Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 14

ರಚನೆಗಾರ: ದಾವೀದ.

14 ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು.
    ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು.
    ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.

ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ
    ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.
ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ.
    ಎಲ್ಲರೂ ಕೆಟ್ಟುಹೋಗಿದ್ದಾರೆ.
ಒಳ್ಳೆಯದನ್ನು ಮಾಡುವವನು ಇಲ್ಲ;
    ಒಬ್ಬನಾದರೂ ಇಲ್ಲ.

ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ?
    ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ.
    ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.
5-6 ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ.
    ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ.
ಆದರೆ ದೇವರು ನೀತಿವಂತರೊಂದಿಗಿದ್ದಾನೆ.
    ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.

ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ?
    ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ.
ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು;
    ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.

2 ಸಮುವೇಲನು 10:1-5

ದಾವೀದನ ಜನರಿಗೆ ಹಾನೂನನು ಅವಮಾನ ಮಾಡಿದ್ದು

10 ತರುವಾಯ, ಅಮ್ಮೋನಿಯರ ರಾಜನಾದ ನಾಹಾಷನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ರಾಜನಾದನು. ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದನು. ಆದ್ದರಿಂದ ಅವನ ಮಗನಿಗೆ ನಾನು ದಯೆತೋರಿಸುವೆನು” ಎಂದು ಹೇಳಿದನು. ಆದ್ದರಿಂದ ತಂದೆಯ ಸಾವಿನಿಂದ ಶೋಕತಪ್ತನಾಗಿರುವ ಹಾನೂನನನ್ನು ಸಂತೈಸಲು ದಾವೀದನು ತನ್ನ ಅಧಿಕಾರಿಗಳನ್ನು ಕಳುಹಿಸಿದನು.

ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಹೋದರು. ಆದರೆ ಅಮ್ಮೋನಿಯರ ನಾಯಕರು ತಮ್ಮ ಪ್ರಭುವಾದ ಹಾನೂನನಿಗೆ, “ನಿನ್ನನ್ನು ಸಂತೈಸಲು ಕೆಲವು ಜನರನ್ನು ಕಳುಹಿಸುವುದರ ಮೂಲಕ ದಾವೀದನು ನಿನ್ನ ತಂದೆಯನ್ನು ಗೌರವಿಸಲು ಪ್ರಯತ್ನಿಸುತ್ತಿರುವನೆಂದು ನೀನು ಭಾವಿಸಿರುತ್ತಿಯಲ್ಲವೇ? ಇಲ್ಲ! ನಿನ್ನ ನಗರದ ಸಂಗತಿಗಳನ್ನು ರಹಸ್ಯವಾಗಿ ಕಂಡುಕೊಳ್ಳಲು ಮತ್ತು ತಿಳಿದುಕೊಳ್ಳಲು ದಾವೀದನು ಈ ಜನರನ್ನು ಕಳುಹಿಸಿದ್ದಾನೆ. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡಲು ಯೋಜನೆ ಮಾಡುತ್ತಿದ್ದಾರೆ” ಎಂದು ಹೇಳಿದರು.

ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ ಅವರ ಗಡ್ಡದ ಅರ್ಧಭಾಗವನ್ನು ಬೋಳಿಸಿದನು. ಅವರ ನಡುವಿನ ಕೆಳಭಾಗವು ಕಾಣುವಂತೆ ಅವರ ಬಟ್ಟೆಗಳನ್ನು ಮಧ್ಯಭಾಗದಲ್ಲಿ ಕತ್ತರಿಸಿದನು, ನಂತರ ಅವರನ್ನು ಕಳುಹಿಸಿದನು.

ಅವರು ದಾವೀದನಿಗೆ ಈ ಸುದ್ದಿಯನ್ನು ತಿಳಿಸಿದರು. ಆಗ ದಾವೀದನು ತನ್ನ ಬಳಿಗೆ ಬರಲು ಬಹಳ ನಾಚಿಕೆಯಿಂದಿದ್ದ ಅಧಿಕಾರಗಳ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಿಮ್ಮ ಗಡ್ಡಗಳು ಮತ್ತೆ ಬೆಳೆಯುವವರೆಗೆ ಜೆರಿಕೊವಿನಲ್ಲಿ ಇರಿ. ಅನಂತರ ಜೆರುಸಲೇಮಿಗೆ ಬನ್ನಿ” ಎಂದು ತಿಳಿಸಿದನು.

ಕೊಲೊಸ್ಸೆಯವರಿಗೆ 1:9-14

ನಿಮ್ಮ ಬಗ್ಗೆ ಈ ಸಂಗತಿಗಳನ್ನು ಕೇಳಿದ ದಿನದಿಂದ, ನಿಮಗೋಸ್ಕರ ಎಡಬಿಡದೆ ಪ್ರಾರ್ಥಿಸುತ್ತಿದ್ದೇವೆ.

ದೇವರು ಅಪೇಕ್ಷಿಸುವ ಸಂಗತಿಗಳೆಲ್ಲವನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳಬೇಕೆಂತಲೂ ಆತ್ಮಿಕ ಸಂಗತಿಗಳಲ್ಲಿ ಮಹಾಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಹೊಂದಿಕೊಳ್ಳಬೇಕೆಂತಲೂ 10 ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ 11 ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.

12 ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು. 13 ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ. 14 ಮಗನು ನಮ್ಮ ಪಾಪಗಳಿಗೆ ಪರಿಹಾರ ನೀಡಿದನು. ಆತನಲ್ಲಿಯೇ ನಮ್ಮ ಪಾಪಗಳಿಗೆ ಕ್ಷಮೆ ದೊರೆಯಿತು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International