Revised Common Lectionary (Semicontinuous)
ರಚನೆಗಾರ: ದಾವೀದ.
39 “ನಾನು ಜಾಗರೂಕನಾಗಿ ಮಾತಾಡುವೆ.
ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ.
ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಅಂದುಕೊಂಡೆನು.
2 ನಾನು ಮೌನವಾಗಿದ್ದೆನು.
ಒಳ್ಳೆಯದನ್ನೂ ಹೇಳದೆ ಸುಮ್ಮನಿದ್ದೆನು.
ಆದರೆ ನನ್ನ ವೇದನೆಯು ಹೆಚ್ಚಾಯಿತು.
3 ನಾನು ಬಹುಕೋಪಗೊಂಡಿದ್ದೆ.
ಅದರ ಕುರಿತು ಆಲೋಚಿಸಿದಷ್ಟೂ ಕೋಪವು ಅಧಿಕವಾಯಿತು.
ಆಗ ನಾನು ಬಾಯಿತೆರೆದು,
4 ಯೆಹೋವನೇ, ನನ್ನ ಗತಿಯನ್ನು ತಿಳಿಸು!
ನನ್ನ ಈ ಅಲ್ಪ ಜೀವಿತವು ಇನ್ನೆಷ್ಟು ಕಾಲವಿರುವುದು?
ನಾನೆಷ್ಟು ಕಾಲ ಬದುಕುವೆ?
5 ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ.
ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು.
ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ.
ಯಾವನೂ ಸದಾಕಾಲ ಬದುಕುವುದಿಲ್ಲ!
6 ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ.
ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ.
ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.
7 ಯೆಹೋವನೇ, ನನಗಿರುವ ನಿರೀಕ್ಷೆ ಯಾವುದು?
ನನ್ನ ನಿರೀಕ್ಷೆಯು ನೀನೇ.
8 ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ಬಿಡಿಸು.
ಮೂರ್ಖರ ನಿಂದೆಗೆ ನನ್ನನ್ನು ಗುರಿಮಾಡಬೇಡ.
9 ನಾನು ಬಾಯಿತೆರೆದು ಮಾತಾಡುವುದಿಲ್ಲ.
ನೀನು ನ್ಯಾಯಕ್ಕೆ ತಕ್ಕಂತೆ ಮಾಡಿರುವೆ.
10 ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು.
ಇಲ್ಲವಾದರೆ, ನಾನು ಸತ್ತೇ ಹೋಗುವೆನು.
11 ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ.
ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ.
ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.
12 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು!
ನನ್ನ ಮೊರೆಗೆ ಕಿವಿಗೊಡು!
ನನ್ನ ಕಣ್ಣೀರನ್ನು ನೋಡು!
ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ.
ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.
13 ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ.
ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!
ಬಿಲ್ದದನಿಗೆ ಯೋಬನ ಉತ್ತರ
26 ಆಗ ಯೋಬನು ಹೀಗೆ ಉತ್ತರಕೊಟ್ಟನು:
2 “ನಿನ್ನಿಂದ ಬಲಹೀನನಿಗೆ ಎಷ್ಟೋ ಸಹಾಯವಾಯಿತು!
ನೀನು ನನ್ನ ಬಲಹೀನವಾದ ತೋಳುಗಳನ್ನು ಮತ್ತೆ ಬಲಗೊಳಿಸಿದೆ!
3 ಹೌದು, ಅಜ್ಞಾನಿಗೆ ಎಷ್ಟೋ ಒಳ್ಳೆಯ ಬುದ್ಧಿವಾದ ಮಾಡಿದೆ!
ನೀನು ಎಷ್ಟು ಜ್ಞಾನಿ ಎಂಬುದನ್ನು ತೋರಿಸಿಕೊಟ್ಟಿರುವೆ.[a]
4 ಇವುಗಳನ್ನು ತಿಳಿಸಲು ನಿನಗೆ ಯಾರು ಸಹಾಯ ಮಾಡಿದವರು?
ಯಾರ ಆತ್ಮವು ನಿನ್ನನ್ನು ಪ್ರೇರೇಪಿಸಿತು?
5 “ಸತ್ತವರ ಆತ್ಮಗಳು
ಭೂಗರ್ಭದಲ್ಲಿರುವ ಜಲರಾಶಿಗಳಲ್ಲಿ ನಡುಗುತ್ತವೆ.
6 ದೇವರಿಗೆ ಪಾತಾಳವೂ ಸ್ಪಷ್ಟವಾಗಿ ಕಾಣುತ್ತದೆ;
ಮರಣವು ಆತನಿಗೆ ಮರೆಯಾಗಿಲ್ಲ.
