Revised Common Lectionary (Semicontinuous)
ಸ್ತುತಿಗೀತೆ. ರಚನೆಗಾರ: ಆಸಾಫ.
80 ಇಸ್ರೇಲನ್ನು ಕಾಯುವ ಕುರುಬನೇ,
ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ,
ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ,
ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.
2 ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು.
ಬಂದು ನಮ್ಮನ್ನು ರಕ್ಷಿಸು.
3 ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸು.
ನಮ್ಮನ್ನು ರಕ್ಷಿಸು! ನಮ್ಮನ್ನು ಸ್ವೀಕರಿಸು!
4 ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ?
ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ?
5 ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ.
ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ.
ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ.
6 ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ.
ಶತ್ರುಗಳು ನಮ್ಮನ್ನು ನೋಡಿ ನಗುವರು.
7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ.
ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.
ಹೊಸ ಒಡಂಬಡಿಕೆ
31 ಯೆಹೋವನು ಹೀಗೆಂದನು: “ನಾನು ಇಸ್ರೇಲರೊಂದಿಗೂ ಮತ್ತು ಯೆಹೂದ್ಯರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಸಮಯ ಬರುತ್ತಿದೆ. 32 ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.
33 ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು. 34 ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.
10 ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು.
11 ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ. 12 ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 13 ಶತ್ರುಗಳನ್ನು ತನ್ನ ಪಾದಪೀಠವನ್ನಾಗಿ ಮಾಡುವ ತನಕ ಕ್ರಿಸ್ತನು ಕಾಯುತ್ತಿದ್ದಾನೆ. 14 ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು.
15 ಪವಿತ್ರಾತ್ಮನು ನಮಗೆ ಇದರ ಬಗ್ಗೆ ತಿಳಿಸಿದ್ದಾನೆ. ಮೊದಲನೆಯದಾಗಿ ಆತನು ಹೇಳುವುದೇನೆಂದರೆ:
16 “ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ:
ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು;
ಅವರ ಮನಸ್ಸಿನ ಮೇಲೆ ಬರೆಯುವೆನು.”(A)
17 ನಂತರ ಆತನು ಹೇಳುವುದೇನೆಂದರೆ:
“ನಾನು ಅವರ ಪಾಪಗಳನ್ನು ಮತ್ತು ಅವರ ಕೆಟ್ಟಕಾರ್ಯಗಳನ್ನು ಕ್ಷಮಿಸುತ್ತೇನೆ.
ಅವುಗಳನ್ನು ಮತ್ತೆಂದಿಗೂ ನೆನಪು ಮಾಡಿಕೊಳ್ಳುವುದಿಲ್ಲ.”(B)
18 ಈ ಪಾಪಗಳೆಲ್ಲಾ ಕ್ಷಮಿಸಲ್ಪಟ್ಟ ಮೇಲೆ, ಅವುಗಳಿಗಾಗಿ ಮತ್ತೆ ಯಜ್ಞಗಳನ್ನು ಅರ್ಪಿಸುವುದು ಅಗತ್ಯವಿಲ್ಲ.
Kannada Holy Bible: Easy-to-Read Version. All rights reserved. © 1997 Bible League International