Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 91:1-2

91 ಮಹೋನ್ನತನ ಮೊರೆಹೊಕ್ಕಿರುವವನು
    ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ
    ನನ್ನ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.

ಕೀರ್ತನೆಗಳು 91:9-16

ಯಾಕೆಂದರೆ ನಿನ್ನ ಭರವಸವು ಯೆಹೋವನಲ್ಲಿಯೇ.
    ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ.
10 ಯಾವ ಕೇಡೂ ನಿನಗೆ ಸಂಭವಿಸದು.
    ನಿನ್ನ ಮನೆಯಲ್ಲಿ ಯಾವ ರೋಗಗಳೂ ಇರದು.
11 ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.
12 ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು
    ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
13 ಸಿಂಹಗಳ ಮೇಲೆಯೂ ಮತ್ತು
    ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ.
14 ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು;
    ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.
15 ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು.
    ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು;
    ಅವರನ್ನು ತಪ್ಪಿಸಿ ಘನಪಡಿಸುವೆನು.
16 ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು;
    ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”

ವಿಮೋಚನಕಾಂಡ 6:1-13

ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.

ಬಳಿಕ ಯೆಹೋವನು ಮೋಶೆಗೆ, “ನಾನು ಯೆಹೋವನೇ. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕಾಣಿಸಿಕೊಂಡೆನು. ಅವರು ನನ್ನನ್ನು ‘ಎಲ್ ಶದ್ದಾಯ್’ (ಸರ್ವಶಕ್ತನಾದ ದೇವರು) ಎಂದು ಕರೆದರು. ಆದರೆ ನಾನು ನನ್ನನ್ನು ಯೆಹೋವ ಎಂಬ ನನ್ನ ಹೆಸರಿನಲ್ಲಿ ಅವರಿಗೆ ಗೊತ್ತುಪಡಿಸಿಕೊಳ್ಳಲಿಲ್ಲ. ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ. ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ. ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು. ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ. ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.

ಅಂತೆಯೇ ಮೋಶೆಯು ಇಸ್ರೇಲರಿಗೆ ತಿಳಿಸಿದನು. ಆದರೆ ಜನರು ಬಹು ಪ್ರಯಾಸಪಟ್ಟು ದುಡಿಯುತ್ತಿದ್ದುದರಿಂದ ಮೋಶೆಯ ಮಾತಿಗೆ ಕಿವಿಗೊಡುವಷ್ಟು ತಾಳ್ಮೆ ಅವರಿಗಿರಲಿಲ್ಲ.

10 ಆಗ ಯೆಹೋವನು ಮೋಶೆಗೆ, 11 “ಹೋಗು, ಇಸ್ರೇಲರನ್ನು ಈಜಿಪ್ಟಿನಿಂದ ಕಳುಹಿಸಬೇಕೆಂದು ಫರೋಹನಿಗೆ ಹೇಳು” ಅಂದನು.

12 ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ”[a] ಎಂದು ಹೇಳಿದನು.

13 ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.

ಅಪೊಸ್ತಲರ ಕಾರ್ಯಗಳು 7:35-42

35 “ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ. 36 ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.

37 “ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’(A) ಎಂದು ಹೇಳಿದನು. 38 ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.

39 “ಆದರೆ ಮೋಶೆಗೆ ವಿಧೇಯರಾಗಲು ನಮ್ಮ ಪಿತೃಗಳಿಗೆ ಇಷ್ಟವಿರಲಿಲ್ಲ. ಅವರು ಅವನನ್ನು ತಿರಸ್ಕರಿಸಿ, ಈಜಿಪ್ಟಿಗೆ ಹಿಂತಿರುಗಬೇಕೆಂದಿದ್ದರು. 40 ನಮ್ಮ ಪಿತೃಗಳು ಆರೋನನಿಗೆ, ‘ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು’(B) ಎಂದರು. 41 ಆದ್ದರಿಂದ ಆ ಜನರು ಕರುವಿನಾಕೃತಿಯಲ್ಲಿ ಒಂದು ವಿಗ್ರಹವನ್ನು ಮಾಡಿ, ಅದಕ್ಕೆ ಯಜ್ಞಗಳನ್ನು ಅರ್ಪಿಸಿದರು. ಆ ಜನರು ತಮ್ಮ ಕೈಯಾರೆ ಮಾಡಿಕೊಂಡ ವಿಗ್ರಹದ ವಿಷಯದಲ್ಲಿ ಬಹು ಸಂತೋಷಪಟ್ಟರು! 42 ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ,

‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ
    ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International