Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 120

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.

120 ನಾನು ಆಪತ್ತಿನಲ್ಲಿದ್ದಾಗ
    ಯೆಹೋವನಿಗೆ ಮೊರೆಯಿಟ್ಟೆನು.
    ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.
ಯೆಹೋವನೇ, ಸುಳ್ಳಾಡುವವರಿಂದಲೂ
    ವಂಚಕರಿಂದಲೂ ನನ್ನನ್ನು ರಕ್ಷಿಸು.

ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡನೆಯನ್ನು ಬಲ್ಲಿರಾ?
    ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು?
ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು.

ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು
    ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ[a] ವಾಸಿಸುವಂತಿರುವುದು.
ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ.
ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.

ಯೆರೆಮೀಯ 22:11-17

11 ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ. 12 ಈಜಿಪ್ಟಿನವರು ಅವನನ್ನು ತೆಗೆದುಕೊಂಡು ಹೋದ ಸ್ಥಳದಲ್ಲಿಯೇ ಸತ್ತುಹೋಗುವನು. ಅವನು ಮತ್ತೊಮ್ಮೆ ಈ ಪ್ರದೇಶವನ್ನು ನೋಡಲಾರನು.”

ರಾಜನಾದ ಯೆಹೋಯಾಕೀಮನ ಬಗ್ಗೆ ನ್ಯಾಯನಿರ್ಣಯ

13 “ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು.
    ಅವನು ತನ್ನ ಅರಮನೆಯನ್ನು ಕಟ್ಟಿಸುವದಕ್ಕೋಸ್ಕರ ದುರ್ನೀತಿಯನ್ನು ಅವಲಂಭಿಸಿದ್ದಾನೆ.
    ಮಹಡಿಯ ಮೇಲೆ ಕೋಣೆಗಳನ್ನು ಕಟ್ಟಿಸುವದಕ್ಕಾಗಿ ಅವನು ತನ್ನ ಜನರನ್ನು ವಂಚಿಸುತ್ತಿದ್ದಾನೆ.
    ಅವನು ತನ್ನ ಜನರಿಂದ ಬಿಟ್ಟಿಕೆಲಸವನ್ನು ಮಾಡಿಸುತ್ತಿದ್ದಾನೆ.
    ಅವರಿಂದ ಕೆಲಸ ಮಾಡಿಸಿಕೊಂಡು ಅವರಿಗೆ ಕೂಲಿಯನ್ನೇ ಕೊಡುವದಿಲ್ಲ.

14 “ಯೆಹೋಯಾಕೀಮನು,
    ‘ನಾನೇ ಒಂದು ದೊಡ್ಡ ಅರಮನೆಯನ್ನು ಕಟ್ಟಿಸುತ್ತೇನೆ.
    ನಾನು ಮಹಡಿಯ ಮೇಲೆ ದೊಡ್ಡದೊಡ್ಡ ಕೋಣೆಗಳನ್ನು ಕಟ್ಟಿಸುತ್ತೇನೆ’ ಎಂದು ಹೇಳುತ್ತಾನೆ.
ಅವನು ದೊಡ್ಡದೊಡ್ಡ ಕಿಟಕಿಗಳುಳ್ಳ ಮನೆಯನ್ನು ಕಟ್ಟಿಸುತ್ತಾನೆ.
    ದೇವದಾರಿನ ಹಲಗೆಗಳನ್ನು ಹೊದಿಸುತ್ತಾನೆ.
    ಅದಕ್ಕೆ ಕೆಂಪು ಬಣ್ಣವನ್ನು ಬಳಿಯುತ್ತಾನೆ.

15 “ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು
    ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ.
ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು.
    ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು.
    ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.
16 ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು.
    ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.
ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’
ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು,
    ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ.
ಇದು ಯೆಹೋವನಿಂದ ಬಂದ ಸಂದೇಶ:

17 “ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ.
    ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ.
ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ.
    ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”

ಲೂಕ 11:37-52

ಯೇಸು ಫರಿಸಾಯರನ್ನು ಖಂಡಿಸಿದನು

(ಮತ್ತಾಯ 23:1-36; ಮಾರ್ಕ 12:38-40; ಲೂಕ 20:45-47)

37 ಯೇಸು ಮಾತಾಡಿ ಮುಗಿಸಿದ ಮೇಲೆ ಫರಿಸಾಯನೊಬ್ಬನು ಯೇಸುವನ್ನು ತನ್ನ ಮನೆಗೆ ಊಟಕ್ಕೆ ಬರಬೇಕೆಂದು ಕರೆದನು. ಆದ್ದರಿಂದ ಯೇಸು ಅವನ ಮನೆಯೊಳಗೆ ಹೋಗಿ ಊಟಕ್ಕೆ ಕುಳಿತುಕೊಂಡನು. 38 ಆದರೆ ಯೇಸು ತನ್ನ ಕೈಗಳನ್ನು ತೊಳೆದುಕೊಳ್ಳದೆ ಊಟಕ್ಕೆ ಕುಳಿತಿರುವುದನ್ನು ಕಂಡಾಗ ಫರಿಸಾಯನಿಗೆ ಆಶ್ಚರ್ಯವಾಯಿತು. 39 ಪ್ರಭುವು (ಯೇಸು) ಅವನಿಗೆ ಹೇಳಿದ್ದೇನೆಂದರೆ: “ಫರಿಸಾಯರಾದ ನೀವು ಪಾತ್ರೆಯ ಮತ್ತು ಬಟ್ಟಲಿನ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ನಿಮ್ಮ ಒಳಭಾಗವು ಮೋಸದಿಂದಲೂ ಕೆಟ್ಟತನದಿಂದಲೂ ತುಂಬಿಹೋಗಿದೆ. 40 ನೀವು ಬುದ್ಧಿಹೀನರು! ಹೊರಭಾಗವನ್ನು ಮಾಡಿದಾತನೇ (ದೇವರು) ಒಳಭಾಗವನ್ನೂ ಮಾಡಿದ್ದಾನೆ. 41 ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.

