Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
1 ಸಮುವೇಲನು 2:18-20

18 ಆದರೆ ಬಾಲಕನಾದ ಸಮುವೇಲನು ಏಫೋದ್ ಎಂಬ ನಾರುಬಟ್ಟೆಯನ್ನು ಧರಿಸಿ ಯೆಹೋವನ ಸೇವೆ ಮಾಡುತ್ತಿದ್ದನು. 19 ಸಮುವೇಲನ ತಾಯಿಯು ಪ್ರತಿವರ್ಷವೂ ಒಂದು ಚಿಕ್ಕ ಮೇಲಂಗಿಯನ್ನು ಅವನಿಗಾಗಿ ತಯಾರಿಸಿ, ಗಂಡನೊಡನೆ ವಾರ್ಷಿಕ ಯಜ್ಞವನ್ನು ಅರ್ಪಿಸಲು ಶೀಲೋವಿಗೆ ಹೋದಾಗ ಅವನಿಗೆ ಕೊಡುತ್ತಿದ್ದಳು.

20 ಏಲಿಯು ಎಲ್ಕಾನನನ್ನು ಮತ್ತು ಅವನ ಹೆಂಡತಿಯಾದ ಹನ್ನಳನ್ನು ಆಶೀರ್ವದಿಸಿ, “ಹನ್ನಳು ಯೆಹೋವನನ್ನು ಪ್ರಾರ್ಥಿಸಿ ಪಡೆದ ಮಗನನ್ನು ಆತನಿಗೆ ಒಪ್ಪಿಸಿದ್ದರಿಂದ ಯೆಹೋವನು ಅವಳಿಗೆ ಬೇರೆ ಮಕ್ಕಳನ್ನು ಅನುಗ್ರಹಿಸಲಿ” ಎಂದು ಹೇಳಿದನು.

ಆಮೇಲೆ ಎಲ್ಕಾನ ಮತ್ತು ಹನ್ನ ಮನೆಗೆ ಹೋದರು.

1 ಸಮುವೇಲನು 2:26

26 ಬಾಲಕನಾದ ಸಮುವೇಲನು ದೊಡ್ಡವನಾಗುತ್ತಲೇ ಇದ್ದನು. ಅವನು ದೇವರಿಗೆ ಮತ್ತು ಜನರಿಗೆ ಪ್ರಿಯನಾದನು.

ಕೀರ್ತನೆಗಳು 148

148 ಯೆಹೋವನಿಗೆ ಸ್ತೋತ್ರವಾಗಲಿ!
ಮೇಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ!
ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ!
    ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ!
ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ!
    ಆಕಾಶದಲ್ಲಿರುವ ನಕ್ಷತ್ರಗಳೇ, ಬೆಳಕುಗಳೇ, ಆತನನ್ನು ಸ್ತುತಿಸಿರಿ!
ಆತನಿಗೆ ಸ್ತೋತ್ರಮಾಡಿರಿ!
    ಆತನ ಸರ್ವಸೈನ್ಯಗಳೇ ಆತನನ್ನು ಸ್ತುತಿಸಿರಿ!
ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು!
    ಆಕಾಶದ ಮೇಲಿರುವ ನೀರುಗಳೇ ಆತನನ್ನು ಸ್ತುತಿಸಿರಿ!
ಅವು ಯೆಹೋವನ ಹೆಸರನ್ನು ಸ್ತುತಿಸಲಿ.
    ಆತನು ಆಜ್ಞಾಪಿಸಲು ಅವುಗಳೆಲ್ಲಾ ಸೃಷ್ಟಿಯಾದವು!
ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು.
    ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು.
ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ!
    ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ!
ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ
    ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.
ಆತನು ಬೆಟ್ಟಗಳನ್ನೂ ಗುಡ್ಡಗಳನ್ನೂ
    ಹಣ್ಣಿನ ಮರಗಳನ್ನೂ ದೇವದಾರು ಮರಗಳನ್ನೂ ಸೃಷ್ಟಿಮಾಡಿದನು.
10 ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.
11 ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ
    ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು.
12 ಆತನು ಪ್ರಾಯಸ್ಥರಾದ ಸ್ತ್ರೀಪುರುಷರನ್ನೂ
    ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು.
13 ಯೆಹೋವನ ಹೆಸರನ್ನು ಕೊಂಡಾಡಿರಿ!
    ಆತನ ಹೆಸರನ್ನು ಶಾಶ್ವತವಾಗಿ ಸನ್ಮಾನಿಸಿರಿ!
    ಭೂಮ್ಯಾಕಾಶಗಳಲ್ಲಿರುವ ಸಮಸ್ತವೇ, ಆತನನ್ನು ಸ್ತುತಿಸು!
14 ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ.
    ಆತನ ಭಕ್ತರನ್ನು ಜನರು ಹೊಗಳುವರು.
    ಜನರು ಇಸ್ರೇಲರನ್ನು ಹೊಗಳುವರು.
ಆತನು ಹೋರಾಡುತ್ತಿರುವುದು ಅವರಿಗಾಗಿಯೇ.
    ಯೆಹೋವನಿಗೆ ಸ್ತೋತ್ರವಾಗಲಿ!

