Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 146

146 ಯೆಹೋವನಿಗೆ ಸ್ತೋತ್ರವಾಗಲಿ!
    ನನ್ನ ಮನವೇ, ಯೆಹೋವನನ್ನು ಸ್ತುತಿಸು!
ನನ್ನ ಜೀವಮಾನವೆಲ್ಲಾ ಯೆಹೋವನನ್ನು ಸ್ತುತಿಸುವೆನು;
    ಆತನನ್ನು ಸಂಕೀರ್ತಿಸುವೆನು.
ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ.
    ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.
ಮನುಷ್ಯರು ಸತ್ತು ಸಮಾಧಿಗೆ ಸೇರುವರು;
    ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.
ಯಾರಿಗೆ ದೇವರು ಸಹಾಯಕನೋ,
    ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.
ಯೆಹೋವನು ಆಕಾಶವನ್ನೂ ಭೂಮಿಯನ್ನೂ
    ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು.
ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.
ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ;
    ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ.
ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.
    ಯೆಹೋವನು ಕುರುಡರಿಗೆ ದೃಷ್ಟಿಕೊಡುವನು.
ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು.
    ಯೆಹೋವನು ನೀತಿವಂತರನ್ನು ಪ್ರೀತಿಸುವನು.
ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ.
    ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ.
    ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.
10 ಯೆಹೋವನು ಸದಾಕಾಲ ಆಳುವನು!
    ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು!

ಯೆಹೋವನಿಗೆ ಸ್ತೋತ್ರವಾಗಲಿ!

ರೂತಳು 2:10-14

10 ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.

11 ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವಿ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವಿ. 12 ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು[a] ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.

13 ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.

14 ಊಟದ ಸಮಯದಲ್ಲಿ ಬೋವಜನು ರೂತಳಿಗೆ, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳಿರಸದಲ್ಲಿ ಅದ್ದಿಕೊಂಡು ತಿನ್ನು” ಎಂದು ಹೇಳಿದನು.

ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು.

ಲೂಕ 10:25-37

ಒಳ್ಳೆಯ ಸಮಾರ್ಯದವನ ಸಾಮ್ಯ

25 ಆಗ ಧರ್ಮೋಪದೇಶಕನೊಬ್ಬನು ಯೇಸುವನ್ನು ಪರೀಕ್ಷಿಸಲು ಎದ್ದುನಿಂತು, “ಬೋಧಕನೇ, ನಾನು ನಿತ್ಯಜೀವ ಹೊಂದಲು ಏನು ಮಾಡಬೇಕು?” ಎಂದು ಕೇಳಿದನು.

26 ಯೇಸು ಅವನಿಗೆ, “ಧರ್ಮಶಾಸ್ತ್ರದಲ್ಲಿ ಇದರ ಕುರಿತು ಏನು ಬರೆದಿದೆ?” ಎಂದು ಕೇಳಿದನು.

27 ಅದಕ್ಕೆ ಅವನು, “‘ನೀನು ನಿನ್ನ ಪ್ರಭುವಾದ ದೇವರನ್ನು ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ಮತ್ತು ಪೂರ್ಣಮನಸ್ಸಿನಿಂದ ಪ್ರೀತಿಸಬೇಕು’(A) ಮತ್ತು ‘ನೀನು ನಿನ್ನನ್ನು ಪ್ರೀತಿಸುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು’(B) ಎಂದು ಬರೆದಿದೆ” ಎಂಬುದಾಗಿ ಹೇಳಿದನು.

28 ಯೇಸು, “ನಿನ್ನ ಉತ್ತರ ಸರಿಯಾಗಿದೆ. ನೀನು ಹಾಗೆಯೇ ಮಾಡು, ಆಗ ನಿನಗೆ ನಿತ್ಯಜೀವ ದೊರೆಯುವುದು” ಅಂದನು.

29 ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.

