Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 99

99 ಯೆಹೋವನೇ ರಾಜನು!
    ಜನಾಂಗಗಳು ಭಯದಿಂದ ನಡುಗಲಿ.
ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ.
    ಭೂಮಿಯು ಭಯದಿಂದ ನಡುಗಲಿ.
ಚೀಯೋನಿನ ಯೆಹೋವನು ದೊಡ್ಡವನು!
    ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ.
ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ.
    ಆತನೇ ಪರಿಶುದ್ಧನು.
ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು.
    ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ.
    ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.
ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ,
    ಆತನ ಪವಿತ್ರ ಪಾದಪೀಠಕ್ಕೆ[a] ಅಡ್ಡಬೀಳಿರಿ.
ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು.
    ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು.
ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.
ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು.
    ಅವರು ಆಜ್ಞೆಗಳಿಗೆ ವಿಧೇಯರಾದರು.
    ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ.
    ನೀನು ಕ್ಷಮಿಸುವ ದೇವರೆಂದೂ
    ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.
ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ.
    ಆತನ ಪವಿತ್ರ ಪರ್ವತದ ಕಡೆಗೆ ಅಡ್ಡಬಿದ್ದು ಆತನನ್ನು ಆರಾಧಿಸಿರಿ.
    ನಮ್ಮ ದೇವರಾದ ಯೆಹೋವನೇ ಪರಿಶುದ್ಧನು!

ಧರ್ಮೋಪದೇಶಕಾಂಡ 9:1-5

ಯೆಹೋವನು ಇಸ್ರೇಲರೊಂದಿಗಿರುವನು

“ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ; ಅಲ್ಲಿಯ ಜನರು ಬಲಿಷ್ಠರಾಗಿದ್ದಾರೆ. ಅನಾಕ್ಯರು ಎತ್ತರವಾಗಿ ಬೆಳೆದವರು ಎಂದು ಆ ದೇಶಕ್ಕೆ ಹೋದ ಗೂಢಚಾರರು ನಿಮಗೆ ತಿಳಿಸಿದ್ದು ನೆನಪಿಲ್ಲವೇ? ‘ಅನಾಕ್ಯರ ಮುಂದೆ ಯಾರೂ ನಿಲ್ಲಲಾರರು’ ಎಂದು ಅವರು ಹೇಳಿದರು. ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.

“ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು. ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.

ಅಪೊಸ್ತಲರ ಕಾರ್ಯಗಳು 3:11-16

ಜನರಿಗೆ ಪೇತ್ರನ ವಿವರಣೆ

11 ಆ ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು.

12 ಆಗ ಪೇತ್ರನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ಇದನ್ನು ಕಂಡು ನೀವು ಯಾಕೆ ಆಶ್ಚರ್ಯಗೊಂಡಿರುವಿರಿ? ಈ ಮನುಷ್ಯನನ್ನು ನಡೆಯುವಂತೆ ಮಾಡಿದ್ದು ನಮ್ಮ ಶಕ್ತಿಯೆಂದು ನೀವು ನಮ್ಮನ್ನು ನೋಡುತ್ತಿರುವಿರಾ? ನಾವು ಒಳ್ಳೆಯವರಾಗಿರುವುದರಿಂದ ಈ ಕಾರ್ಯವಾಯಿತೆಂದು ಭಾವಿಸಿಕೊಂಡಿದ್ದೀರಾ? 13 ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ[a] ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ. 14 ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು[b] ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ. 15 ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ.

16 “ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International