Revised Common Lectionary (Semicontinuous)
68 “ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ.
ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.
69 ತನ್ನ ಸೇವಕನಾದ ದಾವೀದನ ಮನೆತನದಿಂದ
ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ.
70 ಇದನ್ನು ಆತನು ಪೂರ್ವಕಾಲದ
ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ.
71 ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ
ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ.
72 ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ
ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.
73 ನಮ್ಮ ವೈರಿಗಳ ಹಿಡಿತದಿಂದ ನಮ್ಮನ್ನು ಬಿಡಿಸುವುದಾಗಿ ದೇವರು ನಮ್ಮ ಪಿತೃವಾದ ಅಬ್ರಹಾಮನಿಗೆ ವಾಗ್ದಾನ ಮಾಡಿದ್ದಾನೆ.
74-75 ಏಕೆಂದರೆ ನಮ್ಮ ಜೀವಮಾನವೆಲ್ಲಾ ನಾವು ಆತನ ಸನ್ನಿಧಿಯಲ್ಲಿ ನೀತಿವಂತರೂ ಪರಿಶುದ್ಧರೂ ಆಗಿದ್ದು
ಭಯವಿಲ್ಲದೆ ಆತನ ಸೇವೆ ಮಾಡಬೇಕೆಂಬುದೇ ಆತನ ಉದ್ದೇಶವಾಗಿತ್ತು.
76 “ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ.
ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.
77 ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.
78 “ನಮ್ಮ ದೇವರ ಮಹಾಕರುಣೆಯಿಂದ
ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.
79 ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು.
ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”
ದುಷ್ಟರಾಜರ ವಿರುದ್ಧ ನ್ಯಾಯನಿರ್ಣಯ
22 ಯೆಹೋವನು ಹೇಳಿದನು: “ಯೆರೆಮೀಯನೇ, ರಾಜನ ಅರಮನೆಗೆ ಹೋಗು. ಯೆಹೂದದ ರಾಜನ ಬಳಿಗೆ ಹೋಗಿ ಅಲ್ಲಿ ಈ ಸಂದೇಶವನ್ನು ಸಾರು. 2 ‘ಯೆಹೂದದ ರಾಜನೇ, ಯೆಹೋವನಿಂದ ಬಂದ ಸಂದೇಶವನ್ನು ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನ್ನ ಅಧಿಕಾರಿಗಳು ಚೆನ್ನಾಗಿ ಕೇಳಬೇಕು. ಜೆರುಸಲೇಮಿನ ದ್ವಾರಗಳ ಮೂಲಕ ಬರುವ ನಿನ್ನ ಜನರೆಲ್ಲರೂ ಯೆಹೋವನ ಸಂದೇಶವನ್ನು ಕೇಳಬೇಕು. 3 ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ. 4 ನೀವು ಈ ಆಜ್ಞೆಗಳನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಈ ದ್ವಾರಗಳಿಂದ ಜೆರುಸಲೇಮ್ ನಗರವನ್ನು ಪ್ರವೇಶಿಸುವುದು ಮುಂದುವರೆಯುತ್ತದೆ. ಆ ರಾಜರು ತಮ್ಮ ಅಧಿಕಾರಿಗಳೊಂದಿಗೆ ಈ ದ್ವಾರಗಳಿಂದ ಬರುತ್ತಾರೆ. ಆ ಅರಸರು, ಅವರ ಅಧಿಕಾರಿಗಳು, ಅವರ ಜನರು, ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಕುಳಿತುಕೊಂಡು ಬರುವರು. 5 ನೀವು ಈ ಆಜ್ಞೆಗಳನ್ನು ಪಾಲಿಸದಿದ್ದರೆ ರಾಜನ ಅರಮನೆಯನ್ನು ನಾಶಮಾಡಲಾಗುವುದು. ಅದು ಕಲ್ಲುಬಂಡೆಗಳ ರಾಶಿಯಾಗುವದೆಂದು ಯೆಹೋವನಾದ ನಾನು ಆಣೆಯಿಟ್ಟುಕೊಂಡು ಹೇಳುತ್ತೇನೆ’” ಎಂದು ಯೆಹೋವನು ನುಡಿದನು.
6 ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ:
“ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ,
ಲೆಬನೋನಿನ ಪರ್ವತದಂತೆ ಎತ್ತರವಾಗಿದೆ.
ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ.
ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.
7 ಅರಮನೆಯನ್ನು ಹಾಳುಮಾಡಲು ನಾನು ಜನರನ್ನು ಕಳುಹಿಸುತ್ತೇನೆ.
ಪ್ರತಿಯೊಬ್ಬನ ಹತ್ತಿರ ಆ ಮನೆಯನ್ನು ಹಾಳುಮಾಡಲು ಬೇಕಾಗುವ ಸಾಧನಗಳಿರುವವು.
ಆ ಜನರು ನಿನ್ನ ಸುಂದರವಾದ ಮತ್ತು ಗಟ್ಟಿಯಾದ ದೇವದಾರಿನ ತೊಲೆಗಳನ್ನು ಕಡಿದುಹಾಕುತ್ತಾರೆ.
ಅವರು ಆ ತೊಲೆಗಳನ್ನು ಬೆಂಕಿಯಲ್ಲಿ ಎಸೆಯುತ್ತಾರೆ.
8 “ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು?’ ಎಂದು ಒಬ್ಬರನ್ನೊಬ್ಬರು ಕೇಳುವರು. 9 ಆ ಪ್ರಶ್ನೆಗೆ ಈ ಉತ್ತರ: ‘ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಅನುಸರಣೆಯನ್ನು ಬಿಟ್ಟುಬಿಟ್ಟರು. ಅವರು ಬೇರೆ ದೇವರುಗಳ ಸೇವೆಯನ್ನು ಮಾಡಿ ಪೂಜಿಸಿದರು.’”
