Revised Common Lectionary (Semicontinuous)
111 ಯೆಹೋವನಿಗೆ ಸ್ತೋತ್ರವಾಗಲಿ!
ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು.
2 ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು.
ಜನರು ಅವುಗಳಲ್ಲಿ ಸಂತೋಷಿಸುತ್ತಾ ಅವುಗಳನ್ನೇ ಧ್ಯಾನಿಸುವರು.
3 ಆತನು ಮಹತ್ವವಾದ ಮತ್ತು ಅದ್ಭುತವಾದ ಕಾರ್ಯಗಳನ್ನು ಮಾಡುವನು.
ಆತನ ನೀತಿಯು ಶಾಶ್ವತವಾದದ್ದು.
4 ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ
ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.
5 ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು;
ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು.
6 ಆತನು ಅನ್ಯಜನಾಂಗಗಳ ದೇಶವನ್ನು
ತನ್ನ ಜನರಿಗೆ ಕೊಡುವುದರ ಮೂಲಕ ಪ್ರಬಲವಾದ ಕಾರ್ಯಗಳನ್ನು ಮಾಡಿದ್ದಾನೆ.
7 ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ.
ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ.
8 ದೇವರ ಆಜ್ಞೆಗಳು ಶಾಶ್ವತವಾಗಿವೆ.
ಅವು ಯಥಾರ್ಥವಾಗಿಯೂ ಮತ್ತು ಶುದ್ಧವಾಗಿಯೂ ಇವೆ.
9 ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ.
ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ.
10 ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ.
ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ.
ಆತನಿಗೆ ಸದಾಕಾಲ ಸ್ತೋತ್ರವಾಗಲಿ.
ದಾವೀದ ರಾಜನ ಮರಣ
2 ದಾವೀದನು ಸಾಯುವ ಕಾಲವು ಹತ್ತಿರವಾಯಿತು. ಆದ್ದರಿಂದ ದಾವೀದನು ಸೊಲೊಮೋನನೊಂದಿಗೆ ಮಾತನಾಡುತ್ತಾ, ಅವನಿಗೆ, 2 “ಎಲ್ಲರಂತೆ ನನಗೂ ಸಾಯುವ ಕಾಲ ಸಮೀಪಿಸಿತು. ನೀನಾದರೋ ಬಲಿಷ್ಠನಾಗಿರು; ಧೈರ್ಯವಂತನಾಗಿರು. 3 ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ. 4 ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”
5 “ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು. 6 ಆದರೆ ಈಗ ನೀನು ರಾಜನಾಗಿರುವೆ. ಆದ್ದರಿಂದ ನಿನ್ನ ಜ್ಞಾನಕ್ಕೆ ಸರಿತೋಚಿದ ರೀತಿಯಲ್ಲಿ ನೀನು ಅವನನ್ನು ದಂಡಿಸು. ಆದರೆ ನೀನು ಅವನನ್ನು ಖಂಡಿತವಾಗಿ ಕೊಲ್ಲಲೇಬೇಕು. ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ!”
7 “ಗಿಲ್ಯಾದಿನವನಾದ ಬರ್ಜಿಲ್ಲ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ಪಂಕ್ತಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ಷಾಲೋಮನಿಂದ ಓಡಿಹೋದಾಗ ಅವರು ನನಗೆ ಸಹಾಯ ಮಾಡಿದರು.
8 “ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ಆ ದಿನದಂದು ಅವನು ನನ್ನ ವಿರುದ್ಧವಾಗಿ ಬಹಳವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದೆನು. 9 ಅವನನ್ನು ದಂಡಿಸದೆ ಬಿಡಬೇಡ. ನೀನು ಬುದ್ಧಿವಂತ! ಅವನಿಗೆ ಏನು ಮಾಡಬೇಕೆಂಬುದು ನಿನಗೆ ತಿಳಿದಿದೆ. ಆದರೆ ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ” ಎಂದು ಹೇಳಿದನು.
10 ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು. 11 ದಾವೀದನು ಇಸ್ರೇಲನ್ನು ನಲವತ್ತು ವರ್ಷಗಳ ಕಾಲ ಆಳಿದನು. ಅವನು ಏಳು ವರ್ಷ ಹೆಬ್ರೋನಿನಲ್ಲೂ ಮೂವತ್ತಮೂರು ವರ್ಷ ಜೆರುಸಲೇಮಿನಲ್ಲೂ ಆಡಳಿತ ನಡೆಸಿದನು.
