕುವ ಮೂರ್ಖನಂತೆ, ನೀನು ನಿನ್ನ ಸೇವಕರ ಮತ್ತು ದಾಸಿಯರ ಮುಂದೆ ನಿನ್ನ ಬಟ್ಟೆಗಳನ್ನೆಲ್ಲ ತೆಗೆದು ಹಾಕಿದೆಯಲ್ಲ”[a] ಎಂದಳು.

21 ಆಗ ದಾವೀದನು ಮೀಕಲಳಿಗೆ, “ಯೆಹೋವನು ನಿನ್ನ ತಂದೆಯನ್ನಾಗಲಿ ಅವರ ಕುಟುಂಬದ ಇತರ ಯಾರನ್ನೇ ಆಗಲಿ ಆರಿಸಿಕೊಳ್ಳದೆ ನನ್ನನ್ನೇ ಇಸ್ರೇಲರ ನಾಯಕನನ್ನಾಗಿ ಆರಿಸಿಕೊಂಡಿದ್ದಾನೆ. ಆದ್ದರಿಂದಲೇ ನಾನು ಯೆಹೋವನ ಸನ್ನಿಧಿಯಲ್ಲಿ ಕುಣಿದಾಡಿದೆನು. 22 ಆತನ ಮುಂದೆ ಇನ್ನೂ ಹೀನವಾಗಿ ಕಾಣಿಸಿಕೊಳ್ಳುವುದಕ್ಕೂ ನನ್ನನ್ನು ನಾನು ಕಡೆಗಣಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ. ಬಹುಶಃ ನೀನು ನನ್ನನ್ನು ಗೌರವಿಸದಿರಬಹುದು, ಆದರೆ ನೀನು ಯಾವ ದಾಸಿಯರ ಬಗ್ಗೆ ಮಾತನಾಡಿದೆಯೋ ಅವರು ನನ್ನನ್ನು ಗೌರವಿಸುತ್ತಾರೆ” ಎಂದು ಹೇಳಿದನು.

23 ಸೌಲನ ಮಗಳಾದ ಮೀಕಲಳು ಬಂಜೆಯಾಗಿ ಉಳಿದಳು. ಅವಳು ಮಕ್ಕಳೇ ಇಲ್ಲದೆ ಸತ್ತುಹೋದಳು.

ಲೂಕ 7:31-35

31 “ಈ ಕಾಲದ ಜನರ ಬಗ್ಗೆ ನಾನು ಏನು ಹೇಳಲಿ? ನಾನು ಅವರನ್ನು ಯಾವುದಕ್ಕೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ? 32 ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಿಗೆ ಹೋಲುತ್ತಾರೆ. ಒಂದು ಗುಂಪಿನ ಮಕ್ಕಳು ಇನ್ನೊಂದು ಗುಂಪಿನ ಮಕ್ಕಳನ್ನು ಕರೆದು,

‘ನಾವು ನಿಮಗೋಸ್ಕರ ವಾದ್ಯಬಾರಿಸಿದೆವು,
    ಆದರೆ ನೀವು ಕುಣಿಯಲಿಲ್ಲ;
ನಾವು ದುಃಖದ ಹಾಡನ್ನು ಹಾಡಿದೆವು,
    ಆದರೆ ನೀವು ಅಳಲಿಲ್ಲ’

ಎಂದು ಹೇಳುತ್ತಾರೆ. 33 ಸ್ನಾನಿಕ ಯೋಹಾನನು ಬಂದನು. ಅವನು ಇತರರಂತೆ ತಿನ್ನಲಿಲ್ಲ ಅಥವಾ ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತೀರಿ. 34 ಮನುಷ್ಯಕುಮಾರನು ಬಂದನು. ಅವನು ಇತರ ಜನರಂತೆ ಊಟಮಾಡುತ್ತಾನೆ ಮತ್ತು ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ನೀವು, ‘ನೋಡಿರಿ! ಅವನೊಬ್ಬ ಹೊಟ್ಟೆಬಾಕ, ಕುಡುಕ! ಸುಂಕವಸೂಲಿಗಾರರು ಮತ್ತು ಇತರ ಕೆಟ್ಟಜನರೇ ಅವನ ಸ್ನೇಹಿತರು!’ ಎನ್ನುತ್ತೀರಿ. 35 ಆದರೆ ಜ್ಞಾನವು ತನ್ನ ಕಾರ್ಯಗಳಿಂದಲೇ ತನ್ನನ್ನು ಸಮರ್ಥಿಸಿಕೊಳ್ಳುವುದು” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International