ರಾಜನಾದ ಯೋಹಾಜನ ಬಗ್ಗೆ ನ್ಯಾಯನಿರ್ಣಯ
10 ಸತ್ತ ರಾಜನ ಬಗ್ಗೆ ಅಳಬೇಡಿ.
ಅವನಿಗೋಸ್ಕರ ಅಳಬೇಡಿ.
ಆದರೆ ಇಲ್ಲಿಂದ ಹೋಗುತ್ತಿರುವ
ರಾಜನ ಬಗ್ಗೆ ಗಟ್ಟಿಯಾಗಿ ರೋಧಿಸಿರಿ.
ಅವನು ಮತ್ತೆ ಇಲ್ಲಿಗೆ ಬರುವದಿಲ್ಲ. ಆದ್ದರಿಂದ ಅವನಿಗೋಸ್ಕರ ರೋಧಿಸಿರಿ.
ಯೋಹಾಜನು ತನ್ನ ಜನ್ಮಭೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.
11 ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ. 12 ಈಜಿಪ್ಟಿನವರು ಅವನನ್ನು ತೆಗೆದುಕೊಂಡು ಹೋದ ಸ್ಥಳದಲ್ಲಿಯೇ ಸತ್ತುಹೋಗುವನು. ಅವನು ಮತ್ತೊಮ್ಮೆ ಈ ಪ್ರದೇಶವನ್ನು ನೋಡಲಾರನು.”
ರಾಜನಾದ ಯೆಹೋಯಾಕೀಮನ ಬಗ್ಗೆ ನ್ಯಾಯನಿರ್ಣಯ
13 “ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು.
ಅವನು ತನ್ನ ಅರಮನೆಯನ್ನು ಕಟ್ಟಿಸುವದಕ್ಕೋಸ್ಕರ ದುರ್ನೀತಿಯನ್ನು ಅವಲಂಭಿಸಿದ್ದಾನೆ.
ಮಹಡಿಯ ಮೇಲೆ ಕೋಣೆಗಳನ್ನು ಕಟ್ಟಿಸುವದಕ್ಕಾಗಿ ಅವನು ತನ್ನ ಜನರನ್ನು ವಂಚಿಸುತ್ತಿದ್ದಾನೆ.
ಅವನು ತನ್ನ ಜನರಿಂದ ಬಿಟ್ಟಿಕೆಲಸವನ್ನು ಮಾಡಿಸುತ್ತಿದ್ದಾನೆ.
ಅವರಿಂದ ಕೆಲಸ ಮಾಡಿಸಿಕೊಂಡು ಅವರಿಗೆ ಕೂಲಿಯನ್ನೇ ಕೊಡುವದಿಲ್ಲ.
14 “ಯೆಹೋಯಾಕೀಮನು,
‘ನಾನೇ ಒಂದು ದೊಡ್ಡ ಅರಮನೆಯನ್ನು ಕಟ್ಟಿಸುತ್ತೇನೆ.
ನಾನು ಮಹಡಿಯ ಮೇಲೆ ದೊಡ್ಡದೊಡ್ಡ ಕೋಣೆಗಳನ್ನು ಕಟ್ಟಿಸುತ್ತೇನೆ’ ಎಂದು ಹೇಳುತ್ತಾನೆ.
ಅವನು ದೊಡ್ಡದೊಡ್ಡ ಕಿಟಕಿಗಳುಳ್ಳ ಮನೆಯನ್ನು ಕಟ್ಟಿಸುತ್ತಾನೆ.
ದೇವದಾರಿನ ಹಲಗೆಗಳನ್ನು ಹೊದಿಸುತ್ತಾನೆ.
ಅದಕ್ಕೆ ಕೆಂಪು ಬಣ್ಣವನ್ನು ಬಳಿಯುತ್ತಾನೆ.
15 “ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು
ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ.
ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು.
ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು.
ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.
16 ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು.
ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.
ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’
ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು,
ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ.
ಇದು ಯೆಹೋವನಿಂದ ಬಂದ ಸಂದೇಶ:
17 “ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ.
ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ.
ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ.
ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”
ಜೀವಂತವಾದ ನಿರೀಕ್ಷೆ
3 ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ. 4 ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.
5 ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು. 6 ಇದು ನಿಮ್ಮನ್ನು ಬಹಳ ಸಂತೋಷಗೊಳಿಸುತ್ತದೆ. ಆದರೆ ಈಗ ಸ್ವಲ್ಪಕಾಲ ಅನೇಕ ವಿಧವಾದ ತೊಂದರೆಗಳು ನಿಮ್ಮಲ್ಲಿ ದುಃಖವನ್ನು ಉಂಟುಮಾಡಬಹುದು. 7 ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
8 ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ. 9 ನಿಮ್ಮ ನಂಬಿಕೆಗೆ ಒಂದು ಗುರಿಯಿದೆ. ನಿಮ್ಮ ಆತ್ಮವನ್ನು ರಕ್ಷಿಸಬೇಕೆಂಬುದೇ ಆ ಗುರಿ. ನಿಮ್ಮ ಗುರಿಯಾಗಿರುವ ರಕ್ಷಣೆಯನ್ನು ಹೊಂದಿಕೊಳ್ಳುವಿರಿ.
Kannada Holy Bible: Easy-to-Read Version. All rights reserved. © 1997 Bible League International