Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಯೋಬನು 1:1

ಒಳ್ಳೆಯ ಮನುಷ್ಯನಾದ ಯೋಬನು

ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.

ಯೋಬನು 2:1-10

ಯೋಬನಿಗೆ ಎರಡನೆ ಪರೀಕ್ಷೆ

ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು. ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು.

ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು.

ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.

ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ![a] ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು. ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.

ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು.

ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು. ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು. ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.

10 ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.

ಕೀರ್ತನೆಗಳು 26

ರಚನೆಗಾರ: ದಾವೀದ.

26 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು.
    ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.
ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ.
    ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು.
ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ.
    ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು.
ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ.
    ನಾನು ಕಪಟಿಗಳ ಜೊತೆ ಸೇರುವವನಲ್ಲ.
ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ.
    ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ.

ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ[a] ಸುತ್ತಲೂ ನಡೆಯಲು
    ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.
ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು.
    ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು.
ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ
    ನನಗೆ ಎಷ್ಟೋ ಪ್ರಿಯವಾಗಿವೆ.

ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ.
    ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ.
10 ಅವರು ಜನರನ್ನು ವಂಚಿಸುವರು;
    ಕೆಟ್ಟಕಾರ್ಯಗಳನ್ನು ಮಾಡಲು ಲಂಚ ತೆಗೆದುಕೊಳ್ಳುವರು.
11 ನಾನಾದರೋ ನಿರಪರಾಧಿ.
    ನನಗೆ ಕರುಣೆತೋರಿ ನನ್ನನ್ನು ರಕ್ಷಿಸು.
12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ.
    ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು.

ಇಬ್ರಿಯರಿಗೆ 1:1-4

ದೇವರು ತನ್ನ ಮಗನ ಮೂಲಕ ಮಾತನಾಡಿದನು

ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು. ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು. ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು. ದೇವರು ಆತನಿಗೆ ದೇವದೂತರಿಗಿಂತ ಎಷ್ಟೋ ಶ್ರೇಷ್ಠವಾದ ಹೆಸರನ್ನು ದಯಪಾಲಿಸಿದನು. ಆತನು ದೇವದೂತರಿಗಿಂತ ಅಷ್ಟೊಂದು ಶ್ರೇಷ್ಠನಾದನು.

ಇಬ್ರಿಯರಿಗೆ 2:5-12

ಜನರನ್ನು ರಕ್ಷಿಸಲು ಕ್ರಿಸ್ತನು ಜನರಂತೆಯೇ ಆದನು

ಮುಂದೆ ಬರುವ ನೂತನ ಲೋಕವನ್ನು ಆಳಲು ದೇವರು ದೇವದೂತರನ್ನು ಆರಿಸಲಿಲ್ಲ. ಈಗ ನಾವು ನಿಮಗೆ ಹೇಳುತ್ತಿರುವುದು ಆ ಲೋಕದ ಕುರಿತಾಗಿಯೇ. ಅದನ್ನು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ:

“ದೇವರೇ, ನೀನು ಮಾನವರನ್ನು ಏಕೆ ನೆನಪುಮಾಡಿಕೊಳ್ಳಬೇಕು?
ನೀನು ಮನುಷ್ಯನಿಗೋಸ್ಕರ ಏಕೆ ಚಿಂತಿಸಬೇಕು?
    ಅವನು ಅಷ್ಟೊಂದು ಮುಖ್ಯನಾದವನೇ?
ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ.
    ನೀನು ಅವನಿಗೆ ವೈಭವವನ್ನೂ ಗೌರವವನ್ನೂ ಕಿರೀಟವಾಗಿ ಇಟ್ಟಿರುವೆ.
ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ.”(A)

ದೇವರು ಎಲ್ಲವನ್ನೂ ಆತನಿಗೆ ಅಧೀನಗೊಳಿಸಿದ್ದರೆ, ಆತನು ಆಳದೆ ಇರುವಂಥದ್ದು ಒಂದಾದರೂ ಇಲ್ಲ. ಆದರೆ ಸಮಸ್ತದ ಮೇಲೆ ಅವನು ಆಳ್ವಿಕೆ ಮಾಡುತ್ತಿರುವುದು ನಮಗಿನ್ನೂ ಕಾಣುತ್ತಿಲ್ಲ. ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.

10 ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.

