Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 3

ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ.

ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ.
    ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.
ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.

ಆದರೆ ಯೆಹೋವನೇ, ನೀನೇ ನನ್ನ ಗುರಾಣಿ.
    ನೀನೇ ನನ್ನ ಗೌರವಕ್ಕೆ ಆಧಾರ.
    ನನ್ನನ್ನು ಜಯವೀರನನ್ನಾಗಿ ಮಾಡು.

ನಾನು ಯೆಹೋವನಿಗೆ ಪ್ರಾರ್ಥಿಸಲು,
    ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.

ಯೆಹೋವನು ನನ್ನನ್ನು ಕಾಪಾಡುವುದರಿಂದ
    ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು.
ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ
    ನನಗೆ ಭಯವಿಲ್ಲ.

ಯೆಹೋವನೇ, ಎದ್ದೇಳು!
    ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು!
ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ
    ಅವರ ಹಲ್ಲುಗಳು ಉದುರಿಹೋಗುತ್ತವೆ.

ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು.
    ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.

ಧರ್ಮೋಪದೇಶಕಾಂಡ 26:5-10

ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು. ಈಜಿಪ್ಟಿನವರು ನಮ್ಮನ್ನು ಕಠಿಣವಾಗಿ ನೋಡಿಕೊಳ್ಳುತ್ತಿದ್ದರು. ನಮ್ಮನ್ನು ಗುಲಾಮರಾಗಿ ಉಪಯೋಗಿಸಿದರು. ನಮ್ಮನ್ನು ಹಿಂಸಿಸಿ, ಕಷ್ಟಕರವಾದ ಕೆಲಸವನ್ನು ಕೊಟ್ಟರು. ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಟ್ಟೆವು. ಆತನು ನಮ್ಮ ಕೂಗನ್ನು ಆಲಿಸಿದನು; ನಮ್ಮ ಸಂಕಟ, ವೇದನೆಗಳನ್ನು ನೋಡಿದನು. ಆಮೇಲೆ ಯೆಹೋವನು ತನ್ನ ಭುಜಪರಾಕ್ರಮದಿಂದ ನಮ್ಮನ್ನು ಈಜಿಪ್ಟಿನಿಂದ ಹೊರತಂದನು. ಆತನು ಅದ್ಭುತಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿದನು. ಅಲ್ಲಿಂದ ನಮ್ಮನ್ನು ಕರೆದುತಂದು ನಮಗೆ ಈ ಒಳ್ಳೆಯ ದೇಶವನ್ನು ಕೊಟ್ಟನು. 10 ಈಗ, ಯೆಹೋವನೇ, ನೀನು ಕೊಟ್ಟ ದೇಶದಲ್ಲಿ ಬೆಳೆದ ಬೆಳೆಯಲ್ಲಿ ಪ್ರಥಮ ಫಲಗಳನ್ನು ತಂದಿದ್ದೇನೆ.’

“ಆ ಪ್ರಥಮ ಬೆಳೆಯನ್ನು ನಿಮ್ಮ ದೇವರಾದ ಯೆಹೋವನ ಮುಂದೆ ಇಟ್ಟು ಆತನನ್ನು ಆರಾಧಿಸಬೇಕು.

ಇಬ್ರಿಯರಿಗೆ 10:32-39

ನಿಮ್ಮಲ್ಲಿರುವ ಸಂತೋಷ ಮತ್ತು ಧೈರ್ಯಗಳನ್ನು ಬಿಡಬೇಡಿ

32 ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ. 33 ಕೆಲವು ಸಂದರ್ಭಗಳಲ್ಲಿ ಜನರು ನಿಮಗೆ ದ್ವೇಷಮಯ ಸಂಗತಿಗಳನ್ನು ಹೇಳಿದರು ಹಾಗೂ ಅನೇಕ ಜನರ ಮುಂದೆ ನಿಮ್ಮನ್ನು ಹಿಂಸಿಸಿದರು. ಅದೇ ರೀತಿಯ ಹಿಂಸೆಗೆ ಗುರಿಯಾಗಿದ್ದ ಜನರಿಗೆ ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡಿದಿರಿ. 34 ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.

35 ಹಿಂದೆ ಹೊಂದಿದ್ದ ಧೈರ್ಯವನ್ನು ಬಿಟ್ಟುಬಿಡಬೇಡಿ. ನಿಮ್ಮ ಧೈರ್ಯಕ್ಕೆ ತಕ್ಕ ಪ್ರತಿಫಲವು ಸಿಗುತ್ತದೆ. 36 ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ. 37 ಆತನು ಹೀಗೆ ಹೇಳುತ್ತಾನೆ:

“ಸ್ವಲ್ಪಕಾಲದಲ್ಲಿಯೇ, ಬರುವಾತನು ಬರುತ್ತಾನೆ.
    ಆತನು ತಡಮಾಡುವುದಿಲ್ಲ.
38 ನೀತಿವಂತನು ನಂಬಿಕೆಯಿಂದಲೇ
    ಜೀವವನ್ನು ಹೊಂದಿಕೊಳ್ಳುವನು.
ಆದರೆ ಅವನು ಭಯದಿಂದ ಹಿಂಜರಿದರೆ
    ನಾನು ಅವನಲ್ಲಿ ಸಂತೋಷಪಡುವುದಿಲ್ಲ.”(A)

39 ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International