30 ಆಗ ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬ ಮನುಷ್ಯನು ಜೆರುಸಲೇಮಿನಿಂದ ಇಳಿದು ಜೆರಿಕೊವಿನ ಮಾರ್ಗವಾಗಿ ಹೋಗುತ್ತಿದ್ದನು. ಕೆಲವು ದರೋಡೆಗಾರರು ಅವನನ್ನು ಸುತ್ತುಗಟ್ಟಿದರು. ಅವರು ಅವನ ಬಟ್ಟೆಯನ್ನು ಹರಿದುಹಾಕಿ ಅವನನ್ನು ಹೊಡೆದರು. ಅವನು ಮೇಲೇಳಲಾರದೆ ನೆಲದಮೇಲೆ ಬಿದ್ದುಕೊಂಡನು. ದರೋಡೆಗಾರರು ಅವನನ್ನು ನೆಲದ ಮೇಲೆಯೇ ಬಿಟ್ಟುಹೋದರು. ಅವನು ಸಾಯುವ ಸ್ಥಿತಿಯಲ್ಲಿದ್ದನು.

31 “ಅದೇ ಸಮಯದಲ್ಲಿ ಯೆಹೂದ್ಯ ಯಾಜಕನು ಆ ದಾರಿಯಲ್ಲಿ ಹೋಗುತ್ತಿದ್ದನು. ಯಾಜಕನು ಆ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯಮಾಡದೆ, ತನ್ನ ಪ್ರಯಾಣವನ್ನು ಮುಂದುವರಿಸಿದನು. 32 ನಂತರ, ಒಬ್ಬ ಲೇವಿಯು ಅದೇ ದಾರಿಯಲ್ಲಿ ಹೋಗುತ್ತಾ ಅವನ ಹತ್ತಿರ ಬಂದನು. ಲೇವಿಯು ಗಾಯಗೊಂಡಿದ್ದ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯ ಮಾಡದೆ ತನ್ನ ಪ್ರಯಾಣವನ್ನು ಮುಂದುವರಿಸಿದನು.

33 “ಬಳಿಕ ಒಬ್ಬ ಸಮಾರ್ಯದವನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಾ ಆ ಸ್ಥಳಕ್ಕೆ ಬಂದನು. ಅವನು ಗಾಯಗೊಂಡಿದ್ದ ಮತ್ತು ದಾರಿಯಲ್ಲಿ ಬಿದ್ದುಕೊಂಡಿದ್ದ ಮನುಷ್ಯನನ್ನು ನೋಡಿ ಬಹಳ ಮರುಕಗೊಂಡನು. 34 ಸಮಾರ್ಯದವನು ಅವನ ಬಳಿಗೆ ಹೋಗಿ ಅವನ ಗಾಯಗಳಿಗೆ ಆಲಿವ್ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಬಟ್ಟೆಯಿಂದ ಕಟ್ಟಿದನು. ಸಮಾರ್ಯದವನು ಒಂದು ಕತ್ತೆಯ ಮೇಲೆ ಪ್ರಯಾಣ ಮಾಡುತ್ತಾ ಅಲ್ಲಿಗೆ ಬಂದಿದ್ದನು. ಗಾಯಗೊಂಡಿದ್ದ ಆ ಮನುಷ್ಯನನ್ನು ಅವನು ತನ್ನ ಕತ್ತೆಯ ಮೇಲೆ ಕುಳ್ಳಿರಿಸಿ, ಛತ್ರಕ್ಕೆ ಕರೆದುಕೊಂಡು ಹೋಗಿ, ಅವನನ್ನು ಆರೈಕೆ ಮಾಡಿದನು. 35 ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಆ ಛತ್ರದವನಿಗೆ ಕೊಟ್ಟು, ‘ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ’ ಎಂದು ಹೇಳಿದನು.”

36 ಯೇಸು ಅವನಿಗೆ, “ಈ ಮೂವರಲ್ಲಿ (ಯಾಜಕ, ಲೇವಿ ಮತ್ತು ಸಮಾರ್ಯದವನು) ಯಾವನು ದರೋಡೆಗಾರರಿಂದ ಗಾಯಗೊಂಡಿದ್ದ ಮನುಷ್ಯನಿಗೆ ಪ್ರೀತಿ ತೋರಿಸಿದನು?” ಎಂದು ಕೇಳಿದನು.

37 ಧರ್ಮೋಪದೇಶಕನು, “ಅವನಿಗೆ ಸಹಾಯ ಮಾಡಿದವನೇ” ಎಂದು ಉತ್ತರಿಸಿದನು.

ಆಗ ಯೇಸು ಅವನಿಗೆ, “ಹಾಗಾದರೆ, ನೀನು ಹೋಗಿ ನೆರೆಯವರಿಗೆ[a] ಹಾಗೆಯೇ ಮಾಡು!” ಎಂದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International