11 ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ. 12 ಯೇಸು ಹೇಳುತ್ತಾನೆ:

“ದೇವರೇ, ನಿನ್ನನ್ನು ಕುರಿತು ನನ್ನ ಸಹೋದರ ಸಹೋದರಿಯರಿಗೆ ತಿಳಿಸುತ್ತೇನೆ;
    ನಿನ್ನ ಜನರೆಲ್ಲರ ಮುಂದೆ ನಿನ್ನ ಸ್ತೋತ್ರಗೀತೆಗಳನ್ನು ಹಾಡುತ್ತೇನೆ.”(B)

ಮಾರ್ಕ 10:2-16

ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ಪರೀಕ್ಷಿಸಲು, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.

ಯೇಸು, “ಮೋಶೆ ನಿಮಗೆ ಏನು ಆಜ್ಞಾಪಿಸಿದ್ದಾನೆ?” ಎಂದು ಉತ್ತರಿಸಿದನು.

ಫರಿಸಾಯರು, “ಒಬ್ಬನು ತನ್ನ ಹೆಂಡತಿಗೆ ವಿಚ್ಛೇದನ ಪತ್ರ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದಾನೆ” ಎಂದರು.[a]

ಯೇಸು, “ನಿಮ್ಮ ಮೊಂಡುತನದ ನಿಮಿತ್ತ ಮೋಶೆಯು ನಿಮಗೆ ಆ ಆಜ್ಞೆಯನ್ನು ಕೊಟ್ಟನು. ಆದರೆ ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ನಿರ್ಮಿಸಿದನು.’(A) ‘ಆದಕಾರಣ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಮತ್ತು ಅವರಿಬ್ಬರು ಒಂದೇ ಶರೀರವಾಗುವರು.’(B) ಆದ್ದರಿಂದ ಅವರು ಇಬ್ಬರಲ್ಲ, ಒಬ್ಬರೇ. ಹೀಗಿರಲು ದೇವರು ಸೇರಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.

10 ಶಿಷ್ಯರು ಮತ್ತು ಯೇಸು ಒಂದು ಮನೆಯಲ್ಲಿದ್ದಾಗ, ವಿವಾಹವಿಚ್ಛೇದನ ಪ್ರಶ್ನೆಯ ಬಗ್ಗೆ ಶಿಷ್ಯರು ಯೇಸುವನ್ನು ಮತ್ತೆ ಕೇಳಿದರು. 11 ಅದಕ್ಕೆ ಯೇಸು, “ತನ್ನ ಹೆಂಡತಿಯನ್ನು ಬಿಟ್ಟು, ಬೇರೆ ಸ್ತ್ರೀಯನ್ನು ಮದುವೆಯಾಗುವವನು ತನ್ನ ಹೆಂಡತಿಗೆ ದ್ರೋಹಮಾಡಿ ವ್ಯಭಿಚಾರಿಯಾಗಿದ್ದಾನೆ. 12 ತನ್ನ ಗಂಡನಿಗೆ ವಿಚ್ಛೇದನಪತ್ರ ಕೊಟ್ಟು ಬೇರೆ ಪುರುಷನನ್ನು ಮದುವೆಯಾಗುವ ಸ್ತ್ರೀಯೂ ವ್ಯಭಿಚಾರಿಣಿಯಾಗಿದ್ದಾಳೆ” ಎಂದು ಉತ್ತರಿಸಿದನು.

ಚಿಕ್ಕ ಮಕ್ಕಳಿಗೆ ಯೇಸುವಿನ ಆಶೀರ್ವಾದ

(ಮತ್ತಾಯ 19:13-15; ಲೂಕ 18:15-17)

13 ಜನರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಆಶೀರ್ವದಿಸಲೆಂದು ಅವರನ್ನು ಯೇಸುವಿನ ಬಳಿಗೆ ತಂದರು. ಆದರೆ ಮಕ್ಕಳನ್ನು ಯೇಸುವಿನ ಬಳಿಗೆ ತರಕೂಡದೆಂದು ಶಿಷ್ಯರು ಜನರನ್ನು ಗದರಿಸಿದರು. 14 ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ. 15 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು. 16 ನಂತರ ಯೇಸು ಮಕ್ಕಳನ್ನು ತನ್ನ ಕೈಗಳಿಂದ ಅಪ್ಪಿಕೊಂಡು ಅವರ ಮೇಲೆ ತನ್ನ ಕೈಗಳನ್ನಿಟ್ಟು ಆಶೀರ್ವದಿಸಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International