Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 17

ಪ್ರಾರ್ಥನೆ. ರಚನೆಗಾರ: ದಾವೀದ.

17 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು.
    ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ.
    ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ.
    ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ
ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ.
    ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
ನಿನ್ನ ಆಜ್ಞೆಗಳಿಗೆ ವಿಧೇಯನಾಗಲು
    ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.
ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ.
    ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.
ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ.
    ಆದ್ದರಿಂದ ಈಗಲೂ ನನಗೆ ಕಿವಿಗೊಡು.
ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ
    ನೀನು ಸಹಾಯಮಾಡುವೆ;
ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು.
    ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.
ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು.
    ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ.
ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು.
    ನನಗೆ ಕೇಡುಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.
10 ಆ ದುಷ್ಟರು ಗರ್ವಿಷ್ಠರಾಗಿದ್ದಾರೆ.
    ಅವರು ಜಂಬಕೊಚ್ಚಿಕೊಳ್ಳುತ್ತಾರೆ.
11 ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ;
    ಆಕ್ರಮಣಮಾಡಲು ಸಿದ್ಧರಾಗಿದ್ದಾರೆ.[a]
12 ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ;
    ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ.

13 ಯೆಹೋವನೇ, ಎದ್ದೇಳು,[b] ವೈರಿಗಳ ಬಳಿಗೆ ಹೋಗು.
    ಅವರನ್ನು ಶರಣಾಗತರನ್ನಾಗಿ ಮಾಡು.
    ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.
14 ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ
    ನನ್ನನ್ನು ತಪ್ಪಿಸಿ ಕಾಪಾಡು.
ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ.
    ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು.
    ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.

15 ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು.
    ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.

ಜೆಕರ್ಯ 3

ಪ್ರಧಾನ ಯಾಜಕನು

ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು. ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”

ಯೆಹೋಶುವನು ದೂತನ ಮುಂದೆ ನಿಂತುಕೊಂಡಿದ್ದನು. ಅವನ ವಸ್ತ್ರವು ಮಲಿನವಾಗಿತ್ತು. ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.

ಆಗ ನಾನು, “ಅವನ ತಲೆಯ ಮೇಲೆ ಶುಚಿಯಾದ ಪೇಟವನ್ನಿಡಿರಿ” ಎಂದು ಹೇಳಿದಾಗ ಅವರು ಅವನಿಗೆ ಶುಭ್ರವಾದ ಪೇಟವನ್ನು ಇಟ್ಟರು. ಯೆಹೋವನ ದೂತನು ಅಲ್ಲಿ ನಿಂತಿದ್ದಾಗಲೇ ಅವನಿಗೆ ನಿರ್ಮಲವಾದ ಬಟ್ಟೆಗಳನ್ನು ಧರಿಸಲು ಕೊಟ್ಟರು. ಆಗ ಯೆಹೋವನ ದೂತನು ಯೆಹೋಶುವನಿಗೆ ಹೀಗೆ ಹೇಳಿದನು.

ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ,
“ನಾನು ಹೇಳುವ ರೀತಿಯಲ್ಲಿ ಜೀವಿಸು.
    ನಾನು ಹೇಳುವ ರೀತಿಯಲ್ಲಿ ನಡೆ.
ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ.
    ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವೆ.
ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.
ಪ್ರಧಾನ ಯಾಜಕನಾದ ಯೆಹೋಶುವನೇ,
    ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ.
ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ.
    ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು.
    ಆತನ ಹೆಸರು ಕೊಂಬೆ.
ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು.
    ಆ ಕಲ್ಲಿನಲ್ಲಿ ಏಳು ಬದಿಗಳಿವೆ.
ನಾನು ಆ ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು.
    ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದುಹಾಕುವೆನೆಂದು ಅದು ತೋರಿಸುವುದು.”

10 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ:
“ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ
    ಕುಳಿತುಕೊಂಡು ಸಂಭಾಷಿಸುವರು.
ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ
    ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”

2 ಪೇತ್ರನು 2:4-21

ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.

ಬಹಳ ಹಿಂದೆ ಬದುಕಿದ್ದ ಕೆಟ್ಟ ಜನರನ್ನು ದೇವರು ದಂಡಿಸಿದನು. ಈ ಲೋಕದಲ್ಲಿ ತನಗೆ ವಿರುದ್ಧವಾದ ಜನರು ತುಂಬಿಕೊಂಡಿದ್ದಾಗ ಆತನು ಜಲಪ್ರಳಯವನ್ನು ಬರಮಾಡಿ ದನು. ಆದರೆ ನೋಹನನ್ನೂ ಅವನೊಂದಿಗಿದ್ದ ಏಳು ಮಂದಿಯನ್ನೂ ರಕ್ಷಿಸಿದನು. ಯೋಗ್ಯರಾಗಿ ಜೀವಿಸಬೇಕೆಂದು ಆ ಜನರಿಗೆ ತಿಳಿಸಿದವನೇ ನೋಹ.