7 ದೇವರು ಶೂನ್ಯದ ಮೇಲೆ ಉತ್ತರದಿಕ್ಕಿನ ಆಕಾಶವನ್ನು ವಿಸ್ತರಿಸಿದನು.
ಆತನು ಭೂಮಿಯನ್ನು ಯಾವ ಆಧಾರವೂ ಇಲ್ಲದೆ ತೂಗುಹಾಕಿದ್ದಾನೆ.
8 ದೇವರು ಮೋಡಗಳನ್ನು ನೀರಿನಿಂದ ತುಂಬಿಸುವನು.
ಆದರೆ ಮೋಡಗಳು ನೀರಿನ ಭಾರದಿಂದ ಒಡೆದುಹೋಗದಂತೆ ನೋಡಿಕೊಳ್ಳುವನು.
9 ದೇವರು ತನ್ನ ಮೋಡಗಳನ್ನು ಹರಡಿ
ಪೂರ್ಣಚಂದ್ರನನ್ನು ಮರೆಮಾಡುವನು.
10 ದೇವರು ಸಮುದ್ರದ ಮೇಲೆ ಬೆಳಕು ಮತ್ತು ಕತ್ತಲೆಗಳು ಸಂಧಿಸುವ ಸ್ಥಳದಲ್ಲಿ
ಕ್ಷಿತಿಜವನ್ನು ಗಡಿರೇಖೆಯನ್ನಾಗಿ ಎಳೆದಿದ್ದಾನೆ.
11 ದೇವರು ಗದರಿಸುವಾಗ
ಆಕಾಶಮಂಡಲದ ಸ್ತಂಭಗಳು ಭಯದಿಂದ ನಡುಗುತ್ತವೆ.
12 ದೇವರ ಶಕ್ತಿಯು ಸಮುದ್ರವನ್ನು ಪ್ರಶಾಂತಗೊಳಿಸುವುದು.
ದೇವರ ಶಕ್ತಿಯು ರಹಬನ[b] ಸಹಾಯಕರನ್ನು ನಾಶಮಾಡುವುದು.
13 ಆತನ ಉಸಿರು ಆಕಾಶಮಂಡಲವನ್ನು ಶುಭ್ರಗೊಳಿಸುವುದು.
ಆತನ ಜ್ಞಾನವು ಓಡಿಹೋಗಲು ಪ್ರಯತ್ನಿಸಿದ ರಹಬನನ್ನು ನಾಶಮಾಡುವುದು.
14 ದೇವರ ಶಕ್ತಿಯುತವಾದ ಕಾರ್ಯಗಳಲ್ಲಿ ಇವು ಕೇವಲ ಒಂದು ಚಿಕ್ಕ ಭಾಗವಾಗಿವೆ.
ಆತನ ವಿಷಯವಾಗಿ ಸೂಕ್ಷ್ಮ ಧ್ವನಿಯನ್ನು ಮಾತ್ರ ಕೇಳಿದ್ದೇವೆ.
ಆತನ ಶಕ್ತಿಯ ಗರ್ಜನೆಯನ್ನು ಯಾರು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲರು?”
ಜನರ ಮಹಾಸಮೂಹ
9 ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು. 10 ಅವರು ಗಟ್ಟಿಯಾದ ಧ್ವನಿಯಲ್ಲಿ, “ಸಿಂಹಾಸನದ ಮೇಲೆ ಕುಳಿತುಕೊಳ್ಳುವ ನಮ್ಮ ಪ್ರಭುವಿಗೆ ಮತ್ತು ಕುರಿಮರಿಯಾದಾತನಿಗೆ ಜಯವು ಲಭಿಸಿತು” ಎಂದು ಕೂಗಿದರು. 11 ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು. 12 ಅವರು, “ಆಮೆನ್! ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸುತ್ತಿಯೂ ಗೌರವವೂ ಅಧಿಕಾರವೂ ಮತ್ತು ಬಲವೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್!” ಎಂದರು.
13 ಆಗ ಹಿರಿಯರಲ್ಲೊಬ್ಬನು, “ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡಿರುವ ಈ ಜನರು ಯಾರು! ಅವರು ಎಲ್ಲಿಂದ ಬಂದವರು?” ಎಂದು ನನ್ನನ್ನು ಕೇಳಿದನು.
14 “ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು.
ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ.[a] ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ. 15 ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ. 16 ಆ ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ. 17 ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.
Kannada Holy Bible: Easy-to-Read Version. All rights reserved. © 1997 Bible League International