Revised Common Lectionary (Semicontinuous)
ಪ್ರವಾದಿಯಾಗಲು ಯೆಶಾಯನಿಗೆ ದೇವರಿಂದ ಕರೆ
6 ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು. 2 ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತ್ತಲೂ ನಿಂತಿದ್ದರು. ಆ ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು. 3 ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು. 4 ಅವರ ಗಟ್ಟಿಯಾದ ಸ್ವರಕ್ಕೆ ಬಾಗಿಲಿನ ನಿಲುವುಗಳು ಅಲುಗಾಡುತ್ತಿದ್ದವು; ಆಲಯವು ಹೊಗೆಯಿಂದ ತುಂಬಿಹೋಯಿತು.
5 ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.
6 ಯಜ್ಞವೇದಿಕೆಯ ಮೇಲೆ ಬೆಂಕಿ ಇತ್ತು. ಸೆರಾಫಿಯರಲ್ಲೊಬ್ಬನು ಇಕ್ಕುಳಿಯಲ್ಲಿ ಬೆಂಕಿಯೊಳಗಿಂದ ಉರಿಯುವ ಕೆಂಡವನ್ನು ತೆಗೆದು ನನ್ನ ಬಳಿಗೆ ಹಾರಿಬಂದನು. 7 ಆ ಸೆರಾಫಿಯನು ಉರಿಯುವ ಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿದನು. ಆಗ ಆ ದೂತನು, “ಇಗೋ, ಈ ಉರಿಯುವ ಕೆಂಡವು ನಿನ್ನ ತುಟಿಗಳಿಗೆ ತಗಲಿದ್ದರಿಂದ ನೀನು ಮಾಡಿದ ಕೆಟ್ಟಕಾರ್ಯಗಳೆಲ್ಲಾ ನಿನ್ನಿಂದ ತೊಲಗಿ ಹೋದವು. ಈಗ ನಿನ್ನ ಪಾಪವು ಅಳಿಸಿಹಾಕಲ್ಪಟ್ಟಿದೆ”[a] ಎಂದು ಹೇಳಿದನು.
8 ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು.
ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.
9 ಆಗ ಯೆಹೋವನು, “ನೀನು ಹೋಗಿ ಇದನ್ನು ಜನರಿಗೆ ಸಾರು: ‘ಸರಿಯಾಗಿ ಕೇಳಿಸಿಕೊಳ್ಳಿ, ಆದರೆ ಅರ್ಥಮಾಡಿಕೊಳ್ಳಬೇಡಿ. ಸೂಕ್ಷ್ಮವಾಗಿ ನೋಡಿ, ಆದರೆ ಕಲಿತುಕೊಳ್ಳಬೇಡಿ.’ 10 ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.
11 ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು.
ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.
12 ಜನರು ಬಹುದೂರ ಹೋಗುವಂತೆ ಯೆಹೋವನು ಮಾಡುವನು. ದೇಶದೊಳಗೆ ನಿರ್ಜನವಾದ ಸ್ಥಳಗಳು ಬೇಕಾದಷ್ಟು ಇರುವವು. 13 ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.
ಸ್ತುತಿಗೀತೆ. ರಚನೆಗಾರ: ದಾವೀದ.
138 ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು.
ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.
2 ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು.
ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು.
ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.
3 ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ
ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.
4 ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ
ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ.
5 ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು;
ಯಾಕೆಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು.
6 ಯೆಹೋವನೇ ಮಹೋನ್ನತನು.
ಆದರೂ ಆತನು ದೀನರಿಗೋಸ್ಕರ ಚಿಂತಿಸುವನು.
ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ.
ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.
7 ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು.
ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.
8 ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು.
ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು.
ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!
ಕ್ರಿಸ್ತನ ವಿಷಯವಾದ ಸುವಾರ್ತೆ
15 ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ. 2 ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.
3 ನಾನು ಸ್ವೀಕರಿಸಿಕೊಂಡ ಸಂದೇಶವನ್ನು ನಾನು ನಿಮಗೆ ತಿಳಿಸಿದೆನು. ಆ ಸಂಗತಿಗಳು ಬಹಳ ಮುಖ್ಯವಾದುವುಗಳಾಗಿವೆ. ಪವಿತ್ರ ಗ್ರಂಥವು ಹೇಳುವಂತೆ, ಕ್ರಿಸ್ತನು ನಮ್ಮ ಪಾಪಗಳಿಗೋಸ್ಕರವಾಗಿ ಸತ್ತು 4 ಹೂಳಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬಂದನು. 5 ಬಳಿಕ ಕ್ರಿಸ್ತನು ಪೇತ್ರನಿಗೆ ಕಾಣಿಸಿಕೊಂಡನು. ಅನಂತರ ಹನ್ನೆರಡು ಮಂದಿ ಅಪೊಸ್ತಲರಿಗೆ ಕಾಣಿಸಿಕೊಂಡನು. 6 ತರುವಾಯ, ಒಂದೇ ಸಮಯದಲ್ಲಿ ಐನೂರಕ್ಕಿಂತಲೂ ಹೆಚ್ಚು ಮಂದಿ ಸಹೋದರರಿಗೆ ಕಾಣಿಸಿಕೊಂಡನು. ಈ ಸಹೋದರರಲ್ಲಿ ಬಹುಮಂದಿ ಇಂದಿನವರೆಗೂ ಬದುಕಿದ್ದಾರೆ. ಆದರೆ ಕೆಲವರು ಸತ್ತುಹೋದರು. 7 ಬಳಿಕ ಕ್ರಿಸ್ತನು ಯಾಕೋಬನಿಗೆ ಕಾಣಿಸಿಕೊಂಡನು. ಅನಂತರ ಮತ್ತೊಮ್ಮೆ ಎಲ್ಲಾ ಅಪೊಸ್ತಲರಿಗೆ ಕಾಣಿಸಿಕೊಂಡನು. 8 ಕಟ್ಟಕಡೆಗೆ, ಕ್ರಿಸ್ತನು, ದಿನ ತುಂಬುವ ಮೊದಲೇ ಹುಟ್ಟಿದಂತಿದ್ದ ನನಗೆ ಕಾಣಿಸಿಕೊಂಡನು.