7 ಸಮಾರ್ಯದ ಸ್ತ್ರೀಯೊಬ್ಬಳು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬಂದಳು. ಯೇಸು ಆಕೆಗೆ, “ದಯವಿಟ್ಟು, ಕುಡಿಯಲು ಸ್ವಲ್ಪ ನೀರು ಕೊಡು” ಎಂದು ಕೇಳಿದನು. 8 (ಯೇಸುವಿನ ಶಿಷ್ಯರು ಆಹಾರಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.)
9 ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೋ ಯೆಹೂದ್ಯನು. ನಾನಾದರೋ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.)
10 ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.
11 ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ. 12 ನಮ್ಮ ಪಿತೃವಾದ ಯಾಕೋಬನಿಗಿಂತಲೂ ನೀನು ದೊಡ್ಡವನೋ? ನಮಗೆ ಈ ಬಾವಿಯನ್ನು ಯಾಕೋಬನೇ ಕೊಟ್ಟನು. ಸ್ವತಃ ಅವನೇ ಈ ನೀರನ್ನು ಕುಡಿದನು. ಅಲ್ಲದೆ ಅವನ ಮಕ್ಕಳು ಈ ಬಾವಿಯ ನೀರನ್ನು ಕುಡಿದರು ಮತ್ತು ಅವನ ಪಶುಗಳೆಲ್ಲಾ ಈ ಬಾವಿಯ ನೀರನ್ನು ಕುಡಿದವು” ಎಂದು ಹೇಳಿದಳು.
13 ಯೇಸು, “ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೂ ಮತ್ತೆ ದಾಹವಾಗುವುದು. 14 ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.
15 ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ಆ ನೀರನ್ನು ನನಗೆ ಕೊಡು. ಆಗ ನನಗೆ ಮತ್ತೆಂದಿಗೂ ದಾಹವಾಗುವುದಿಲ್ಲ. ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ನಾನು ಇಲ್ಲಿಗೆ ಮತ್ತೆ ಬರುವ ಅಗತ್ಯವೂ ಇರುವುದಿಲ್ಲ” ಎಂದು ಹೇಳಿದಳು.
16 ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ” ಎಂದನು.
17 ಆ ಸ್ತ್ರೀಯು, “ನನಗೆ ಗಂಡನಿಲ್ಲ” ಎಂದು ಹೇಳಿದಳು.
ಯೇಸು ಆಕೆಗೆ, “ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. 18 ನಿಜವಾಗಿಯೂ ನಿನಗೆ ಐದು ಮಂದಿ ಗಂಡಂದಿರಿದ್ದರು. ಆದರೆ ಈಗ ನೀನು ಯಾರೊಂದಿಗೆ ವಾಸಿಸುತ್ತಿರುವಿಯೋ ಅವನು ನಿನ್ನ ಗಂಡನಲ್ಲ. ನೀನು ನನಗೆ ಸತ್ಯವನ್ನು ತಿಳಿಸಿದೆ” ಎಂದು ಹೇಳಿದನು.
19 ಆ ಸ್ತ್ರೀಯು, “ಅಯ್ಯಾ, ನೀನು ಪ್ರವಾದಿಯೆಂದು ಕಾಣುತ್ತದೆ. 20 ನಮ್ಮ ಪಿತೃಗಳು ಈ ಗುಡ್ಡದ ಮೇಲೆ ಆರಾಧಿಸಿದರು. ಆದರೆ ಜನರು ಆರಾಧಿಸಬೇಕಾದ ಸ್ಥಳ ಜೆರುಸಲೇಮ್ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ” ಎಂದಳು.
21 ಯೇಸು, “ಅಮ್ಮಾ, ನನ್ನನ್ನು ನಂಬು! ನೀವು ಇನ್ನೆಂದಿಗೂ ತಂದೆಯನ್ನು (ದೇವರನ್ನು) ಜೆರುಸಲೇಮಿನಲ್ಲಾಗಲಿ ಈ ಗುಡ್ಡದ ಮೇಲಾಗಲಿ ಆರಾಧಿಸಬೇಕಿಲ್ಲ. 22 ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ. 23 ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ. 24 ದೇವರು ಆತ್ಮಸ್ವರೂಪಿ. ಆದ್ದರಿಂದ ದೇವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು” ಎಂದು ಹೇಳಿದನು.
25 ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”)
26 ಆಗ ಯೇಸು, “ಆತನೇ ಈಗ ನಿನ್ನೊಂದಿಗೆ ಮಾತಾಡುತ್ತಿದ್ದಾನೆ. ನಾನೇ ಮೆಸ್ಸೀಯ” ಎಂದು ಹೇಳಿದನು.
Kannada Holy Bible: Easy-to-Read Version. All rights reserved. © 1997 Bible League International