ದೇವರು ಸೊದೋಮ್, ಗೊಮೋರ ಎಂಬ ಕೆಟ್ಟ ಪಟ್ಟಣಗಳನ್ನು ದಂಡಿಸಿದನು. ಆತನು ಆ ಪಟ್ಟಣಗಳಲ್ಲಿ ಏನೂ ಉಳಿಯದಂತೆ, ಸುಟ್ಟು ಬೂದಿಮಾಡಿದನು. ತನಗೆ ವಿರುದ್ಧವಾಗಿರುವ ಜನರಿಗೆ ಏನಾಗುತ್ತದೆ ಎಂಬುದಕ್ಕೆ ಆತನು ಆ ಪಟ್ಟಣಗಳನ್ನು ನಿದರ್ಶನಗಳನ್ನಾಗಿ ಇಟ್ಟಿದ್ದಾನೆ. ಆದರೆ ದೇವರು ಆ ಪಟ್ಟಣಗಳಿಂದ ಲೋಟನನ್ನು ರಕ್ಷಿಸಿದನು. ಲೋಟನು ನೀತಿವಂತನಾಗಿದ್ದನು. ದುಷ್ಟ ಜನರ ಕೆಟ್ಟ ನಡತೆಯಿಂದ ಅವನು ದುಃಖಗೊಂಡಿದ್ದನು. (ಲೋಟನು ನೀತಿವಂತನಾಗಿದ್ದನು. ಆದರೆ ಅವನು ಪ್ರತಿದಿನವೂ ಆ ದುಷ್ಟಜನರ ಮಧ್ಯೆ ಜೀವಿಸುತ್ತಿದ್ದನು. ಕೆಟ್ಟಕಾರ್ಯಗಳನ್ನು ನೋಡಿ ಮತ್ತು ಕೇಳಿ ಅವನ ಒಳ್ಳೆಯ ಹೃದಯವು ವೇದನೆಗೆ ಒಳಗಾಗಿತ್ತು.)

ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ. 10 ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ.

ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ. 11 ದೇವದೂತರು ಈ ಸುಳ್ಳುಬೋಧಕರಿಗಿಂತ ಹೆಚ್ಚು ಬಲಿಷ್ಠರಾಗಿದ್ದಾರೆ ಮತ್ತು ಹೆಚ್ಚು ಶಕ್ತಿಯುಳ್ಳವರಾಗಿದ್ದಾರೆ. ಆದರೂ ದೇವದೂತರು ಸುಳ್ಳುಬೋಧಕರನ್ನು ಪ್ರಭುವಿನ ಸನ್ನಿಧಿಯಲ್ಲಿ ದೂಷಿಸುವುದಿಲ್ಲ.

12 ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು. 13 ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ.

ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ. 14 ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ.

15 ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು. 16 ಆದರೆ ಅವನು ಮಾಡುತ್ತಿರುವುದು ತಪ್ಪೆಂದು ಒಂದು ಹೇಸರಕತ್ತೆಯು ಅವನಿಗೆ ತಿಳಿಸಿತು. ಅದು ಒಂದು ಮೂಕಪ್ರಾಣಿ. ಆದರೆ ಅದು ಮಾನವನಂತೆ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.

17 ಈ ಸುಳ್ಳುಬೋಧಕರು ನೀರಿಲ್ಲದ ಒರತೆಗಳಂತಿದ್ದಾರೆ. ಅವರು ಬಿರುಗಾಳಿಯಿಂದ ಬಡಿದುಕೊಂಡು ಹೋಗುವ ಮೋಡಗಳಂತಿದ್ದಾರೆ. ಅವರಿಗಾಗಿ ಒಂದು ಕಗ್ಗತ್ತಲಾದ ಸ್ಥಳವನ್ನು ಕಾದಿರಿಸಲಾಗಿದೆ. 18 ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ. 19 ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.

20 ಈ ಲೋಕದಲ್ಲಿನ ಕೆಟ್ಟಕಾರ್ಯಗಳಿಂದ ಆ ಜನರನ್ನು ಪಾರುಮಾಡಲಾಯಿತು. ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದರ ಮೂಲಕ ಅವರಿಗೆ ಬಿಡುಗಡೆಯಾಯಿತು. ಆದರೆ ಆ ಜನರು ತಮ್ಮ ಹಿಂದಿನ ಸಂಗತಿಗಳ ಕಡೆಗೆ ಹಿಂದಿರುಗಿಹೋದರೆ ಮತ್ತು ಅವುಗಳು ಅವರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವರು ಮೊದಲಿಗಿಂತಲೂ ಹೆಚ್ಚು ಕೆಟ್ಟುಹೋಗುತ್ತಾರೆ. 21 ಹೌದು, ಆ ಜನರು ಸರಿಯಾದ ಮಾರ್ಗವನ್ನು ತಿಳಿಯದೆ ಹೋಗಿದ್ದರೇ ಒಳ್ಳೆಯದಾಗುತ್ತಿತ್ತು. ಸರಿಯಾದ ಮಾರ್ಗವನ್ನು ಅರಿತುಕೊಂಡು, ಪವಿತ್ರ ಬೋಧನೆಗಳಿಗೆ ವಿಮುಖರಾಗುವುದಕ್ಕಿಂತ ಅದನ್ನು ತಿಳಿದುಕೊಳ್ಳದಿದ್ದರೇ ಚೆನ್ನಾಗಿರುತ್ತಿತ್ತು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International