Revised Common Lectionary (Semicontinuous)
ರಚನೆಗಾರ: ದಾವೀದ.
27 ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ.
ನಾನು ಯಾರಿಗೂ ಭಯಪಡಬೇಕಿಲ್ಲ!
ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ.
ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!
2 ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ
ತಾವೇ ಮುಗ್ಗರಿಸಿ ಬೀಳುವರು.
3 ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ.
ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ.
ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.
4 ನನ್ನ ಜೀವಮಾನವೆಲ್ಲಾ
ಯೆಹೋವನ ಆಲಯದಲ್ಲಿ ವಾಸಿಸುತ್ತಾ
ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ
ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ
ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.
5 ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ;
ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ.
ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.
6 ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು!
ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು.
ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.
7 ಯೆಹೋವನೇ, ನನ್ನ ಸ್ವರವನ್ನು ಕೇಳಿ ನನಗೆ ಉತ್ತರಿಸು.
ನನ್ನನ್ನು ಕರುಣಿಸು.
8 ಯೆಹೋವನೇ, ನಾನು ನಿನ್ನೊಂದಿಗೆ ಹೃದಯಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ.
ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ.
9 ಯೆಹೋವನೇ, ನನಗೆ ವಿಮುಖನಾಗಬೇಡ:
ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ.
ನನ್ನ ದೇವರೇ, ನನ್ನ ರಕ್ಷಕನು ನೀನೇ.
ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ!
10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು;
ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
11 ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ
ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
12 ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ.
ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ.
ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ.
13 ಯೆಹೋವನ ಒಳ್ಳೆಯತನವನ್ನು
ನಾನು ಸಾಯುವುದಕ್ಕಿಂತ ಮುಂಚೆ[a] ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ.
14 ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!
ಬಲವಾಗಿಯೂ ಧೈರ್ಯವಾಗಿಯೂ ಇರಿ!
ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!
26 ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಸುಸ್ವಾಗತ!”
“ಯೆಹೋವನ ಆಲಯದಿಂದ ನಾವು ನಿನ್ನನ್ನು ಆಶೀರ್ವದಿಸುತ್ತೇವೆ!
27 ಯೆಹೋವನೇ ದೇವರು.
ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು.
ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು.
28 ಯೆಹೋವನೇ, ನೀನೇ ನನ್ನ ದೇವರು; ನಾನು ನಿನಗೆ ಕೃತಜ್ಞತೆ ಸಲ್ಲಿಸುವೆನು.
ನಾನು ನಿನ್ನನ್ನು ಘನಪಡಿಸುವೆನು!
29 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು.
ಆತನ ಪ್ರೀತಿಯು ಶಾಶ್ವತವಾದದ್ದು.
ಜೆರುಸಲೇಮಿನ ಜನರಿಗೆ ಯೇಸು ನೀಡಿದ ಎಚ್ಚರಿಕೆ
(ಲೂಕ 13:34-35)
37 “ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ. 38 ಈಗ ನಿನ್ನ ಮನೆಯು ಸಂರ್ಪೂಣವಾಗಿ ಬರಿದಾಗಿಬಿಟ್ಟಿದೆ. 39 ನಾನು ನಿನಗೆ ಹೇಳುವುದೇನೆಂದರೆ, ‘ಪ್ರಭುವಿನ ಹೆಸರಿನಲ್ಲಿ ಬರುವಾತನನ್ನು ದೇವರು ಆಶೀರ್ವದಿಸಲಿ’(A) ಎಂದು ನೀನು ಹೇಳುವ ತನಕ ನನ್ನನ್ನು ನೋಡುವುದೇ ಇಲ್ಲ.”
Kannada Holy Bible: Easy-to-Read Version. All rights reserved. © 1997 Bible League International