9 ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ. 10 ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.) 11 ಆದ್ದರಿಂದ ನಾನು ಬೋಧನೆ ಮಾಡಿದೆನೊ ಅಥವಾ ಇತರ ಅಪೊಸ್ತಲರು ಬೋಧನೆ ಮಾಡಿದರೊ ಎಂಬುದು ಮುಖ್ಯವಲ್ಲ. ನಾವೆಲ್ಲರೂ ಒಂದೇ ಸಂದೇಶವನ್ನು ಬೋಧಿಸುತ್ತೇವೆ ಮತ್ತು ನೀವು ನಂಬಿರುವುದೂ ಅದನ್ನೇ.
ಯೇಸುವನ್ನು ಹಿಂಬಾಲಿಸಿದ ಪೇತ್ರ, ಯಾಕೋಬ, ಯೋಹಾನ
(ಮತ್ತಾಯ 4:18-22; ಮಾರ್ಕ 1:16-20)
5 ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು. 2 ಸರೋವರದ ದಡದಲ್ಲಿ ನಿಂತಿದ್ದ ಎರಡು ದೋಣಿಗಳನ್ನು ಯೇಸು ನೋಡಿದನು. ಬೆಸ್ತರು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. 3 ಯೇಸು ಸೀಮೋನನ ದೋಣಿಯಲ್ಲಿ ಹತ್ತಿ ಕುಳಿತುಕೊಂಡು ದೋಣಿಯನ್ನು ದಡದಿಂದ ಸ್ವಲ್ಪದೂರಕ್ಕೆ ನೂಕಬೇಕೆಂದು ಸೀಮೋನನಿಗೆ ಹೇಳಿದನು.
4 ಉಪದೇಶ ಮಾಡಿದಮೇಲೆ ಯೇಸು ಸೀಮೋನನಿಗೆ, “ದೋಣಿಯನ್ನು ಆಳವಾದ ನೀರಿನ ಸ್ಥಳಕ್ಕೆ ನಡೆಸಿ, ಮೀನುಹಿಡಿಯಲು ನಿಮ್ಮ ಬಲೆಗಳನ್ನು ನೀರಿನಲ್ಲಿ ಹಾಕಿರಿ” ಎಂದು ಹೇಳಿದನು.
5 ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಒಂದು ಮೀನೂ ಸಿಕ್ಕಲಿಲ್ಲ. ಆದರೆ, ನೀನು ಹೇಳಿದ್ದರಿಂದ ಬೀಸುತ್ತೇವೆ” ಎಂದನು. 6 ಬೆಸ್ತರು ತಮ್ಮ ಬಲೆಗಳನ್ನು ನೀರಿನೊಳಗೆ ಬೀಸಿದಾಗ, ಅವರ ಬಲೆಗಳು ಹರಿದುಹೋಗುವಷ್ಟು ಮೀನುಗಳು ರಾಶಿರಾಶಿಯಾಗಿ ಬಲೆಗಳಲ್ಲಿ ತುಂಬಿಕೊಂಡವು. 7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸ್ನೇಹಿತರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಮೀನುಗಳನ್ನು ತುಂಬಿಸಲು ದೋಣಿಗಳೆರಡೂ ಮುಳುಗುವಂತಾದವು.
8-9 ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು. 10 ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಆಶ್ಚರ್ಯಪಟ್ಟರು. (ಇವರಿಬ್ಬರೂ ಸೀಮೋನನ ಪಾಲುಗಾರರಾಗಿದ್ದರು.)
ಯೇಸು ಸೀಮೋನನಿಗೆ, “ಭಯಪಡಬೇಡ. ಇಂದಿನಿಂದ ನೀನು ಮೀನನ್ನು ಹಿಡಿಯದೆ, ಮನುಷ್ಯರನ್ನು ಒಟ್ಟುಗೂಡಿಸಲು ದುಡಿಯುವೆ!” ಎಂದು ಹೇಳಿದನು.
11 ಅವರು ತಮ್ಮ ದೋಣಿಗಳನ್ನು ದಡಕ್ಕೆ ಸಾಗಿಸಿದ ಮೇಲೆ ಎಲ್ಲವನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
Kannada Holy Bible: Easy-to-Read Version. All rights reserved. © 1997 Bible League International