ಕೊಲೊಸ್ಸೆಯವರಿಗೆ 3:12-17

ಇತರರೊಂದಿಗೆ ನಿಮ್ಮ ಹೊಸ ಜೀವನ

12 ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13 ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಬೇರೆಯವರ ಮೇಲೆ ಹೇಳುವಂಥ ದೂರುಗಳು ನಿಮ್ಮಲ್ಲಿದ್ದರೂ ಕ್ಷಮಿಸಿಬಿಡಿರಿ. ಪ್ರಭುವು ನಿಮ್ಮನ್ನು ಕ್ಷಮಿಸಿದ್ದರಿಂದ ನೀವೂ ಇತರರನ್ನು ಕ್ಷಮಿಸಿರಿ. 14 ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯು ನಿಮ್ಮನ್ನೆಲ್ಲರನ್ನೂ ಸಂಪೂರ್ಣವಾದ ಒಗ್ಗಟ್ಟಿನಲ್ಲಿರಿಸುವುದು. 15 ಕ್ರಿಸ್ತನು ನೀಡುವ ಶಾಂತಿಯು ನಿಮ್ಮ ಆಲೋಚನಗಳನ್ನೆಲ್ಲ ತನ್ನ ಹತೋಟಿಯಲ್ಲಿಟ್ಟುಕೊಂಡಿರಲಿ. ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರಾದ್ದರಿಂದ ಶಾಂತಿಯಿಂದಿರಲು ಕರೆಯಲ್ಪಟ್ಟಿದ್ದೀರಿ. ಯಾವಾಗಲು ಕೃತಜ್ಞರಾಗಿರಿ.

16 ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ. 17 ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.

ಲೂಕ 2:41-52

ಬಾಲಕ ಯೇಸು

41 ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ[a] ಜೆರುಸಲೇಮಿಗೆ ಹೋಗುತ್ತಿದ್ದರು. 42 ಯೇಸುವಿಗೆ ಹನ್ನೆರಡು ವರ್ಷವಾಗಿದ್ದಾಗ ಎಂದಿನಂತೆ ಅವರು ಪಸ್ಕ ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದರು. 43 ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ 44 ಯೋಸೇಫನು ಮತ್ತು ಮರಿಯಳು ಒಂದು ದಿನವೆಲ್ಲ ಪ್ರಯಾಣ ಮಾಡಿದರು. ನಂತರ ಮಗನನ್ನು ಕಾಣದೆ ತಮ್ಮ ಕುಟುಂಬದವರ ಮತ್ತು ಆಪ್ತಸ್ನೇಹಿತರ ಮಧ್ಯದಲ್ಲಿ ಆತನಿಗಾಗಿ ಹುಡುಕತೊಡಗಿದರು. 45 ಆದರೆ ಅಲ್ಲೆಲ್ಲೂ ಕಾಣದೆ ಯೇಸುವನ್ನು ಹುಡುಕಲು ಜೆರುಸಲೇಮಿಗೆ ಮರಳಿಹೋದರು.

46 ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು. 47 ಆತನ ಮಾತುಗಳನ್ನು ಕೇಳಿ ಆತನ ತಿಳುವಳಿಕೆಗೂ ಆತನ ಬುದ್ಧಿವಂತಿಕೆಯ ಉತ್ತರಗಳಿಗೂ ಅವರೆಲ್ಲರೂ ಆಶ್ಚರ್ಯಪಟ್ಟರು. 48 ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.

49 ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು. 50 ಆದರೆ ಆತನ ಮಾತು ಅವರಿಗೆ ಅರ್ಥವಾಗಲಿಲ್ಲ.

51 ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು. 52 ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International