Revised Common Lectionary (Semicontinuous)
ರಚನೆಗಾರ: ದಾವೀದ.
11 ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ.
ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?
2 ದುಷ್ಟರು ಬೇಟೆಗಾರರಂತಿದ್ದಾರೆ;
ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು;
ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.
3 ಅಸ್ತಿವಾರಗಳೇ ನಾಶವಾಗುತ್ತಿದ್ದರೆ
ನೀತಿವಂತನು ಏನು ಮಾಡಲಾದೀತು?
4 ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ.
ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು
ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ.
ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.
5 ಯೆಹೋವನು ನೀತಿವಂತರಿಗಾಗಿ ಹುಡುಕುವನು.
ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.
6 ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು.
ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.
7 ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ; ಆತನು ನ್ಯಾಯವನ್ನು ಪ್ರೀತಿಸುತ್ತಾನೆ.
ನೀತಿವಂತರು ಆತನ ಮುಖವನ್ನು ನೋಡುವರು.
13 ರಾಜನಾದ ಸೊಲೊಮೋನನು ಇಸ್ರೇಲಿನ ಮೂವತ್ತು ಸಾವಿರ ಜನರನ್ನು ಬಲತ್ಕಾರದಿಂದ ಈ ಕಾರ್ಯಕ್ಕೆ ನೇಮಿಸಿದನು. 14 ರಾಜನಾದ ಸೊಲೊಮೋನನು ಅದೋನೀರಾಮ ಎಂಬವನನ್ನು ಇವರಿಗೆ ಮೇಲ್ವಿಚಾರಕನನ್ನಾಗಿ ನೇಮಿಸಿದನು. ಸೊಲೊಮೋನನು ಅವರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಒಂದೊಂದು ಗುಂಪಿನಲ್ಲಿ ಹತ್ತು ಸಾವಿರ ಜನರಿದ್ದರು. ಪ್ರತಿಯೊಂದು ಗುಂಪಿನವರು ಲೆಬನೋನಿನಲ್ಲಿ ಒಂದು ತಿಂಗಳು ಕೆಲಸ ಮಾಡಿದ ನಂತರ ಎರಡು ತಿಂಗಳು ಮನೆಗೆ ಹಿಂತಿರುಗುತ್ತಿದ್ದರು. 15 ಸೊಲೊಮೋನನು ಎಂಭತ್ತು ಸಾವಿರ ಜನರನ್ನು ಬಲಾತ್ಕಾರದಿಂದ ಬೆಟ್ಟಪ್ರದೇಶದಲ್ಲಿ ಕೆಲಸ ಮಾಡಲು ನೇಮಿಸಿದನು. ಈ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಎಪ್ಪತ್ತು ಸಾವಿರ ಜನರು ಕಲ್ಲುಗಳನ್ನು ಹೊರುತ್ತಿದ್ದರು. 16 ಅಲ್ಲಿ ಕೆಲಸ ಮಾಡುವ ಜನರ ಮೇಲ್ವಿಚಾರಕರಾಗಿ ಮೂರು ಸಾವಿರದ ಮುನ್ನೂರು ಜನರಿದ್ದರು. 17 ರಾಜನಾದ ಸೊಲೊಮೋನನು ದೇವಾಲಯದ ಅಡಿಪಾಯಕ್ಕಾಗಿ ದೊಡ್ಡದಾದ ಹಾಗೂ ಬೆಲೆಬಾಳುವ ಕಲ್ಲುಗಳನ್ನು ಕೊರೆದು ತೆಗೆಯಲು ಆಜ್ಞಾಪಿಸಿದನು. ಈ ಕಲ್ಲುಗಳನ್ನು ಬಹು ಜಾಗರೂಕತೆಯಿಂದ ಕತ್ತರಿಸಿ ತೆಗೆದರು. 18 ನಂತರ ಸೊಲೊಮೋನನ ಮತ್ತು ಹೀರಾಮನ ಕಟ್ಟಡ ಕಟ್ಟುವವರು ಮತ್ತು ಗೆಬಾಲ್ಯ ಜನರು ಈ ಕಲ್ಲುಗಳನ್ನು ಕೆತ್ತಿದರು. ಅವರು ಕಲ್ಲುಗಳನ್ನು ಮತ್ತು ತೊಲೆಗಳನ್ನು ದೇವಾಲಯದ ನಿರ್ಮಾಣಕ್ಕಾಗಿ ಸಿದ್ಧಗೊಳಿಸಿದರು.
ಗಂಡ ಹೆಂಡತಿಯರು
21 ನೀವು ಒಬ್ಬರಿಗೊಬ್ಬರು ವಿಧೇಯರಾಗಿರಬೇಕು. ಏಕೆಂದರೆ ನೀವು ಕ್ರಿಸ್ತನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು.
