Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 30

ದೇವಾಲಯದ ಪ್ರತಿಷ್ಠೆಗಾಗಿ ರಚಿಸಲ್ಪಟ್ಟಿದೆ. ರಚನೆಗಾರ: ದಾವೀದ.

30 ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ;
    ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ;
    ಆದ್ದರಿಂದ ನಿನ್ನನ್ನು ಕೊಂಡಾಡುವೆನು.
ನನ್ನ ದೇವರಾದ ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದಾಗ
    ನೀನು ನನ್ನನ್ನು ಗುಣಪಡಿಸಿದೆ.
ಯೆಹೋವನೇ, ನೀನು ನನ್ನನ್ನು ಸಾವಿನಿಂದ ಬದುಕಿಸಿದೆ;
    ಪಾತಾಳಕ್ಕೆ ಇಳಿದುಹೋಗದಂತೆ ನನ್ನನ್ನು ಕಾಪಾಡಿದೆ.[a]

ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ!
    ಆತನ ಪರಿಶುದ್ಧ ಹೆಸರನ್ನು[b] ಕೊಂಡಾಡಿರಿ.
ಆತನ ಕೋಪವು ಕ್ಷಣಮಾತ್ರವಿರುವುದು.
    ಆತನ ಪ್ರೀತಿಯಾದರೋ ಶಾಶ್ವತವಾದದ್ದು.
ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ
    ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.

ನಾನು ಸುರಕ್ಷಿತವಾಗಿದ್ದಾಗ
    ನನಗೆ ಕೇಡೇ ಇಲ್ಲವೆಂದುಕೊಂಡೆನು.
ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ
    ನನ್ನನ್ನು ಯಾವುದೂ ಸೋಲಿಸಲಾರದು ಎಂದುಕೊಂಡೆನು.
ಆದರೆ ನೀನು ನನಗೆ ವಿಮುಖನಾದಾಗ
    ಭಯದಿಂದ ನಡುಗತೊಡಗಿದೆ.
ಯೆಹೋವನೇ, ನಾನು ನಿನಗೆ ಅಭಿಮುಖನಾಗಿ ಪ್ರಾರ್ಥಿಸಿದೆ;
    ಕರುಣೆತೋರು ಎಂದು ನಿನ್ನನ್ನು ಕೇಳಿಕೊಂಡೆ.
“ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ,
    ಅದರಿಂದ ಒಳ್ಳೆಯದೇನಾದೀತು?
ಸತ್ತವರು ಕೇವಲ ಮಣ್ಣಿನಲ್ಲಿ ಬಿದ್ದಿರುವರು!
    ಅವರು ನಿನ್ನನ್ನು ಸ್ತುತಿಸುವುದಿಲ್ಲ!
    ಶಾಶ್ವತವಾದ ನಿನ್ನ ನಂಬಿಗಸ್ತಿಕೆಯ ಕುರಿತು ಅವರು ಹೇಳುವುದಿಲ್ಲ.
10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಕರುಣೆತೋರು!
    ಯೆಹೋವನೇ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡೆನು.

11 ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು
    ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ.
ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ
    ಹರ್ಷವಸ್ತ್ರಗಳನ್ನು ಹೊದಿಸಿದೆ.
12 ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು.
    ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.

ಆದಿಕಾಂಡ 18:1-8

ಮೂವರು ಸಂದರ್ಶಕರು

18 ಅಬ್ರಹಾಮನು ಮಮ್ರೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಅಂದು ಬಿಸಿಲಿನ ತಾಪದಿಂದಾಗಿ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು. ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ, “ಸ್ವಾಮಿಗಳೇ, ನಿಮ್ಮ ಸೇವಕನಾದ ನನ್ನ ಜೊತೆಯಲ್ಲಿ ಸ್ವಲ್ಪ ಸಮಯವಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಲು ನೀರನ್ನು ತಂದುಕೊಡುವೆನು. ನೀವು ಮರದ ಕೆಳಗೆ ವಿಶ್ರಾಂತಿ ತೆಗೆದುಕೊಳ್ಳಿರಿ. ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು.

ಆ ಮೂವರು ಪುರುಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.

ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು. ಬಳಿಕ ಅವನು ತನ್ನ ಪಶುಗಳಿದ್ದಲ್ಲಿಗೆ ಓಡಿಹೋಗಿ ಉತ್ತಮವಾದ ಎಳೆಕರುವನ್ನು ತೆಗೆದು ಸೇವಕನಿಗೆ ಕೊಟ್ಟು, “ಬೇಗನೇ ಕರುವನ್ನು ಕೊಯ್ದು, ಊಟಕ್ಕೆ ಸಿದ್ಧಮಾಡು” ಎಂದು ಹೇಳಿದನು. ಅಬ್ರಹಾಮನು ಆ ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಆ ಮೂವರು ಊಟ ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು.

ಲೂಕ 14:12-14

ನಿಮಗೆ ಪ್ರತಿಫಲ ದೊರೆಯುವುದು

12 ಬಳಿಕ ಯೇಸು ತನ್ನನ್ನು ಆಮಂತ್ರಿಸಿದ ಫರಿಸಾಯನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ನಿನ್ನ ಸ್ನೇಹಿತರನ್ನು, ಸಹೋದರರನ್ನು, ಸಂಬಂಧಿಕರನ್ನು ಮತ್ತು ಶ್ರೀಮಂತರಾದ ನೆರೆಯವರನ್ನು ಆಮಂತ್ರಿಸಿದರೆ, ಅವರೂ ನಿನ್ನನ್ನು ಮತ್ತೊಮ್ಮೆ ಊಟಕ್ಕೆ ಆಮಂತ್ರಿಸುವರು. ಆಗ ಅದೇ ನಿನಗೆ ಪ್ರತಿಫಲವಾಗುವುದು. 13 ಅದರ ಬದಲು, ನೀನು ಔತಣ ಮಾಡಿಸುವಾಗ ಬಡಜನರನ್ನು, ಕುಂಟರನ್ನು ಮತ್ತು ಕುರುಡರನ್ನು ಆಮಂತ್ರಿಸು. 14 ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International