Revised Common Lectionary (Semicontinuous)
9 ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ;
ನನ್ನನ್ನು ಕರುಣಿಸು.
ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ,
ನನ್ನ ಗಂಟಲು ನೋಯುತ್ತಿದೆ, ಹೊಟ್ಟೆಯೂ ನೋಯುತ್ತಿದೆ.
10 ನನ್ನ ಜೀವಿತವು[a] ದುಃಖದಲ್ಲಿ ಕೊನೆಗೊಳ್ಳುತ್ತಿದೆ.
ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ.
ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ.
ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ.[b]
11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ;
ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು;
ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು;
ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.
12 ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು.
ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇಬಿಟ್ಟಿದ್ದಾರೆ.
13 ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ.
ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.
14 ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ.
ನೀನೇ ನನ್ನ ದೇವರು.
15 ನನ್ನ ಜೀವವು ನಿನ್ನ ಕೈಯಲ್ಲಿದೆ.
ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು[c] ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.
16 ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ.
ಕರುಣೆಯಿಂದ ನನ್ನನ್ನು ರಕ್ಷಿಸು!
10 ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು. 11 ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು.
ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು. 12 ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
ನಮ್ಮ ರಕ್ಷಣೆಯು ಧರ್ಮಶಾಸ್ತ್ರಕ್ಕಿಂತ ಉತ್ತಮವಾದುದು
2 ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು. 2 ದೇವರು ತನ್ನ ದೂತರ ಮೂಲಕ ಕೊಟ್ಟ ವಾಕ್ಯವು ನಿಜವಾದದ್ದೆಂದು ತೋರಿಸಲ್ಪಟ್ಟಿದೆ. ಯೆಹೂದ್ಯರು ಈ ವಾಕ್ಯಕ್ಕೆ ವಿರುದ್ಧವಾಗಿ ತಪ್ಪು ಮಾಡಿದಾಗಲೆಲ್ಲಾ ಮತ್ತು ಅವಿಧೇಯರಾದಾಗಲೆಲ್ಲಾ ತಕ್ಕ ದಂಡನೆ ಹೊಂದುತ್ತಿದ್ದರು. 3 ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು. 4 ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.
ಜನರನ್ನು ರಕ್ಷಿಸಲು ಕ್ರಿಸ್ತನು ಜನರಂತೆಯೇ ಆದನು
5 ಮುಂದೆ ಬರುವ ನೂತನ ಲೋಕವನ್ನು ಆಳಲು ದೇವರು ದೇವದೂತರನ್ನು ಆರಿಸಲಿಲ್ಲ. ಈಗ ನಾವು ನಿಮಗೆ ಹೇಳುತ್ತಿರುವುದು ಆ ಲೋಕದ ಕುರಿತಾಗಿಯೇ. 6 ಅದನ್ನು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ:
“ದೇವರೇ, ನೀನು ಮಾನವರನ್ನು ಏಕೆ ನೆನಪುಮಾಡಿಕೊಳ್ಳಬೇಕು?
ನೀನು ಮನುಷ್ಯನಿಗೋಸ್ಕರ ಏಕೆ ಚಿಂತಿಸಬೇಕು?
ಅವನು ಅಷ್ಟೊಂದು ಮುಖ್ಯನಾದವನೇ?
7 ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ.
ನೀನು ಅವನಿಗೆ ವೈಭವವನ್ನೂ ಗೌರವವನ್ನೂ ಕಿರೀಟವಾಗಿ ಇಟ್ಟಿರುವೆ.
8 ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ.”(A)
ದೇವರು ಎಲ್ಲವನ್ನೂ ಆತನಿಗೆ ಅಧೀನಗೊಳಿಸಿದ್ದರೆ, ಆತನು ಆಳದೆ ಇರುವಂಥದ್ದು ಒಂದಾದರೂ ಇಲ್ಲ. ಆದರೆ ಸಮಸ್ತದ ಮೇಲೆ ಅವನು ಆಳ್ವಿಕೆ ಮಾಡುತ್ತಿರುವುದು ನಮಗಿನ್ನೂ ಕಾಣುತ್ತಿಲ್ಲ. 9 ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.
Kannada Holy Bible: Easy-to-Read Version. All rights reserved. © 1997 Bible League International