22 ಸ್ತ್ರೀಯರೇ, ನೀವು ಪ್ರಭುವಿಗೆ ಅಧೀನರಾಗಿರುವಂತೆ ನಿಮ್ಮ ಗಂಡಂದಿರಿಗೂ ಅಧೀನರಾಗಿರಿ. 23 ಕ್ರಿಸ್ತನು ಸಭೆಗೆ ಶಿರಸ್ಸಾಗಿರುವಂತೆ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಸಭೆಯು ಕ್ರಿಸ್ತನ ದೇಹವಾಗಿದೆ. ಕ್ರಿಸ್ತನು ಆ ದೇಹದ ರಕ್ಷಕನಾಗಿದ್ದಾನೆ. 24 ಸಭೆಯು ಕ್ರಿಸ್ತನ ಅಧೀನದಲ್ಲಿದೆ. ಇದೇ ನಿಯಮವು ಸ್ತ್ರೀಯರಿಗೆ ಅನ್ವಯಿಸುತ್ತದೆ. ಪ್ರತಿಯೊಂದು ವಿಷಯದಲ್ಲಿಯೂ ಸ್ತ್ರೀಯರು ತಮ್ಮ ಗಂಡಂದಿರಿಗೆ ಅಧೀನರಾಗಿರಬೇಕು.
25 ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದಂತೆ ನೀವು ನಿಮ್ಮ ಹೆಂಡತಿಯರನ್ನು ಪ್ರೀತಿಸಬೇಕು. 26 ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು. 27 ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.
28 ಆದ್ದರಿಂದ ಪುರುಷರು ತಮ್ಮ ಸ್ವಂತ ದೇಹಗಳನ್ನು ಪ್ರೀತಿಸುವಂತೆ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುವವನಾಗಿದ್ದಾನೆ. 29 ಏಕೆಂದರೆ ಯಾವನೂ ತನ್ನ ದೇಹವನ್ನು ದ್ವೇಷಿಸುವುದಿಲ್ಲ. ಪ್ರತಿಯೊಬ್ಬನು ತನ್ನ ದೇಹವನ್ನು ಪೋಷಿಸಿ ಜಾಗ್ರತೆಯಿಂದ ನೋಡಿಕೊಳ್ಳುತ್ತಾನೆ. ಕ್ರಿಸ್ತನು ಸಭೆಗೋಸ್ಕರ ಮಾಡುವಂಥದ್ದು ಅದೇ ಆಗಿದೆ. 30 ಏಕೆಂದರೆ ನಾವು ಆತನ ದೇಹದ ಅಂಗಗಳಾಗಿದ್ದೇವೆ. 31 ಪವಿತ್ರ ಗ್ರಂಥವು ಹೇಳುವಂತೆ, “ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು ಮತ್ತು ಅವರಿಬ್ಬರು ಒಂದೇ ದೇಹವಾಗುವರು.”(A) 32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು. 33 ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ತಾನು ಪ್ರೀತಿಸುವಂತೆ ತನ್ನ ಹೆಂಡತಿಯನ್ನು ಪ್ರೀತಿಸಬೇಕು ಮತ್ತು ಸ್ತ್ರೀಯು ತನ್ನ ಗಂಡನಿಗೆ ಭಯಭಕ್ತಿಯಿಂದರಬೇಕು.
ಮಕ್ಕಳು ಮತ್ತು ತಂದೆತಾಯಿಗಳು
6 ಮಕ್ಕಳೇ, ಪ್ರಭುವಿನ ಚಿತ್ತಕ್ಕನುಸಾರವಾಗಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಅದು ನ್ಯಾಯಬದ್ಧವಾದದ್ದಾಗಿದೆ. 2 ದೇವಾಜ್ಞೆಯು ಹೇಳುವಂತೆ, “ನೀವು ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು.”(B) ಈ ಮೊದಲನೆಯ ಆಜ್ಞೆಯು ವಾಗ್ದಾನವನ್ನು ಒಳಗೊಂಡಿದೆ. 3 ಆ ವಾಗ್ದಾನವು ಇಂತಿದೆ: “ಆಗ ನಿಮಗೆ ಒಳ್ಳೆಯದಾಗುವುದು ಮತ್ತು ನೀವು ಭೂಮಿಯ ಮೇಲೆ ಬಹುಕಾಲ ಬದುಕುವಿರಿ.”(C)
4 ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ.
ಸೇವಕರು ಮತ್ತು ಯಜಮಾನರು
5 ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ. 6 ಅವರ ಮೆಚ್ಚಿಕೆಯನ್ನು ಗಳಿಸಿಕೊಳ್ಳಬೇಕೆಂದು ಅವರು ಗಮನಿಸುತ್ತಿರುವಾಗ ಮಾತ್ರ ಸೇವೆ ಮಾಡದೆ ನೀವು ಕ್ರಿಸ್ತನಿಗೆ ವಿಧೇಯರಾಗಿರುವಂತೆ ಅವರಿಗೆ ವಿಧೇಯರಾಗಿರಬೇಕು. ದೇವರಿಗೆ ಇಷ್ಟವಾದದ್ದನ್ನು ನೀವು ಪೂರ್ಣಹೃದಯದಿಂದ ಮಾಡಬೇಕು. 7 ನೀವು ಮಾಡತಕ್ಕ ಕೆಲಸವನ್ನು ಸಂತೋಷದಿಂದ ಮಾಡಿರಿ. ಕೇವಲ ಮನುಷ್ಯರ ಸೇವೆಯನ್ನು ಮಾಡುವವರಂತೆ ಮಾಡದೆ ಪ್ರಭುವಿನ ಸೇವೆಯನ್ನು ಮಾಡುವವರಂತೆ ಮಾಡಿರಿ. 8 ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು.
9 ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು.
Kannada Holy Bible: Easy-to-Read Version. All rights reserved. © 1997 Bible League International