42 “ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.

43 “ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸಭಾಮಂದಿರಗಳಲ್ಲಿ ಉನ್ನತಪೀಠಗಳನ್ನೂ ಮಾರುಕಟ್ಟೆಗಳಲ್ಲಿ ಜನರಿಂದ ಗೌರವವನ್ನೂ ಆಶಿಸುತ್ತೀರಿ. 44 ನೀವು ಮರೆಯಾಗಿರುವ ಸಮಾಧಿಗಳಂತಿದ್ದೀರಿ. ಜನರು ಸಮಾಧಿಗಳೆಂದು ತಿಳಿಯದೆ ಅವುಗಳ ಮೇಲೆ ನಡೆಯುತ್ತಾರೆ.”

ಧರ್ಮೋಪದೇಶಕನಿಗೆ ಯೇಸು ನೀಡಿದ ಉತ್ತರ

45 ಧರ್ಮೋಪದೇಶಕನೊಬ್ಬನು ಯೇಸುವಿಗೆ, “ಬೋಧಕನೇ, ನೀನು ಫರಿಸಾಯರ ಕುರಿತಾಗಿ ಈ ಸಂಗತಿಗಳನ್ನು ಹೇಳಿದಾಗ ನಮ್ಮನ್ನು ಸಹ ಖಂಡಿಸಿದಂತಾಯಿತು” ಎಂದು ಹೇಳಿದನು.

46 ಅದಕ್ಕೆ ಯೇಸು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ಜನರು ಅನುಸರಿಸಲಾಗದ ನಿಯಮಗಳನ್ನು ನೀವು ಮಾಡುತ್ತೀರಿ.[a] ಆ ನಿಯಮಗಳಿಗೆ ವಿಧೇಯರಾಗುವಂತೆ ಬೇರೆಯವರಿಗೆ ಬಲವಂತ ಮಾಡುತ್ತೀರಿ. ಆದರೆ ಆ ನಿಯಮಗಳಲ್ಲಿ ಒಂದನ್ನಾದರೂ ಪಾಲಿಸಲು ನೀವು ಪ್ರಯತ್ನಿಸುವುದಿಲ್ಲ. 47 ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಪ್ರವಾದಿಗಳಿಗೆ ಗೋರಿಗಳನ್ನು[b] ಕಟ್ಟುತ್ತೀರಿ. ಆದರೆ ಆ ಪ್ರವಾದಿಗಳನ್ನು ಕೊಂದವರು ನಿಮ್ಮ ಪಿತೃಗಳೇ! 48 ಇದರಿಂದಾಗಿ, ನಿಮ್ಮ ಪಿತೃಗಳು ಮಾಡಿದ ಕೃತ್ಯಗಳನ್ನು ನೀವು ಒಪ್ಪಿಕೊಂಡಿದ್ದೀರೆಂಬುದನ್ನು ಎಲ್ಲಾ ಜನರಿಗೆ ತೋರಿಸುತ್ತೀರಿ. ಅವರು ಪ್ರವಾದಿಗಳನ್ನು ಕೊಂದರು. ನೀವು ಆ ಪ್ರವಾದಿಗಳಿಗಾಗಿ ಗೋರಿಗಳನ್ನು ಕಟ್ಟುತ್ತೀರಿ! 49 ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’

50 “ಆದ್ದರಿಂದ ಲೋಕಾದಿಯಿಂದ ಹತರಾದ ಎಲ್ಲಾ ಪ್ರವಾದಿಗಳ ಸಾವಿಗೆ ಈ ಕಾಲದ ಜನರಾದ ನೀವು ದಂಡನೆ ಹೊಂದುವಿರಿ. 51 ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.

52 “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ದೇವರ ಕುರಿತಾಗಿ ಕಲಿಯಲು ಸಾಧನವಾಗಿರುವ ಬೀಗದ ಕೈಯನ್ನು ನೀವು ಬಚ್ಚಿಟ್ಟಿದ್ದೀರಿ. ನೀವೂ ಕಲಿಯುವುದಿಲ್ಲ, ಬೇರೆಯವರಿಗೂ ಕಲಿಯಲು ಬಿಡುವುದಿಲ್ಲ” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International